Friday, September 20, 2024

ಪ್ರಾಯೋಗಿಕ ಆವೃತ್ತಿ

ಪದವಿ ಪೂರ್ವ ಶಿಕ್ಷಣ ಅಸ್ಮಿತೆಯನ್ನು ಯಥಾಸ್ಥಿತಿ ಕಾಪಾಡುವಂತೆ ಆಗ್ರಹಿಸಿ ಪ್ರತಿಭಟನೆ

ಪದವಿ ಪೂರ್ವ ಶಿಕ್ಷಣ ಅಸ್ಮಿತೆಯನ್ನು ಯಥಾಸ್ಥಿತಿ ಕಾಪಾಡುವಂತೆ ಒತ್ತಾಯಿಸಿ ವಿಧಾನಪರಿಷತ್ ಮಾಜಿ ಸದಸ್ಯ ಕೆ ಟಿ ಶ್ರೀಕಂಠೇಗೌಡ ನೇತೃತ್ವದಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.

ಮಂಡ್ಯ ನಗರದ ಪದವಿ ಪೂರ್ವ ಶಿಕ್ಷಣ ಇಲಾಖೆ ಆವರಣದಿಂದ ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಾಂಶುಪಾಲರರ ಉಪನ್ಯಾಸಕರ, ಗ್ರಂಥಪಾಲಕರ ಮತ್ತು ಭೋಧಕೇತರ ನೌಕರರ ಒಕ್ಕೂಟ ಆಶ್ರಯದಲ್ಲಿ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ರವಾನಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಹೆಸರನ್ನು ಶಾಲಾ ಶಿಕ್ಷಣ ಇಲಾಖೆ ಎಂದು ಬದಲಿಸಲಾಗಿದ್ದು ಅಷ್ಟೇ ಅಲ್ಲದೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಹೆಸರಿನಲ್ಲಿ ಪಿ.ಯು. ಹಂತವನ್ನು ಪ್ರೌಢಶಾಲೆಗಳಲ್ಲಿ ವಿಲೀನಗೊಳಿಸುವ ಪ್ರಕ್ರಿಯೆ ನಡೆಸಲಾಗುತ್ತಿದ್ದು ಕೂಡಲೇ ಇಂತಹ ಪ್ರಕ್ರಿಯೆ ಕೈಬಿಟ್ಟು ಪದವಿ ಪೂರ್ವ ಶಿಕ್ಷಣ ಇಲಾಖೆ ಎಂಬ ಹೆಸರನ್ನೇ ಯಥಾಸ್ಥಿತಿಯಲ್ಲಿ ಮುಂದುವರೆಸಬೇಕೆಂದು ಆಗ್ರಹಿಸಿದರು.

ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ವಿಲೀನಗೊಳಿಸಿರುವ ಪರೀಕ್ಷಾ ವಿಭಾಗವನ್ನು ಹಿಂತೆಗೆದು ಪುನಃ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿಯೇ ಉಳಿಸುವ ಮೂಲಕ ಶೈಕ್ಷಣಿಕ ವಿಭಾಗ ಮತ್ತು ಪರೀಕ್ಷಾ ವಿಭಾಗಗಳ ನಡುವೆ ಹಳಿತಪ್ಪಿರುವ ಸಮನ್ವಯವನ್ನು ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಪ್ರತಿ ಜಿಲ್ಲಾ ಹಂತಗಳಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಮೇಲುಸ್ತುವಾರಿಯನ್ನು ಜಿ ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ,ಶಾಲಾ ಶಿಕ್ಷಣ ಇಲಾಖೆ ಅಪರ ಆಯುಕ್ತರಿಗೆ ವಹಿಸಲು ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿರುವ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕು. ಜಿಲ್ಲಾ ಉಪನಿರ್ದೇಶಕರ ಕಛೇರಿಯ ಆಡಳಿತ, ಶೈಕ್ಷಣಿಕ, ಪರೀಕ್ಷೆ, ಲೆಕ್ಕಪತ್ರ ಹಾಗೂ ಇತರೆ ಕಾರ್ಯಚಟುವಟಿಕೆಗಳನ್ನು ಸುಗಮ ಹಾಗೂ ಸುಲಲಿತವಾಗಿ ನಡೆಸಲು ಮೂರು ಅಧೀಕ್ಷಕರು ಆರು ಪ್ರಥಮ ದರ್ಜೆ ಸಹಾಯಕರು ಆರು ದ್ವಿತೀಯ ದರ್ಜೆ ಸಹಾಯಕರು ಮೂರು,ಗ್ರೂಪ್-ಡಿ ಹುದ್ದೆಗಳನ್ನು ಮಂಜೂರು ಮಾಡುವುದರ ಮುಖಾಂತರ ಜಿಲಾ ಉಪನಿರ್ದೇಶಕರ ಕಚೇರಿಯನ್ನು ಬಲಪಡಿಸ ಬೇಕು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹುದ್ದೆಗಳನ್ನು ಮಂಜೂರು ಮಾಡಿ ಪದವಿ ಪೂರ್ವ ಶಿಕ್ಷಣ ಬಲವರ್ಧನೆಗೆ ಮುಂದಾಗಬೇಕೆಂದು ಒತಾಯಿಸಿದರು..

ಸರ್ಕಾರ ಯಾವುದೇ ಶಿಕ್ಷಕ,ಶಿಕ್ಷಕೇತರ ಸಂಘಟನೆ, ಶಿಕ್ಷಣ ತಜ್ಞರ ಜೊತೆಗಾಗಲಿ ಸಾಧಕ- ಬಾಧಕಗಳನ್ನು ಕುರಿತು ಚರ್ಚೆ, ಸಮಾಲೋಚನೆಗಳನ್ನು ನಡೆಸದೆ ಏಕಾಏಕಿ ಪಿಯು ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಿರುವುದು ಸಂಪೂರ್ಣ ಅವೈಜ್ಞಾನಿಕ, ಇದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಕುಸಿಯುವುದು ಮಾತ್ರವಲ್ಲ; ಓದಿನ ಬಗ್ಗೆ ತಾತ್ಸಾರ ಬೆಳೆಸುತ್ತದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾರಕವಾಗಿರುವ ಇಂತಹ ಪದ್ಧತಿಯಿಂದ ನೈಜ ಮೌಲ್ಯಮಾಪನ ಸಾಧ್ಯವಾಗುವುದಿಲ್ಲ. ಇಂತಹ ವಿಧಾನದಿಂದ ಪ್ರಮಾಣಾತ್ಮಕ ಫಲಿತಾಂಶ ದೊರಕುತ್ತದೆಯೇ ವಿನಃ ಗುಣಾತ್ಮಕ ಫಲಿತಾಂಶವಲ್ಲ ಜೊತೆಗೆ ಉಪನ್ಯಾಸಕರು ಶೈಕ್ಷಣಿಕ ವರ್ಷಾರಂಭದ ಕೆಲವು ತಿಂಗಳು ದಾಖಲಾಗಿರುವ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡುವುದನ್ನು ಬಿಟ್ಟು ಹಳೆಯ ವಿದ್ಯಾರ್ಥಿಗಳ ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯಗಳಲ್ಲಿ ತೊಡಗಬೇಕಾಗುತ್ತದೆ. ಇಷ್ಟೇ ಅಲ್ಲದೆ, ಸಂಪೂರ್ಣ ಬೇಸಿಗೆ ರಜೆಯನ್ನು ಉಪನ್ಯಾಸಕರು ಕಳೆದು ಕೊಳ್ಳಬೇಕಾಗುತ್ತದೆ. ಆದ್ದರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ರಜೆ ರಹಿತ ಇಲಾಖೆಯನ್ನಾಗಿ ಘೋಷಿಸಿ, ಇತರ ಸವಲತ್ತುಗಳನ್ನು ನೀಡಬೇಕೆಂದು ಆಗ್ರಹಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!