ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗೋದು ಖಚಿತ ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ತಿಳಿಸಿದ್ದಾರೆ.
ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷಕ್ಕಾಗಿ ದುಡಿದ ಹಿರಿಯ ನಾಯಕರಿಗೆ ಸಿಎಂ ಆಗುವ ಹಂಬಲ ಇದ್ದೇ ಇರುತ್ತದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನ ಗಳಿಸಲು ಡಿ.ಕೆ.ಶಿವಕುಮಾರ್ ಸಾಕಷ್ಟು ಶ್ರಮಿಸಿದ್ದಾರೆ. ಅವರು ಮುಖ್ಯಮಂತ್ರಿಯಾಗಬೇಕು ಎಂದು ಅವರ ಅಭಿಮಾನಿಗಳು ಆಸೆಯನ್ನು ಹೊಂದಿದ್ದಾರೆ. ಹಾಗಾಗಿ ಅವರು ಸಿಎಂ ಆಗುವುದು ನಿಶ್ಚಿತ ಎಂದು ಹೇಳಿದರು.
ಡಿ.ಕೆ.ಶಿವಕುಮಾರ್ ಪಕ್ಷದ ಶಿಸ್ತಿನ ಸಿಪಾಯಿ. ತಾಳ್ಮೆಯಿಂದ ಕಾದು ಒಳ್ಳೆಯ ಸ್ಥಾನ ಪಡೆದುಕೊಳ್ಳುತ್ತಾರೆ. ಅವರನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಯಾವುದಕ್ಕೂ ಆತುರಪಡುವುದಿಲ್ಲ. ಸಂಯಮದಿಂದ ಪಕ್ಷವನ್ನು ಮುನ್ನಡೆಸಿ ಇಲ್ಲಿಯವರೆಗೆ ತಂದಿದ್ದಾರೆ. ಒಕ್ಕಲಿಗ ಸಮುದಾಯ ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಚುನಾವಣೆಯಲ್ಲಿ ಬೆಂಬಲಿಸಿತ್ತು ಎಂದು ಹೇಳಿದರು.
ಇನ್ನೂ ಮೈಸೂರು ಭಾಗದಲ್ಲಿ ಹೆಚ್ಚು ಒಲವು ತೋರಿದ್ದಕ್ಕೆ ಕಾಂಗ್ರೆಸ್ ಗೆ ಅಧಿಕ ಸೀಟು ಗೆಲ್ಲಲು ಸಾಧ್ಯವಾಗಿದೆ. ಹೀಗಾಗಿ ಹೈಕಮಾಂಡ್ ಯಾವ ನಿರ್ಧಾರ ಮಾಡುತ್ತೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.




