Wednesday, November 18, 2026

ಪ್ರಾಯೋಗಿಕ ಆವೃತ್ತಿ

ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭ : ಅಭ್ಯರ್ಥಿಗಳ ಎದೆಯಲ್ಲಿ ಢವ.. ಢವ…

ರಾಜ್ಯದ ಒಟ್ಟು 224 ಕ್ಷೇತ್ರಗಳ ವಿಧಾನಸಭೆ ಚುನಾವಣೆಗೆ ಇಂದಿನಿಂದ (ಏಪ್ರಿಲ್ 13) ನಾಮಪತ್ರ ಸಲ್ಲಿಕೆ ಆರಂಭವಾಗಿದೆ ಏಪ್ರಿಲ್‌ 20ರವರೆಗೂ ನಾಮಪತ್ರ ಸಲ್ಲಿಸಬಹುದು. ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಮತ್ತು 16 ರಂದು ಭಾನುವಾರ ಸಾರ್ವತ್ರಿಕ ರಜಾ ದಿನವಾಗಿದ್ದು, ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಹೀಗಾಗಿ ನಾಮಪತ್ರ ಸಲ್ಲಿಕೆಗೆ ಏಳು ದಿನಗಳಲ್ಲಿ ಎರಡು ದಿನ ಸರ್ಕಾರಿ ರಜೆ ಇರಲಿದ್ದು, ಐದು ದಿನಗಳು ಮಾತ್ರ ನಾಮಪತ್ರ ಸಲ್ಲಿಕೆಗೆ ಕಾಲಾವಕಾಶ ಇದೆ.

ಅನ್ ಲೈನ್ ನಲ್ಲೂ ಸಲ್ಲಿಸಬಹುದು

ಇದೇ ಮೊದಲ ಬಾರಿಗೆ ಆನ್ ಲೈನ್​ ಮೂಲಕ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಚುನಾವಣೆ ಆಯೋಗದ ವೆಬ್​ಸೈಟ್​ನಲ್ಲಿ ಎಲ್ಲಾ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ.

ಎಲ್ಲಾ ಪಕ್ಷಗಳಲ್ಲೂ ಬಂಡಾಯದ ಬಿಸಿ 

ಕಾಂಗ್ರೆಸ್‌ 166 ಕ್ಷೇತ್ರಗಳಿಗೆ, ಬಿಜೆಪಿ 212 ಹಾಗೂ ಜೆಡಿಎಸ್‌ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ‘ಬಿ’ ಫಾರಂ ವಿತರಣೆ ಆರಂಭಿಸಿವೆ. ಆದರೆ, ಎಲ್ಲ ಪಕ್ಷಗಳಿಗೂ ಬಂಡಾಯದ ಬಿಸಿ ತಟ್ಟಲಾರಂಭಿಸಿದೆ. ಇನ್ನೊಂದೆಡೆ ಟಿಕೆಟ್​ ಕೈತಪ್ಪಿದ್ದರಿಂದ ಎಲ್ಲ ಪಕ್ಷಗಳಲ್ಲೂ ಬಂಡಾಯದ ಬಿಸಿ ಹೊತ್ತಿ ಉರಿಯುತ್ತಿದೆ. ಇದರ ಮಧ್ಯೆಯೂ ಟಿಕೆಟ್‌ ಖಾತರಿಯಾಗಿರುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ದಿನಾಂಕ ನಿಗಧಿಯಲ್ಲಿ ಬಿಜಿಯಾಗಿದ್ದಾರೆ.

ಆಯಾಯ ಕ್ಷೇತ್ರಗಳಲ್ಲೇ ನಾಮಪತ್ರ ಸಲ್ಲಿಕೆ
ಆಯಾಯ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಬಹುದು. ಚುನಾವಣಾಧಿಕಾರಿಗಳ ಅನುಮತಿ ಪಡೆದುಕೊಂಡು ದೊಡ್ಡ ಮಟ್ಟದಲ್ಲಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆಗೆ ಆಗಮಿಸಬಹುದು. ಆದ್ರೆ, ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿ ಸೇರಿದಂತೆ ಒಟ್ಟು 5 ಜನರಿಗೆ ಮಾತ್ರ ಚುನಾವಣಾಧಿಕಾರಿಗಳ ಕಚೇರಿ ಪ್ರವೇಶಿಸಲು ಅವಕಾಶವಿದ್ದು, 100 ಮೀಟರ್ ವ್ಯಾಪ್ತಿಯಲ್ಲಿ 3 ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶವಿರುತ್ತದೆ.

₹ 40 ಲಕ್ಷ ಚುನಾವಣೆ ವೆಚ್ಚದ ಮಿತಿ
ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಆಯೋಗವು ವೆಚ್ಚದ ಮಿತಿಯನ್ನು ನಿಗದಿಗೊಳಿಸಿದ್ದು, ಪ್ರತಿ ಅಭ್ಯರ್ಥಿಗೆ 40 ಲಕ್ಷ ರೂ.ವರೆಗೆ ಚುನಾವಣಾ ವೆಚ್ಚವನ್ನು ನಿಗದಿಗೊಳಿಸಿದೆ. ಅಭ್ಯರ್ಥಿಗಳು ವೆಚ್ಚ ಮಾಡುವ ಮೊತ್ತದ ಮೇಲೆ ನಿಗಾವಹಿಸಲು 234 ಸಹಾಯಕ ವೆಚ್ಚ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಚುನಾವಣಾ ಕಾರ್ಯಕ್ಕಾಗಿ ರಾಜ್ಯದೆಲ್ಲೆಡೆ 3.51 ಲಕ್ಷ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಇದನ್ನು ಹೊರತುಪಡಿಸಿ 17,276 ಮಂದಿಯನ್ನು ಸೂಕ್ಷ್ಮ ವೀಕ್ಷಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಕಡ್ಡಾಯವಾಗಿ ಚುನಾವಣೆ ಖರ್ಚು ವೆಚ್ಚದ ಲೆಕ್ಕವನ್ನು ಅಧಿಕಾರಿಗಳಿಗೆ ನೀಡುವುದು ಕಡ್ಡಾಯವಾಗಿದೆ.

ಇಂದಿನಿಂದ ಏಪ್ರಿಲ್ 20ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಏ.21ರಂದು ಅಭ್ಯರ್ಥಿಗಳು ಸಲ್ಲಿಸಿರುವ ನಾಮಪತ್ರಗಳ ಪರಿಶೀಲನೆ ನಡೆಯಲಿದೆ, ನಾಮಪತ್ರ ವಾಪಸ್​ ಪಡೆಯಲು ಏ.24ರಂದು ಕೊನೆಯ ದಿನವಾಗಿದ್ದು, ಮೇ.10ರಂದು ಒಂದೇ ಹಂತದಲ್ಲಿ ಮತದಾನ ನಡೆದು, ಮೇ 13ರಂದು ಮತ ಎಣಿಕೆಯೊಂದಿಗೆ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ