ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ರಾಜ್ಯಾದ್ಯಂತ ಡಿ.14ರಂದು ರಾಷ್ಟ್ರೀಯ ಲೋಕ್-ಅದಾಲತ್‌ನ್ನು ಹಮ್ಮಿಕೊಂಡಿದ್ದು, ಮಂಡ್ಯ ಜಿಲ್ಲೆಯ 7 ತಾಲ್ಲೂಕುಗಳಲ್ಲಿಯೂ ಸಹ ಲೋಕ್ ಅದಾಲತ್ ಮುಖಾಂತರ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಪೂರ್ವಭಾವಿ ಬೈಠಕ್‌ಗಳನ್ನು ನಡೆಸುತ್ತಿದೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆದ ಆನಂದ ಎಂ ತಿಳಿಸಿದ್ದಾರೆ.
ಆಸ್ತಿ ವಿವಾದಗಳನ್ನು ಒಳಗೊಂಡಂತೆ ಸಿವಿಲ್ ವ್ಯಾಜ್ಯಗಳು, ವಿಭಾಗದ ದಾವೆಗಳು, ಹಣವಸೂಲಾತಿ ದಾವೆಗಳು, ನಿರ್ದಿಷ್ಟ ಪರಿಹಾರ ಕಾಯ್ದೆಯಡಿ ದಾಖಲಿಸಿರುವ ದಾವೆಗಳು, (MVC) ಮೋಟಾರು ವಾಹನಗಳ ಪ್ರಕರಣಗಳು, MMRD ಪ್ರಕರಣಗಳು, ಜೀವನಾಂಶ ಪ್ರಕರಣ, ದಾಂಪತ್ಯ ಪುನರ್ ಸ್ಥಾಪನೆ ಪ್ರಕರಣಗಳು, ರಾಜಿ ಆಗಬಹುದಾದಂತಹ ಕ್ರಿಮಿನಲ್ ಪ್ರಕರಣಗಳನ್ನು ಮತ್ತು ಚೆಕ್ ಬೌನ್ಸ್ ಪ್ರಕರಣಗಳನ್ನು ರಾಜಿಗೆ ತೆಗೆದುಕೊಂಡು ಆಯಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್ ನ್ಯಾಯಾಲಯಗಳನ್ನು ರಚಿಸಿ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೋಕ ಅದಾಲತ್‌ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವಂತಹ ಪ್ರಕರಣಗಳ ಜೊತೆಗೆ ನ್ಯಾಯಾಲಯಕ್ಕೆ ದಾಖಲಾಗುವ ಮುನ್ನ ಅಂದರೆ, ವ್ಯಾಜ್ಯಪೂರ್ವ ಪ್ರಕರಣಗಳು (ಬ್ಯಾಂಕ್ ವಸೂಲಾತಿ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಕಾರ್ಮಿಕ ವಿವಾದ ಪ್ರಕರಣಗಳು) ಇಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಭಯ ಪಕ್ಷಗಾರರಿಗೆ ನೋಟೀಸ್ ನೀಡಿ ಕರೆಸಿ ಪ್ರಾಧಿಕಾರದ ವತಿಯಿಂದ ಪೂರ್ವಭಾವಿ ಬೈಠಕ್ ನಡೆಸಿ ಅದಾಲತ್ ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಹಾಗೂ ಇಂತಹ ಪ್ರಕರಣಗಳಿಗೆ ನ್ಯಾಯಾಲಯಕ್ಕೆ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ವಕೀಲರ ಮುಖಾಂತರ ಅಥವಾ ಖುದ್ದಾಗಿ ಪ್ರಾಧಿಕಾರಕ್ಕೆ ಭೇಟಿ ನೀಡಿ ಪ್ರಕರಣವನ್ನು ರಾಜಿಮಾಡಿಕೊಳ್ಳಬಹುದಾಗಿರುತ್ತದೆ.
ಈ ಬಾರಿಯ ಲೋಕ್-ಅದಾಲತ್‌ನಲ್ಲಿ ಕಕ್ಷಿದಾರರು ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸಿ ಕಕ್ಷಿದಾರರಿಗೆ ಅನುಕೂಲವಾಗುವ ರೀತಿಯಲ್ಲಿ ನ್ಯಾಯದಾನ ಮಾಡಬೇಕೆಂಬ ಇಚ್ಛೆಯಿಂದ ಈ ಮೇಲಿನ ಎಲ್ಲಾ ಪ್ರಕರಣಗಳನ್ನು ತೆಗೆದುಕೊಂಡಿದ್ದು, ಜನ ಸಾಮಾನ್ಯರು ಹಾಗೂ ಕಕ್ಷಿದಾರರು ಇದರ ಸದುಪಯೋಗವನ್ನು ಪಡೆದುಕೊಂಡು ಲೋಕ್ ಅದಾಲತ್ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವ ಮೂಲಕ ಲೋಕ್-ಅದಾಲತ್ ಅನ್ನು ಯಶಸ್ವಿಗೊಳಿಸಲು ಅವರು ಕೋರಿದ್ದಾರೆ.




