ನಾಗರಿಕ ಸಮಿತಿಯ ವತಿಯಿಂದ ವಿಶ್ವ ಒಕ್ಕಲಿಗ ಮಠದ ಉತ್ತರಾಧಿಕಾರಿ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ಅವರಿಗೆ ಗೌರವ ಸಮರ್ಪಣಾ ಸಮಾರಂಭ ಕಾರ್ಯಕ್ರಮವನ್ನು ಏಪ್ರಿಲ್ ೧೮ರ ಬೆಳಿಗ್ಗೆ ೧೧ ಗಂಟೆಗೆ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹೆಚ್.ಎಲ್. ನಾಗರಾಜ್ ಆಗಿದ್ದ ನಿಶ್ಚಲಾನಂದನಾಥ ಸ್ವಾಮೀಜಿಗಳು ಜಿಲ್ಲೆಯಲ್ಲಿ ತಹಶೀಲ್ದಾರ್, ಉಪವಿಭಾಗಾಧಿಕಾರಿ, ಅಪರ ಜಿಲ್ಲಾಧಿಕಾರಿಯಾಗಿ ೧೮ ವರ್ಷಗಳು ಸತತವಾಗಿ ಜಿಲ್ಲೆಗೆ ಸೇವೆ ಸಲ್ಲಿಸಿದ್ದು, ತಮ್ಮ ೧೦ ವರ್ಷಗಳ ಸೇವಾವಧಿ ಇರುವಾಗಲೇ ಅಚಲ ನಿರ್ಧಾರ ಕೈಗೊಂಡಿರುವುದಕ್ಕೆ ಅವರನ್ನು ಅಭಿನಂದಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.
ವಿಶ್ವ ಒಕ್ಕಲಿಗ ಮಠದ ಪೀಠಾಧ್ಯಕ್ಷ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಹಾಗೂ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ ಕಾರ್ಯಕ್ರಮ ದಿವ್ಯ ಸಾನಿಧ್ಯವನ್ನು ವಹಿಸಲಿದ್ದು, ಉದ್ಯಮಿ ಕೆ.ಹೆಚ್.ವೆಂಕಟರಮಣೇಗೌಡ ಅವರು ವಿಶ್ವಒ ಕ್ಕಲಿಗ ಮಠದ ಉತ್ತರಾಧಿಕಾರಿ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ಗೌರವಿಸುವರು. ಆದಾಯ ತೆರಿಗೆ ಇಲಾಖೆಯ ಪ್ರಧಾನ ಆಯುಕ್ತ ಜಯರಾಂ ರಾಯಪುರ ಅಭಿನಂದನಾ ನುಡಿಗಳನ್ನಾಡುವರು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ.ಕುಮಾರ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಜಿ.ಪಂ ಸಿಇಓ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಉಪವಿಭಾಗಾಧಿಕಾರಿಗಳಾದ ಎಂ.ಶಿವಮೂರ್ತಿ, ಕೆ.ಆರ್.ಶ್ರೀನಿವಾಸ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ನಾಗೇಶ್, ಬಿಜಿಎಸ್ ಡೆಂಟಲ್ ಕಾಲೇಜಿನ ಪ್ರಾಧ್ಯಾಪಕ ಡಾ.ಹೆಚ್.ಆದರ್ಶ್ ಉಪಸ್ಥಿತರಿರಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್‌ಗೌಡ, ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ತಿಮ್ಮೇಗೌಡ, ಎಸ್.ನಾರಾಯಣ್, ಕಾರಸವಾಡಿ ಮಹದೇವ, ಲೋಕೇಶ್ ಚಂದಗಾಲು ಇದ್ದರು.




