ಮಂಡ್ಯ ಗ್ರಾಮಾಂತರ ಪ್ರದೇಶದಲ್ಲಿ ಸಾರ್ವಜನಿಕರಿಗೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ಸರಬರಾಜು ಮಾಡುವಂತೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ತಾ.ಪಂ. ಇಓ ಗಳು ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರರುಗಳಿಗೆ ಸೂಚಿಸಿದರು.
ಮಂಡ್ಯ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಸೂಚಿಸಿರುವಂತೆ ಹೋಬಳಿ ಮಟ್ಟದಲ್ಲಿ ಗ್ರಾಮ ಪಂಚಾಯತ್ ನ ನೀರು ಗಂಟಿಗಳು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳ ಪಟ್ಟಿ ಮಾಡಿ ಅವುಗಳಿಗೆ ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ಮುಂದಿನ ಸಭೆಯಲ್ಲಿ ವರದಿ ಸಲ್ಲಿಸಲು ಸೂಚಿಸಿದರು.
ಬಹುಗ್ರಾಮ ಯೋಜನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ: ಜಿಲ್ಲೆಯಾದ್ಯಂತ ಪ್ರಗತಿಯಲ್ಲಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಶುದ್ಧ ನೀರು ಸರಬರಾಜು ಮಾಡಲು ಅಗತ್ಯ ಕ್ರಮ ವಹಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರರುಗಳಿಗೆ ಸೂಚಿಸಿದರು.
ತಾ.ಪಂ. ಇಓ, ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು ಜಂಟಿಯಾಗಿ ತಮ್ಮ ಇಲಾಖೆಗೆ ಸಂಬಂಧಿಸಿದ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಕುಡಿಯುವ ನೀರಿನ ಮೂಲಗಳನ್ನು ರಾಸಾಯನಿಕ ಮತ್ತು ಮೈಕ್ರೋಬಯಾಲಜಿ ಪರೀಕ್ಷೆಗೆ ಒಳಪಡಿಸಿ ನೀರು ಶುದ್ಧವಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.
ಕೊಳವೆ ಬಾವಿಗಳಿಗೆ ರಕ್ಷಣಾ ಕಾಮಗಾರಿಗಳನ್ನು ಪೂರ್ಣಗೊಳಿಸಿ: ಈಗಾಗಲೇ ಕೃಷ್ಣರಾಜಪೇಟೆ ತಾಲ್ಲೂಕಿನ ಎಲ್ಲಾ ಕೊಳವೆ ಬಾವಿಗಳಿಗೆ ರಕ್ಷಣಾ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದು, ಉಳಿದ ತಾಲ್ಲೂಕುಗಳು ಸಹ ಅದೇ ಮಾದರಿಯಲ್ಲಿ ರಕ್ಷಣಾ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದರು. ಇದರಿಂದ ಕೊಳವೆ ಬಾವಿಗಳು ಕಲುಷಿತಗೊಳ್ಳುವುದನ್ನು ತಡೆಗಟ್ಟಬಹುದು ಎಂದು ತಿಳಿಸಿದರು.
ಕೃಷ್ಣರಾಜಪೇಟೆ ಉಪವಿಭಾಗದ ಎಇಇ ರವರಿಗೆ ಪ್ರಶಂಸಾ ಪತ್ರ: ತಾಲ್ಲೂಕಿನ ಎಲ್ಲಾ ಕೊಳವೆ ಬಾವಿಗಳಿಗೆ ರಕ್ಷಣಾ ಕಾಮಗಾರಿಗಳನ್ನು ಪೂರ್ಣಗೊಳಿಸಲು ಶ್ರಮಿಸಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಎಇಇ ರಶ್ಮಿ ಆರ್ ಅವರಿಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಪ್ರಶಂಸಾ ಪತ್ರ ನೀಡಿ ಗೌರವಿಸಿದರು.
ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಕ್ರಮವಹಿಸಲು ಸೂಚನೆ: ಕಾರ್ಯಾಚರಣೆ ಮತ್ತು ನಿರ್ವಹಣೆಯ ಅವಧಿ ಮುಕ್ತಾಯವಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಒಂದು ಬಾರಿಗೆ ದುರಸ್ತಿ ಮಾಡಿ ಗ್ರಾ.ಪಂ.ಗಳಿಗೆ ಹಸ್ತಾಂತರ ಮಾಡುವಂತೆ ಸರ್ಕಾರವು ನಿರ್ದೇಶನ ನೀಡಿದ್ದು, ಅದರಂತೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಗ್ರಾ.ಪಂ.ಗೆ ಹಸ್ತಾಂತರ ಮಾಡಲಾಗಿದೆ. ಸದರಿ ಘಟಕಗಳನ್ನು ಗ್ರಾ.ಪಂ.ಗಳು ಸೂಕ್ತವಾಗಿ ನಿರ್ವಹಣೆ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಗ್ರಾ.ಪಂ.ಗಳಿಗೆ ಹಸ್ತಾಂತರ ಮಾಡಲು ಬಾಕಿ ಇರುವ ಘಟಕಗಳನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಕಾರ್ಯಾಚರಣೆ ಮತ್ತು ನಿರ್ವಹಣೆಯ ಗುತ್ತಿಗೆ ಪಡೆದಿರುವ ಸಂಸ್ಥೆಯ ವತಿಯಿಂದಲೇ ನಿರ್ವಹಿಸಬೇಕೆಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ರೂಪಶ್ರೀ ಕೆ.ಎನ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಪ್ರಮೋದ್ ಕುಮಾರ್ ಎನ್.ಜಿ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಆಶಾಲತಾ ಸೇರಿದಂತೆ ಜಿಲ್ಲೆಯ ಎಲ್ಲಾ ತಾ.ಪಂ. ಇಓ ಗಳು, ಎಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳ ಎಇಇ ಗಳು ಹಾಜರಿದ್ದರು.




