Thursday, November 19, 2026

ಪ್ರಾಯೋಗಿಕ ಆವೃತ್ತಿ

ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡಕ್ಕೆ ವಿಶಿಷ್ಟವಾದ ಹೆಸರಿದೆ ; ನಿಂಗರಾಜೇಗೌಡ

ಕರ್ನಾಟಕದ ಇತಿಹಾಸವೇ ಕನ್ನಡವಾಗಿದ್ದು, ಭಾವನೆ, ಸಂಸ್ಕೃತಿ, ಇತಿಹಾಸದ ಮಿಶ್ರಣವೇ ಕನ್ನಡ ಎಂದು ಮೈಸೂರು ವಿವಿ ಸಿಂಡಿಕೇಟ್ ನ ಮಾಜಿ ಸದಸ್ಯ ಈ.ಸಿ.ನಿಂಗರಾಜೇಗೌಡ ಅಭಿಪ್ರಾಯಿಸಿದರು.

ಭಾನುವಾರ ಮಂಡ್ಯ ನಗರದ ಗಾಂಧಿಭವನದಲ್ಲಿ ಡಾ.ಜೀಶಂಪ ಸಾಹಿತ್ಯ ವೇದಿಕೆ ಹಾಗೂ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಫಿಲಂಸ್ ಸಂಯುಕ್ತಾಶ್ರಯದಲ್ಲಿ ಮಂಡ್ಯದ ಗಾಂಧಿಭವನದಲ್ಲಿ ಆಯೋಜಿಸಲಾಗಿದ್ದ ಕನ್ನಡ ಹಬ್ಬ, ಕವಿಗೋಷ್ಟಿ ಹಾಗೂ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ 165ಕ್ಕೂ ಅಧಿಕ ಭಾಷೆಗಳನ್ನು ಜನ ಬಳಸುತ್ತಾರೆ. ಆದರೆ ಮಂಡ್ಯದಂತಹ ಜಿಲ್ಲೆಯಲ್ಲಿ ಕನ್ನಡ ಭಾಷೆಯ ಅತಿ ಹೆಚ್ಚು ಬಳಕೆ ಶ್ಲಾಘನೀಯ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಮಹಾಭಾರತ ಸಂದರ್ಭದಲ್ಲೇ ಕನ್ನಡ, ಕರುನಾಡು ಹುಟ್ಟಿದೆ ಎಂಬ ಹೆಗ್ಗಳಿಕೆ ಇದೆ. ಅಲ್ಲಿಂದ ಕನ್ನಡ ಹುಟ್ಟಿ, ಬೆಳೆಯುತ್ತಾ ಬಂದಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಇದೀಗ ಕನ್ನಡಕ್ಕೆ ತನ್ನದೇ ಆದ ವಿಶಿಷ್ಟ ಹೆಸರಿದೆ ಎಂದು ಬಣ್ಣಿಸಿದರು.

ಐದು ಕೋಟಿಗೂ ಹೆಚ್ಚು ಜನರು ವಿಶ್ವಾದ್ಯಂತ ಕನ್ನಡ ಮಾತನಾಡುತ್ತಾರೆ. ಐವತ್ತಕ್ಕೂ ಹೆಚ್ಚು ದೇಶದಲ್ಲಿ ಕನ್ನಡ ಮಾತನಾಡುವ ಕನ್ನಡಿಗರಿದ್ದಾರೆ. ಕನ್ನಡ ಮತ್ತಷ್ಟು ಬೆಳೆಯಬೇಕೆಂದರೆ ಮಾತನಾಡುವವರ ಸಂಖ್ಯೆ ಹೆಚ್ಚಾಗಬೇಕೆಂದರು.

1721 ವೈದ್ಯಮಯ ಭಾಷೆ ನಮ್ಮ ದೇಶದಲ್ಲಿದೆ. ಜನಗಣತಿ ಮಾಡಿದರೆ ಮತ್ತಷ್ಟು ಭಾಷೆ ಹೆಚ್ಚಾಗುವ ಸಾಧ್ಯತೆ ಇದೆ. ಇಷ್ಟು ಭಾಷೆಗಳ ನಡುವೆ ನಮ್ಮ ಕನ್ನಡ ವಿಶೇಷ ಸ್ಥಾನಮಾನ ಉಳಿಸಿಕೊಂಡು ಬಂದಿರುವುದು ಶ್ಲಾಘನೀಯ ಎಂದು ಹೇಳಿದರು.

ಊಟಿ, ಕಾಸರಗೋಡು, ಸೊಲ್ಲಾಪುರ ಪ್ರದೇಶಗಳು ಬೇರೆ ರಾಜ್ಯದಲ್ಲಿದ್ದರೂ, ಕನ್ನಡ ಮಾತನಾಡುವವರ ಸಂಖ್ಯೆ ಹೆಚ್ಚಿದೆ. ಈ ಪ್ರದೇಶಗಳು ಮೂಲ ಕರ್ನಾಟಕಕ್ಕೆ ಸೇರಿದ್ದರಾದರೂ ಹಿಂದೆ ನಮ್ಮನ್ನಾಳಿದ ರಾಜಕಾರಣಿಗಳ ಲಾಲಸ್ಯದಿಂದ ಈ ಪ್ರದೇಶಗಳು ಇಂದು ಬೇರೆ ರಾಜ್ಯಗಳ ಪಾಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಂಡ್ಯ ಜಿಲ್ಲೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆ ಬಹಳಷ್ಟಿದೆ. ಅವರನ್ನು ಸದಾ ಸ್ಮರಿಸುವ ಕೆಲಸವಾಗಬೇಕು. ಮಂಡ್ಯ ನಗರದ ಪ್ರಮುಖ ವೃತ್ತದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ನಿರ್ಮಾಣ ಮಾಡಬೇಕು. ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಪಿ.ಪ್ರಕಾಶ್ ಮಾತನಾಡಿ, ಮಂಡ್ಯ ಜಿಲ್ಲೆಯಂತಹ ಕನ್ನಡ ಹೆಚ್ಚು ಮಾತನಾಡುವ ಮಂಡ್ಯ ಜಿಲ್ಲೆಯಲ್ಲಿ ಕನ್ನಡ ಭಾಷೆ ಮತ್ತು ಕನ್ನಡ ಸಾಹಿತ್ಯ ಉಳಿಸಿ, ಬೆಳೆಸುವಂತಹ ಇಂತಹ ಕಾರ್ಯಕ್ರಮ ಹೆಚ್ಚಾಗಿ ನಡೆಯಬೇಕೆಂದು ಹೇಳಿದರು.

ಮುಂದಿನ ತಿಂಗಳು ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಮಂಡ್ಯ ಸಮ್ಮೇಳನ ರಾಜ್ಯದಲ್ಲಿ ಇತಿಹಾಸವಾಗಬೇಕು. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮ್ಮೇಳನ ಯಶಸ್ವಿಗೊಳಿಸುವಂತೆ ಕರೆ ನೀಡಿದರು.

ಸಮಾಜ ಸೇವಕ ಎಲ್.ಜಿ.ಮಂಜುನಾಥ್ ಮಾತನಾಡಿ, ಕನ್ನಡ ರಾಜ್ಯೋತ್ಸವ ಎಂಬುದು ಕೇವಲ ನವೆಂಬರ್ ತಿಂಗಳಿಗೆ ಮೀಸಲಾಗದೇ ವರ್ಷಪೂರ್ತಿ ಕನ್ನಡ ಕಟ್ಟಿ ಬೆಳೆಸುವ ಕೆಲಸವಾಗಬೇಕೆಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಹಲವು ಮಂದಿಗೆ ಸುವರ್ಣ ಕರ್ನಾಟಕ ಸಾಹಿತ್ಯ ಪ್ರಶಸ್ತಿ, ಕನ್ನಡ ರತ್ನ ಪ್ರಶಸ್ತಿ ಹಾಗೂ ಕಾವ್ಯಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಮಂಡ್ಯ ತಾಲ್ಲೂಕು ಅಧ್ಯಕ್ಷ ಶಿವಣ್ಣಮಂಗಲ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಬನ್ನಂಗಾಡಿ ಸಿದ್ದಲಿಂಗಯ್ಯ, ಸಮಾಜ ಸೇವಕರಾದ ಗಂಗಾಧರ್, ವೆಂಕಟೇಶ್, ಡಾ.ಜೀಶಂಪ ಸಾಹಿತ್ಯ ವೇದಿಕೆ ಅಧ್ಯಕ್ಷ ಎಸ್.ಕೃಷ್ಣಸ್ವರ್ಣಸಂದ್ರ, ಉಪಾಧ್ಯಕ್ಷ ಅರಸಯ್ಯ, ಕಾರ್ಯಧ್ಯಕ್ಷ ನಾಗೇಶ್ ರಾಗಿಮುದ್ದನಹಳ್ಳಿ, ಉದ್ಯಮಿ ಸಿದ್ದೇಗೌಡ, ಮಹಿಳಾ ಘಟಕದ ಅಧ್ಯಕ್ಷೆ ರೂಪಾ ಹೊಸಹಳ್ಳಿ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ