ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪ್ರಬಲವಾಗಿ ಸಂಘಟಿಸಿರುವ ಪಿ.ಎಂ. ನರೇಂದ್ರಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು.
ಮಳವಳ್ಳಿ ಪಟ್ಟಣದ ಅನಂತರಾಮ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಮಂಡ್ಯ ಜಿಲ್ಲೆಯಲ್ಲಿ ಜೋಡೆತ್ತುಗಳಂತೆ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿ ಅಧಿಕಾರಕ್ಕೆ ತಂದಿರುವ, ಜೋಡೆತ್ತುಗಳಲ್ಲಿ ಚಲುವರಾಯಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಿರುವುದು ಸಂತಸ ತಂದಿದೆ. ಅದೇ ರೀತಿ ಜೋಡೆತ್ತುಗಳಲ್ಲಿ ಮತ್ತೊಬ್ಬರಾದ ಪಿ.ಎಂ. ನರೇಂದ್ರ ಸ್ವಾಮಿ ಅವರನ್ನೂ ಮಂತ್ರಿ ಮಂಡಲಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ ಮಾತನಾಡಿ, ನರೇಂದ್ರಸ್ವಾಮಿ ಅವರು ಹೆಸರು ಅಂತಿಮ ಕ್ಷಣದವರೆಗೂ ಕೇಳಿ ಬರುತ್ತಿತ್ತು.ಆದರೆ ಕೊನೆ ಕ್ಷಣದಲ್ಲಿ ಅವರನ್ನು ಕೈ ಬಿಟ್ಟಿರುವುದು ಜಿಲ್ಲೆಯ ಹಾಗೂ ಮಳವಳ್ಳಿ ಜನತೆಗೆ ತುಂಬಾ ಬೇಸರ ತಂದಿದೆ.
ಜೆಡಿಎಸ್ ಭದ್ರಕೋಟೆಯಾಗಿದ್ದ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡಿ 7 ವಿಧಾನಸಭಾ ಕ್ಷೇತ್ರಗಳಲ್ಲಿ 6 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಚಲುವರಾಯಸ್ವಾಮಿ ಹಾಗೂ ಪಿ.ಎಂ. ನರೇಂದ್ರಸ್ವಾಮಿ ಕಾರಣ. ಜೋಡೆತ್ತುಗಳಂತೆ ದುಡಿದ ಚಲುವರಾಯಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಿ ನರೇಂದ್ರಸ್ವಾಮಿಯವರಿಗೆ ನೀಡದಿರುವುದು ಸರಿಯಲ್ಲ. ಕೂಡಲೇ ಅವರನ್ನು ಮಂತ್ರಿ ಮಂಡಲಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಮಳವಳ್ಳಿ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟನೆ ಮಾಡಿ ಈ ಬಾರಿ 46,000ಕ್ಕೂ ಹೆಚ್ಚು ಮತಗಳ ಅಂತರದಿಂದ ನರೇಂದ್ರಸ್ವಾಮಿ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಭೇಟಿ ಮಾಡಿದ ಸಂದರ್ಭದಲ್ಲಿ ನರೇಂದ್ರಸ್ವಾಮಿಯವರಿಗೆ ಮಂತ್ರಿ ಸ್ಥಾನ ಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಕೊನೆ ಕ್ಷಣದಲ್ಲಿ ಅವರನ್ನು ಕೈ ಬಿಟ್ಟಿರುವುದು ನಮಗೆ ಸಾಕಷ್ಟು ಬೇಸರ ತಂದಿದೆ. ಸಿದ್ದರಾಮಯ್ಯನವರು ಚುನಾವಣೆ ಸಂದರ್ಭದಲ್ಲಿ ಮಳವಳ್ಳಿಯಲ್ಲಿ ನಡೆದ ಬಹಿರಂಗ ಸಭೆಯಲ್ಲಿ ನರೇಂದ್ರಸ್ವಾಮಿ ಅವರನ್ನು ಆಯ್ಕೆ ಮಾಡಿದರೆ ಅವರನ್ನು ಮಂತ್ರಿ ಮಾಡುವುದಾಗಿ ಹೇಳಿದ್ದರು. ಆದರೆ ಅವರನ್ನು ಮಂತ್ರಿ ಮಾಡದಿರುವುದು ಸಾಕಷ್ಟು ನೋವು ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆ ಯಲ್ಲಿ ಪುರಸಭೆ ಸದಸ್ಯರಾದ ರಾಜಶೇಖರ್, ಶಿವಸ್ವಾಮಿ, ಪ್ರಮೀಳಾ ಮುಖಂಡರಾದ ಕಿರಣ್ ಶಂಕರ್, ಜಯರಾಜು,ಗಂಗರಾಜ ಅರಸ್, ರವಿ,ಪ್ರಸನ್ನ ಸೇರಿದಂತೆ ಇತರರು ಇದ್ದರು.




