ಸರ್ಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲ ನಾಗಾನಂದ್ ಅವರ ಮೇಲೆ ಶಾಸಕ ಎಂ. ಶ್ರೀನಿವಾಸ್ ಹಲ್ಲೆ ನಡೆಸಿರುವುದು ಖಂಡನೀಯವಾಗಿದ್ದು, ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ಐಟಿಐ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ವಿದ್ಯಾರ್ಥಿಗಳು ಉನ್ನತ ಸ್ಥಾನದಲ್ಲಿರುವ ಪ್ರಾಂಶುಪಾಲರ ಮೇಲೆ ವಿದ್ಯಾರ್ಥಿಗಳ ಎದುರಿನಲ್ಲಿಯೇ ಶಾಸಕ ಎಂ. ಶ್ರೀನಿವಾಸ್ ಹಲ್ಲೆ ಮಾಡಿರುವುದು ಸರಿಯಲ್ಲ.
ಕೂಡಲೇ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಲ್ಲದೆ ರಾಜ್ಯಪಾಲರು ಈ ವಿಚಾರವನ್ನು ಸೂಕ್ಷ್ಮವಾಗಿ ಪರಿಗಣಿಸಿ ಕಾನೂನು ರೀತಿಯ ಕ್ರಮ ಜರುಗಿಸಬೇಕು ಎಂದು ಒತ್ತಾಯ ಮಾಡಿದರು.
ಸುಕೃತ್ ಪಾಟೀಲ್, ದರ್ಶನ್, ವಿನಯ್, ರಾಜೇಶ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಟನೆಯಲ್ಲಿ ಪಾಲ್ಗೊಂಡಿದ್ದರು.