ಚನ್ನಪಟ್ಟಣ ಚುನಾವಣೆಯ ಸೋಲಿನ ನಂತರ ಜೆಡಿಎಸ್ ಪಕ್ಷ ಸಂಘಟನೆಯ ಜವಾಬ್ದಾರಿಯನ್ನು ಯುವನಾಯಕ ನಿಖಿಲ್ ಕುಮಾರಸ್ವಾಮಿ ಅವರಿಗೆ ವಹಿಸಲು ಪಕ್ಷದ ವರಿಷ್ಟರು ತೀರ್ಮಾನಿಸಿದ್ದಾರೆ.
2028 ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ವೇಳೆಗೆ ಜೆಡಿಎಸ್ ಪ್ರಬಲ ಇರುವ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿ ಪಕ್ಷ ಸಂಘಟನೆ ಮಾಡಲು ಮಾಸ್ಟರ್ ಪ್ಲಾನ್ ಮಾಡಲಾಗಿದ್ದು, ಇದರಿಂದಾಗಿ ಜೆಡಿಎಸ್ ಪಕ್ಷ ಸಂಘಟನೆ ಜವಾಬ್ದಾರಿ ನಿಖಿಲ್ ಹೆಗಲಿಗೆ ನೀಡಲು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ನಿರ್ಧಾರ ಮಾಡಿದ್ದಾರೆಂದು ತಿಳಿದು ಬಂದಿದೆ.
ಸತತ ಮೂರು ಚುನಾವಣೆಯಲ್ಲಿ ಸೋಲನ್ನು ಕಂಡ ನಿಖಿಲ್ ಕುಮಾರಸ್ವಾಮಿ ಸೈಲೆಂಟಾಗದೆ ಮತ್ತೊಂದು ಜವಾಬ್ದಾರಿ ಹೊರಲು ಸಿದ್ದರಾಗುತ್ತಿದ್ದಾರೆ. ಎಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಕ್ಷದ ಸಂಘಟನೆಗೆ ಸಮಯ ನೀಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಿಖಿಲ್ ಅದರ ಜವಾಬ್ದಾರಿ ಹೊರಲು ಸಿದ್ದರಾಗುತ್ತಿದ್ದಾರೆ ಎಂದು ತಿಳಿದು ಬಂದಿದೆ.
100 ಕ್ಷೇತ್ರಗಳಲ್ಲಿ ಸ್ಪರ್ಧೆ ಗೆ ಪ್ಲಾನ್
ಸತತ ಮೂರು ಸೋಲಿನ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಮತ್ತೆ ಉತ್ಸಾಹ ಮೂಡಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಜವಾಬ್ದಾರಿ ಹೊರಬೇಕು ಎಂಬ ಅಭಿಪ್ರಾಯ ಪಕ್ಷದಲ್ಲಿ ವ್ಯಕ್ತವಾಗಿದೆ. ಸೋಲಿನ ವಿಚಾರವನ್ನೇ ಸಹಾನುಭೂತಿಯಾಗಿ ಮಾರ್ಪಡಿಸುವ ಮೂಲಕ ಕಾರ್ಯಕರ್ತರ ಮನ ಗೆಲ್ಲುವ ಪ್ರಯತ್ನಕ್ಕೆ ನಿಖಿಲ್ ಕೈಹಾಕಿದ್ದಾರೆ.
ಕಳೆದ ಚುನಾವಣೆಯಲ್ಲಿ 19 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದ ಜೆಡಿಎಸ್ ಈ ಬಾರಿ ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದೆ. ಈ ಮೈತ್ರಿಯ ಲಾಭವನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಕನಿಷ್ಠ ನೂರು ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿಕೊಂಡಿದೆ. ಈ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಪಕ್ಷ ಸಂಘಟನೆ ಮಾಡಲು ನಿರ್ಧಾರ ಮಾಡಲಾಗಿದೆ.
ಇನ್ನು ವಿಧಾನಸಭೆ ಚುನಾವಣೆ ಮಾತ್ರವಲ್ಲ, ಮುಂಬರುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಬಿಬಿಎಂಪಿ ಚುನಾವಣೆಯನ್ನೂ ಟಾರ್ಗೆಟ್ ಮಾಡಿಕೊಂಡು ಪಕ್ಷ ಸಂಘಟನೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.




