ಮಂಡ್ಯ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಮಂಡ್ಯ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಇವರ ಸಂಯುಕ್ತ ಆಶ್ರಯದಲ್ಲಿ, ಸೆಂಟ್ರಲ್ ಪೊಲೀಸ್ ಠಾಣೆಯ ಸಹಕಾರದೊಂದಿಗೆ “ತಂಬಾಕು ಮುಕ್ತ ಯುವ ಅಭಿಯಾನ 3.0” ಅಂಗವಾಗಿ ಮಂಡ್ಯದ ಕೆರೆ ಅಂಗಳ ಪ್ರದೇಶದಲ್ಲಿ ಕೋಟ್ಪಾ (COTPA) ಕಾರ್ಯಾಚರಣೆ ನಡೆಸಲಾಯಿತು.
ಈ ಕಾರ್ಯಾಚರಣೆಯಲ್ಲಿ ನಿಯಮಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಹಾಗೂ ಬಳಕೆ ಮಾಡುತ್ತಿದ್ದ ಸಾರ್ವಜನಿಕರು ಮತ್ತು ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಯಿತು. ನಿಯಮಾನುಸಾರವಾಗಿ ನಗರಸಭೆಯಿಂದ ಪರವಾನಗಿ ಪಡೆದು ಮಾತ್ರ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತೆ ಸೂಚಿಸಲಾಯಿತು. ಜೊತೆಗೆ ಕೋಟ್ಪಾ ಕಾಯ್ದೆಯ ಕುರಿತು ಅರಿವು ಮೂಡಿಸಲು ಕರಪತ್ರಗಳನ್ನು ವಿತರಿಸಲಾಯಿತು.
ಇಂದಿನ ಕಾರ್ಯಾಚರಣೆಯಲ್ಲಿ ಒಟ್ಟು 33 ಪ್ರಕರಣಗಳು ದಾಖಲಾಗಿದ್ದು, ₹3,300 ದಂಡ ವಿಧಿಸಲಾಗಿದೆ. ಮುಂದಿನ ದಿನಗಳಲ್ಲಿ ಇಂತಹ ನಿಯಮ ಉಲ್ಲಂಘನೆ ಮರುಕಳಿಸದಂತೆ ಎಚ್ಚರಿಕೆ ನೀಡಲಾಗಿದೆ.
ಈ ಕಾರ್ಯಾಚರಣೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಜವರೇಗೌಡ, ಜಿಲ್ಲಾ ಸಲಹೆಗಾರ ತಿಮ್ಮರಾಜು, ಸಮಾಜ ಕಾರ್ಯಕರ್ತ ಮೋಹನ್ ಕುಮಾರ್ ಹಾಗೂ ಆರಕ್ಷಕ ಮಧು ಉಪಸ್ಥಿತರಿದ್ದರು.




