ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಗೊಂಡು 50 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಅಕ್ಟೋಬರ್ 28 ರಂದು ಸುವರ್ಣ ಮಹೋತ್ಸವ ಆಚರಿಸಲಾಗುವುದು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುವರ್ಣ ಮಹೋತ್ಸವ ಆಚರಿಸುವ ಸಂಬಂಧ ಬುಧವಾರ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಕ್ಟೋಬರ್ 28 ರಂದು
ಕಾರ್ಯಕ್ರಮವನ್ನು ಮಂಡ್ಯ ವಿಶ್ವವಿದ್ಯಾನಿಲಯದ ಆವರಣದಲ್ಲಿ ಆಯೋಜಿಸಲಾಗುವುದು. ಕಾರ್ಯಕ್ರಮವನ್ನು
ಉತ್ತಮ ರೀತಿಯಲ್ಲಿ ಆಚರಿಸುವ ಉದ್ದೇಶದಿಂದ ಸ್ವಾಗತ ಸಮಿತಿ, ವೇದಿಕೆ ಸಮಿತಿ, ಆಹಾರ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿರುತ್ತದೆ. ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಯಾವುದೇ ಲೋಪವಾಗದಂತೆ ನಿರ್ವಹಿಸಬೇಕು ಎಂದರು.
ಇ-ತ್ಯಾಜ್ಯ ( Electric Waste), ಪ್ಲಾಸ್ಟಿಕ್ ತ್ಯಾಜ್ಯ, ಘನ ತ್ಯಾಜ್ಯ, ಜಲ ಮಾಲಿನ್ಯ ಎಲ್ಲಾ ರೀತಿಯ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಮಾಡಲಾಗುವುದು, ಪರಿಸರ ಸಂರಕ್ಷಣೆ ಕುರಿತಾಗಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದರು.
ಜಿಲ್ಲೆಯ ಪ್ರತಿ ತಾಲ್ಲೂಕುಗಳಿಗೂ ತಲಾ 2 ಲಕ್ಷ ಮೊತ್ತವನ್ನು ನೀಡಲಾಗುವುದು, ಕಾರ್ಯಕ್ರಮದ ಪೂರ್ವಭಾವಿಯಾಗಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಕುರಿತು ಪ್ರಬಂಧ ಸ್ಪರ್ಧೆ ( ವಿಷಯ: “ಪರಿಸರ ನೈರ್ಮಲ್ಯತೆ ಹಾಗೂ ಆರೋಗ್ಯ”, “ಹಸಿರಿನಿಂದ ಹುಸಿರು”, “ವರ್ತೂಲ ಆರ್ಥಿಕತೆ”, “ಸುಸ್ಥಿರ ಅಭಿವೃದ್ಧಿ” ) ಚರ್ಚಾಸ್ಪರ್ಧೆ, ಆಶು ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ರಸಪ್ರಶ್ನೆ ಆಯೋಜಿಸಿ ಅದರಲ್ಲಿ ವಿಜೇತರಾದವರಿಗೆ ಸೂಕ್ತ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್, ಎನ್ ಸಿ ,ಸಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಬೇಕು, ಪರಿಸರ ಸಂರಕ್ಷಣೆಯೂ ಕೂಡ ಶೈಕ್ಷಣಿಕ ಚಟುವಟಿಕೆ ಇದ್ದಂತೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಗೀತಾ, ನಗರಾಭಿವೃದ್ಧಿ ಕೋಶದ ಅಧಿಕಾರಿ ನರಸಿಂಹ ಮೂರ್ತಿ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಕಚೇರಿಯ ಜಂಟಿ ನಿರ್ದೇಶಕ ದಿನೇಶ್, ನಗರಸಭೆ ಪೌರಾಯುಕ್ತೆ ಪಂಪಶ್ರೀ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗನಂದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.




