2024-25ನೇ ಸಾಲಿನಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಊಗಿನಹಳ್ಳಿ ಗ್ರಾಮದ ಮುಖ್ಯರಸ್ತೆಯಿಂದ ಶಾಲೆಯವರೆಗೆ ಬೇವು, ಮಹಾಗನಿ, ನೇರಳೆ ಸೇರಿದಂತೆ 300 ಗಿಡಗಳನ್ನು ನೆಡುವ ಕಾಮಗಾರಿಗೆ ಸಂಬಂಧಿಸಿದಂತೆ ಕಾಮಗಾರಿಯನ್ನು ನಡೆಸದೇ ರೂ.2.04 ಲಕ್ಷಗಳ ಮೊತ್ತವನ್ನು ಪಾವತಿಸಿರುವುದು ಬೆಳಕಿಗೆ ಬಂದಿದೆ.
ಈ ಸಂಬಂಧ ಸಂಬಂಧಪಟ್ಟ ಗ್ರಾ.ಪಂ.ನ ಪಿಡಿಒ, ಸಹಾಯಕ ನಿರ್ದೇಶಕರು, ಮಹಾತ್ಮ ಗಾಂಧಿ ನರೇಗಾ ಯೋಜನೆಯ ತಾಂತ್ರಿಕ ಸಂಯೋಜಕರು ಹಾಗೂ ತಾಂತ್ರಿಕ ಸಹಾಯಕರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಲಾಗಿದೆ.
ಲಕ್ಷ್ಮೀಪುರ ಗ್ರಾಮ ಪಂಚಾಯತಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ “ಉದ್ಯೋಗ ಖಾತರಿ ಯೋಜನೆಯಡಿ ದೋಖಾ – ಗ್ರಾಮಸ್ಥರಿಂದ ಪ್ರತಿಭಟನೆ” ಎಂಬ ಶೀರ್ಷಿಕೆಯಡಿ ಕೆ.ಆರ್.ಪೇಟೆ ತಾಲೂಕಿನ ಲಕ್ಷ್ಮೀಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅವ್ಯವಹಾರ ನಡೆದಿದೆ ಎಂಬ ಬಗ್ಗೆ ವರದಿ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು.
ಈ ಹಿನ್ನೆಲೆ ಕೆ.ಆರ್.ಪೇಟೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಸ್ಥಳ ಮತ್ತು ದಾಖಲೆಗಳನ್ನು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿತ್ತು, ಅವರ ವರದಿಯನ್ನಾಧರಿಸಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ರೀತಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಹಾಗೂ ದುರ್ಬಳಕೆ ಆಗಿರುವ ಮೊತ್ತವನ್ನು ಸಂಬಂಧಪಟ್ಟವರಿಂದ ವಸೂಲಿ ಮಾಡಲಾಗುವುದು ಎಂದು ಜಿ.ಪಂ. ಸಿಇಒ ನಂದಿನಿ ಕೆ.ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ರಮ ಕೈಗೊಳ್ಳಲು ಸೂಚನೆ
ಕೆ.ಆರ್.ಪೇಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಾಲಾ ಕಟ್ಟಡ ದುಸ್ಥಿತಿಯಲ್ಲಿದ್ದು, ಮಕ್ಕಳು ಜೀವಭಯದಲ್ಲಿ ಅಕ್ಷರ ಕಲಿಯುತ್ತಿದ್ದಾರೆ ಹಾಗೂ ಶೌಚಾಲಯವಿಲ್ಲದೇ ಮಕ್ಕಳು ಪರದಾಡುತ್ತಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಗಿತ್ತು.
ಸುದ್ದಿವಾಹಿನಿಯಲ್ಲಿನ ವರದಿ ಹಿನ್ನೆಲೆಯಲ್ಲಿ ಮಾದಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ವಸ್ತು ಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯತ್ ಕೆ.ಆರ್.ಪೇಟೆ ಅರವರಿಗೆ ಸೂಚಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾರವರು ಮಾದಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ದುಸ್ಥಿತಿಯಲ್ಲರುವ ಶಾಲಾ ಕಟ್ಟಡದಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿಲ್ಲ ಹಾಗೂ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶೌಚಾಲಯ ಲಭ್ಯವಿದೆ ಎಂದು ವರದಿ ನೀಡಿರುತ್ತಾರೆ ಹಾಗೂ ಶಿಥಿಲವಾಗಿರುವ ಕಟ್ಟಡವನ್ನು ನೆಲಸಮಗೊಳಿಸಲು ಈಗಾಗಲೇ ಪತ್ರವ್ಯವಹಾರ ನಡೆಸಲಾಗಿರುತ್ತದೆ ಎಂದು ವರದಿ ಸಲ್ಲಿಸಿರುತ್ತಾರೆ.
ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿ.ಪಂ. ಸಿಇಒ ನಂದಿನಿ ಕೆ.ಆರ್. ತಿಳಿಸಿದ್ದಾರೆ.




