Thursday, September 19, 2024

ಪ್ರಾಯೋಗಿಕ ಆವೃತ್ತಿ

ಪಕ್ಷದ ತೀರ್ಮಾನಕ್ಕೆ ಆಕಾಂಕ್ಷಿಗಳು ಬದ್ಧ: ಧ್ರುವ ನಾರಾಯಣ್

ಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಬಿ.ಫಾರಂ ಬಯಸಿರುವ ಆಕಾಂಕ್ಷಿಗಳು, ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧರಾಗಿರುವ ನಿಲುವು ವ್ಯಕ್ತಪಡಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ತಿಳಿಸಿದರು.

ಮಂಡ್ಯ ನಗರದ ಕಲ್ಲಹಳ್ಳಿಯ ಎಪಿಎಂಸಿ ಮಾರುಕಟ್ಟೆ ಮುಂಭಾಗದಲ್ಲಿರುವ ನಾಗಸಿರಿ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಉಸ್ತುವಾರಿಯಾಗಿ ಆಗಮಿಸಿ ಆಕಾಂಕ್ಷಿಗಳಿಂದ ಅಭಿಪ್ರಾಯ ಸಂಗ್ರಹಿಸಿದ ನಂತರ ಅವರು ಮಾತನಾಡಿದರು.

ಕಳೆದ ಬಾರಿ ಕೂಡ ನಾನು ವಿಧಾನಸಭಾ ಚುನಾವಣೆ ವೀಕ್ಷಕರಾಗಿ ಆಗಮಿಸಿ, ಜಿಲ್ಲೆಯಾದ್ಯಂತ ವಿಧಾನಸಭಾ ಕ್ಷೇತ್ರದ ಸಭೆ ನಡೆಸಿ ಜನರ ಅಭಿಪ್ರಾಯ ಸಂಗ್ರಹಿಸಿದೆ. ಆಗ ಸಣ್ಣಪುಟ್ಟ ಘರ್ಷಣೆಗಳು ನಡೆದಿತ್ತು. ಆದರೆ ಈ ಬಾರಿ ಜಿಲ್ಲಾ ಕೇಂದ್ರಕ್ಕೆ ಪ್ರತಿ ವಿಧಾನಸಭಾ ಕ್ಷೇತ್ರಗಳ ಆಕಾಂಕ್ಷಿಗಳನ್ನು ಕರೆಸಿ ಅವರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಎಲ್ಲಾ ಆಕಾಂಕ್ಷಿಗಳು ಬಹಳ ಸಂಯಮದಿಂದ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿ ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ ಎಂದು ತಿಳಿಸಿದ್ದು, ಎಲ್ಲರಿಗೂ ರಾಜ್ಯ ಕಾಂಗ್ರೆಸ್ ಸಮಿತಿ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೈಸೂರು ಭಾಗದಲ್ಲಿ 49 ಸ್ಥಾನಗಳ ಪೈಕಿ, ಕಾಂಗ್ರೆಸ್ ಬರೀ ಕೇವಲ ಏಳು ಕ್ಷೇತ್ರಗಳಲ್ಲಿ ಗೆದ್ದಿತ್ತು. ಹಾಸನ, ಮಂಡ್ಯ, ಕೊಡಗು ಕ್ಷೇತ್ರದಲ್ಲಿ ಒಂದು ಸ್ಥಾನ ಕಾಂಗ್ರೆಸ್ ಗೆ ಸಿಗಲಿಲ್ಲ. ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ತಲಾ ಒಂದು, ಚಾಮರಾಜನಗರ ಎರಡು, ಮೈಸೂರು ಗ್ರಾಮಾಂತರ ಪ್ರದೇಶದಲ್ಲಿ ಮೂರು, ಪಟ್ಟಣದಲ್ಲಿ ಒಂದು. ಈ ರೀತಿ ಕೇವಲ ಏಳು ಸ್ಥಾನಗಳಲ್ಲಷ್ಟೇ ಗೆಲುವು ಸಾಧಿಸಲು ಸಾಧ್ಯವಾಗಿದೆ. ಆದರೆ ಈ ಬಾರಿ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಒಂದುಗೂಡಿ ಚುನಾವಣೆ ನಡೆಸಿದರೆ, ಬಹುತೇಕ ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದೆ ಎಂದರು.

ಪಕ್ಷ ಅಧಿಕಾರಕ್ಕೆ ಬಂದರೆ ನಮ್ಮ ಕಾರ್ಯಕರ್ತರಿಗೆ ಹಾಗೂ ಜನರಿಗೆ ಸಹಾಯ ಮಾಡಲು ಸಾಧ್ಯವಾಗುತ್ತದೆ, ಇಲ್ಲದಿದ್ದರೆ ಯಾವ ಪ್ರಯೋಜನವಾಗುವುದಿಲ್ಲ. ಈ ಸಭೆಯಲ್ಲಿ ಆಕಾಂಕ್ಷಿಗಳ ಅನಿಸಿಕೆ ಹಾಗೂ ನಿಲುವನ್ನು ಸಂಗ್ರಹಿಸಿ ವರಿಷ್ಠರ ಗಮನಕ್ಕೆ ತರಲಾಗುವುದು ಎಂದರು.

ಪಕ್ಷದ ಬಿ.ಫಾರಂ ಆಕಾಂಕ್ಷಿಗಳು ಮಧು ಮಾದೇಗೌಡರನ್ನು ಅಭ್ಯರ್ಥಿ ಮಾಡಿದಂತೆ ಹಲವು ತಿಂಗಳುಗಳ ಮೊದಲೇ ಅಭ್ಯರ್ಥಿಯನ್ನು ಘೋಷಣೆ ಮಾಡಿದರೆ ಚುನಾವಣೆ ಮಾಡಲು ಸಾಕಷ್ಟು ಸಮಯ ಸಿಕ್ಕಿ ಹೆಚ್ಚು ಜನರನ್ನು ತಲುಪಬಹುದು. ಆದ್ದರಿಂದ ಚುನಾವಣೆಗೂ 4-5 ತಿಂಗಳ ಮೊದಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ. ಇದನ್ನು ವರಿಷ್ಠರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು, ಮಾಜಿ ಸಚಿವ ಪಿ.ಎಂ. ನರೇಂದ್ರಸ್ವಾಮಿ, ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಮುಖಂಡರಾದ ಪುಟ್ಟೇಗೌಡ, ಎಂ.ಎಸ್. ಚಿದಂಬರ್, ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!