Saturday, November 21, 2026

ಪ್ರಾಯೋಗಿಕ ಆವೃತ್ತಿ

ಸಾರ್ವಜನಿಕರ ಸಮಸ್ಯೆ ಪರಿಹಾರಕ್ಕೆ ‘ಪ್ರಜಾಸೇವೆ ಆಂದೋಲನ’ ಸಹಕಾರಿ : ಎ.ಬಿ. ರಮೇಶ್ ಬಂಡಿಸಿದ್ದೇಗೌಡ

ಮಂಡ್ಯ : ರೈತರು ಹಾಗೂ ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ‘ಪ್ರಜಾ ಸೇವೆ ಆಂದೋಲನ’ ಉತ್ತಮ ವೇದಿಕೆಯಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಬಿ. ರಮೇಶ್ ಬಂಡಿಸಿದ್ದೇಗೌಡ ತಿಳಿಸಿದರು.

ಮಂಡ್ಯ ತಾಲ್ಲೂಕಿನ ಕೊತ್ತತ್ತಿ-2ನೇ ಹೋಬಳಿಯ ತಗ್ಗಹಳ್ಳಿ ಗ್ರಾಮದ ಶ್ರೀ ಕಾಳಿಕಾಂಭ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ‘ಪ್ರಜಾ ಸೇವೆ ಆಂದೋಲನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರೈತರು ಎದುರಿಸುತ್ತಿರುವ ಆರ್‌ಟಿಸಿ ಹಾಗೂ ಪೌತಿ ಖಾತೆ ಸಮಸ್ಯೆಗಳಿಗೆ ಅಧಿಕಾರಿಗಳು ಆದ್ಯತೆ ನೀಡಿ ತ್ವರಿತವಾಗಿ ಪರಿಹಾರ ಕಲ್ಪಿಸಬೇಕು. ಕೊತ್ತತ್ತಿ-2ನೇ ಹೋಬಳಿ ವ್ಯಾಪ್ತಿಯಲ್ಲಿ ಒಟ್ಟು 6,758 ಪೌತಿ ಖಾತೆ ಪ್ರಕರಣಗಳು ದಾಖಲಾಗಿದ್ದು, ಸುಮಾರು 3,000 ಪ್ರಕರಣಗಳು ಇನ್ನೂ ಬಾಕಿ ಉಳಿದಿವೆ. ಬಾಕಿ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ ರೈತರಿಗೆ ಅಗತ್ಯ ದಾಖಲೆಗಳು ಸಕಾಲದಲ್ಲಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅಂಗವಿಕಲರ ಪಿಂಚಣಿ, ವೃದ್ಧಾಪ್ಯ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯ ಪಡೆಯುವಲ್ಲಿ ಅರ್ಹ ಫಲಾನುಭವಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಲು ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಬೇಕು. ಅರ್ಹರಾಗಿದ್ದರೂ ಸೌಲಭ್ಯ ದೊರೆಯದಿರುವುದಕ್ಕೆ ಕಾರಣಗಳನ್ನು ಪರಿಶೀಲಿಸಿ, ಅಗತ್ಯ ದಾಖಲೆಗಳನ್ನು ಒದಗಿಸಲು ನೆರವು ನೀಡುವ ಮೂಲಕ ಸಮಸ್ಯೆ ಪರಿಹರಿಸಬೇಕು ಎಂದು ನಿರ್ದೇಶನ ನೀಡಿದರು.

ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಹಾಗೂ ಪೌಷ್ಟಿಕ ಆಹಾರ ಸಮರ್ಪಕವಾಗಿ ದೊರೆಯುವಂತೆ ಅಧಿಕಾರಿಗಳು ಖಾತರಿಪಡಿಸಬೇಕು. ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆಯ ಕುರಿತು ಪೋಷಕರಲ್ಲಿಯೂ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಗಳ ಸುತ್ತ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಅಧಿಕಾರಿಗಳು ಸಾರ್ವಜನಿಕರ ಬಳಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಲ್ಪಿಸುವುದು ಆಡಳಿತದ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.

‘ಪ್ರಜಾ ಸೇವೆ ಆಂದೋಲನ’ದ ಮೂಲಕ ವಿವಿಧ ಇಲಾಖೆಗಳ ಅಧಿಕಾರಿಗಳು ಒಂದೇ ಸ್ಥಳದಲ್ಲಿ ಲಭ್ಯವಿದ್ದು, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಗುತ್ತಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ವಿಶ್ವನಾಥ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್, ಮುಖಂಡ ಮಿತ್ರ ರಮೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ