Saturday, May 18, 2024

ಪ್ರಾಯೋಗಿಕ ಆವೃತ್ತಿ

ಭತ್ತ-ರಾಗಿ ಖರೀದಿ ಕೇಂದ್ರ ಸ್ಥಾಪಿಸಲು ಸಿಎಂಗೆ ದಿನೇಶ್ ಗೂಳಿಗೌಡ ಮನವಿ

2022-23ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ಮಂಡ್ಯ ಜಿಲ್ಲೆಯಲ್ಲಿ ಬೆಳೆಯಲಾಗಿರುವ ಭತ್ತ ಮತ್ತು ರಾಗಿಯನ್ನು ಖರೀದಿ ಮಾಡಲು ಖರೀದಿ ಕೇಂದ್ರ ಸ್ಥಾಪನೆ ಹಾಗೂ ಬೆಳೆ ಮಾರಾಟ ಮಾಡಲು ವಿಧಿಸಿರುವ ಮಿತಿಯನ್ನು ತೆಗೆದು ಹಾಕಬೇಕು ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್‌ ಗೂಳಿಗೌಡ ಅವರು ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಮಂಡ್ಯ ಜಿಲ್ಲೆಯಲ್ಲಿ ಸುಮಾರು 81,459 ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆದಿರುವ ಭತ್ತದ ಬೆಳೆಯು ಕಟಾವಿಗೆ ಬಂದಿದ್ದು, ಅಂದಾಜು 50 ಲಕ್ಷ ಕ್ವಿಂಟಾಲ್ ಭತ್ತ ಉತ್ಪಾದನೆಯಾಗಲಿದೆ ಎಂದು ಅಂದಾಜು ಮಾಡಲಾಗಿದೆ. ಈಗಾಗಲೇ ಭತ್ತ ಕಟಾವು ಆರಂಭವಾಗಿದೆ. ಇನ್ನು 10-15 ದಿನದಲ್ಲಿ ಎಲ್ಲೆಡೆ ಕಟಾವು ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ.

ಆದರೆ, ರಾಜ್ಯ ಸರ್ಕಾರವು ಈವರೆಗೂ ಖರೀದಿ ಕೇಂದ್ರಗಳ ಸ್ಥಾಪನೆ ಬಗ್ಗೆ ಹಾಗೂ ಬೆಂಬಲ ಬೆಲೆ ದರ ನಿಗದಿಪಡಿಸುವ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೆ, ಒಬ್ಬ ರೈತನಿಂದ ಇಂತಿಷ್ಟೇ ಕ್ವಿಂಟಾಲ್ ಭತ್ತವನ್ನು ಖರೀದಿ ಮಾಡಬೇಕು ಎಂದು ಮಿತಿಯನ್ನು ನಿಗದಿ ಮಾಡಲಾಗಿದೆ. ಇನ್ನು ನೋಂದಣಿ ಪ್ರಕ್ರಿಯೆ ಯಾವಾಗ ಪ್ರಾರಂಭವಾಗುತ್ತದೆ ಎಂಬುದನ್ನೂ ಖಾತ್ರಿಪಡಿಸಿಲ್ಲ. ಇದರಿಂದ ರೈತಾಪಿ ವರ್ಗ ತುಂಬಾ ಆತಂಕಕ್ಕೀಡಾಗಿದೆ. ತಾವು ಮಧ್ಯಪ್ರವೇಶ ಮಾಡಿ ಶೀಘ್ರ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಇನ್ನು ರಾಗಿ ಬೆಳೆಗೆ ಸಂಬಂಧಪಟ್ಟಂತೆ 2001-22ನೇ ಸಾಲಿನಲ್ಲಿ ಮಂಡ್ಯ ಜಿಲ್ಲೆಯಲ್ಲಿ 30,000 ರೈತರಿಂದ 5 ಲಕ್ಷ ಕ್ವಿಂಟಾಲ್ ರಾಗಿಯನ್ನು ಬೆಂಬಲ ಬೆಲೆ ನೀಡುವ ಮುಖಾಂತರ ಖರೀದಿಸಲಾಗಿತ್ತು. 2022-23ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಸುಮಾರು 50,000 ಹೆಕ್ಟೇರ್ ವಿಸ್ತೀರ್ಣದಲ್ಲಿ ರಾಗಿ ಬೆಳೆಯಲಾಗಿದೆ. ಹೀಗಾಗಿ ಸುಮಾರು 10 ಲಕ್ಷ ಕ್ಕೂ ಹೆಚ್ಚು ಕ್ವಿಂಟಾಲ್ ರಾಗಿ ಬೆಳೆಯು ಉತ್ಪಾದನೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಆದರೆ, ಇನ್ನೂ ಕೂಡಾ ಖರೀದಿ ಕೇಂದ್ರಗಳನ್ನು ತೆರೆಯದೇ ಇರುವುದರಿಂದ ರಾಗಿ ಬೆಳೆದ ರೈತರು ಆತಂಕಕ್ಕೊಳಗಾಗಿದ್ದಾರೆ.

ಈಗಾಗಲೇ ಬೆಲೆ ಕುಸಿತ ಹಾಗೂ ರಾಸಾಯನಿಕ ಗೊಬ್ಬರಗಳ, ಕೀಟನಾಶಕಗಳ ಬೆಲೆ ಏರಿಕೆಯಾಗಿದೆ. ಜೊತೆಗೆ ಉತ್ಪಾದನಾ ವೆಚ್ಚ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ರೈತನ ಬದುಕು ದುಸ್ತರವಾಗಿದ್ದಲ್ಲದೆ, ಆತ್ಯಹತ್ಯೆ ಹಾದಿ ಹಿಡಿಯುವಂತಾಗಿದೆ.ಖರೀದಿ ಕೇಂದ್ರಗಳನ್ನು ತೆರೆಯುವುದು ವಿಳಂಬವಾದಲ್ಲಿ ಮಧ್ಯವರ್ತಿಗಳ ಕಪಿಮುಷ್ಟಿಗೆ ಸಿಲುಕಿ ರೈತರು ಕಡಿಮೆ ಬೆಲೆಗೆ ಭತ್ತ ಮತ್ತು ರಾಗಿಯನ್ನು ತಮ್ಮ ತುರ್ತು ಅಗತ್ಯತೆಗಳಿಗೆ ಮಾರಾಟ ಮಾಡಿ ನಷ್ಟಕ್ಕೊಳಗಾಗುತ್ತಾರೆ.

ಆದ್ದರಿಂದ ಸರ್ಕಾರ ಕೂಡಲೇ ರೈತರ ಹಿತ ಕಾಪಾಡುವ ದೃಷ್ಟಿಯಿಂದ ಮಂಡ್ಯ ಜಿಲ್ಲೆಯ ಜೊತೆಗೆ ಮೈಸೂರು, ಚಾಮರಾಜನಗರ, ಮಡಿಕೇರಿ, ಹಾಸನ ಹಾಗೂ ಇನ್ನಿತರ ಜಿಲ್ಲೆಗಳಲ್ಲಿ ಕೂಡಲೇ ನೋಂದಣಿ ಕೇಂದ್ರವನ್ನು ಪ್ರಾರಂಭ ಮಾಡಬೇಕು. ಹಾಗೆಯೇ ದರ ಏರಿಕೆ ಮಾಡಬೇಕು. ಕಳೆದ ಬಾರಿ ಇದ್ದಂತಹ ಒಬ್ಬ ರೈತನಿಂದ ಇಂತಿಷ್ಟೇ ಕ್ವಿಂಟಾಲ್ ಖರೀದಿ ಮಾಡಬೇಕು ಎಂಬ ನಿಯಮವನ್ನು ತೆಗೆದುಹಾಕಬೇಕಿದೆ.

ರೈತರು ಬೆಳೆದ ಎಲ್ಲಾ ಭತ್ತ ಮತ್ತು ರಾಗಿಯನ್ನು ಖರೀದಿ ಮಾಡಬೇಕು ಎಂದು ಈ ಭಾಗದ ರೈತರ ಪರವಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಶಾಸಕ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿಯವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!