Tuesday, November 17, 2026

ಪ್ರಾಯೋಗಿಕ ಆವೃತ್ತಿ

ಅಧಿಕಾರಿಗಳು ಅನುದಾನ ಸದ್ಬಳಕೆಗೆ ಆದ್ಯತೆ ನೀಡಬೇಕು : ಮನೋಜ್ ಕುಮಾರ್ ಮೀನಾ

ಮಂಡ್ಯ: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ವತಿಯಿಂದ ಕೈಗೆತ್ತಿಕೊಳ್ಳುವ ಅಭಿವೃದ್ಧಿ ಕಾಮಗಾರಿಗಳಲ್ಲಿ ವಿಳಂಬಕ್ಕೆ ಅವಕಾಶ ನೀಡದೆ, ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳು ವೈಯಕ್ತಿಕ ಜವಾಬ್ದಾರಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಮನೋಜ್ ಕುಮಾರ್ ಮೀನಾ ಅವರು ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಕಚೇರಿಗೆ ಸೀಮಿತವಾಗದೆ ಕಾಮಗಾರಿ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪ್ರಗತಿ ಪರಿಶೀಲಿಸಬೇಕು. ಸ್ಥಳ ಪರಿಶೀಲನೆ, ತಾಂತ್ರಿಕ ಅನುಮೋದನೆ, ಭೂಸ್ವಾಧೀನ ಸೇರಿದಂತೆ ಅಗತ್ಯ ಪೂರ್ವಸಿದ್ಧತೆಗಳನ್ನು ಆರಂಭಿಕ ಹಂತದಲ್ಲಿಯೇ ಪೂರ್ಣಗೊಳಿಸಿ, ಟೆಂಡರ್ ಪ್ರಕ್ರಿಯೆ ಮುಗಿಸಿ ಕಾಮಗಾರಿಗಳಿಗೆ ಚಾಲನೆ ನೀಡಬೇಕು. ಆಗಸ್ಟ್‌ನಿಂದ ನವೆಂಬರ್‌ವರೆಗೆ ಕೆಲವು ಕಾಮಗಾರಿಗಳು ಆರಂಭವಾಗದಿರುವುದು ಗಂಭೀರ ವಿಚಾರವಾಗಿದ್ದು, ಸಣ್ಣಪುಟ್ಟ ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ವಿಳಂಬ ಮಾಡಬಾರದು ಎಂದು ಎಚ್ಚರಿಸಿದರು.

ಮುಂದಿನ ಜನವರಿಯೊಳಗೆ ಎಲ್ಲಾ ಕಾಮಗಾರಿಗಳ ಅಂದಾಜು ಪಟ್ಟಿ ಸಿದ್ಧಪಡಿಸಿ, ಅಗತ್ಯ ಪೂರ್ವಸಿದ್ಧತೆಗಳನ್ನು ಪೂರ್ಣಗೊಳಿಸಬೇಕು. ಕಾಮಗಾರಿಗಳ ಆದ್ಯತೆಗಳನ್ನು ಆರಂಭದಲ್ಲಿಯೇ ಅಂತಿಮಗೊಳಿಸಬೇಕು. ಆರು ತಿಂಗಳಿಗೊಮ್ಮೆ ಆದ್ಯತೆ ಬದಲಾಯಿಸುವುದರಿಂದ ಅನುಷ್ಠಾನದಲ್ಲಿ ಗೊಂದಲ ಉಂಟಾಗುತ್ತದೆ. ಅನುಮೋದಿತ ಕಾಮಗಾರಿಗಳ ಒಪ್ಪಂದ ಹಾಗೂ ಸಾಮಗ್ರಿಗಳ ಖರೀದಿ ಪ್ರಕ್ರಿಯೆಯನ್ನು ಜನವರಿ ಅಂತ್ಯದೊಳಗೆ ಪೂರ್ಣಗೊಳಿಸಿ ಕಾಮಗಾರಿಗಳ ಅನುಷ್ಠಾನಕ್ಕೆ ಸಿದ್ಧರಾಗಬೇಕು ಎಂದರು.

ಸರ್ಕಾರ ಹಾಗೂ ಜಿಲ್ಲಾ ಪಂಚಾಯಿತಿಯಿಂದ ಬಿಡುಗಡೆಯಾಗುವ ಅನುದಾನವನ್ನು ಆರ್ಥಿಕ ವರ್ಷದ ಕೊನೆಯಲ್ಲಿ ತರಾತುರಿಯಿಂದ ವೆಚ್ಚ ಮಾಡುವ ಬದಲು, ನಿಗದಿತ ಉದ್ದೇಶಕ್ಕೆ ಅನುಗುಣವಾಗಿ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಅನುದಾನ ವೆಚ್ಚ ಮಾಡುವುದಷ್ಟೇ ಅಭಿವೃದ್ಧಿಯ ಮಾನದಂಡವಲ್ಲ; ಕಾಮಗಾರಿಗಳ ಗುಣಮಟ್ಟ ಹಾಗೂ ಸಾರ್ವಜನಿಕರಿಗೆ ದೊರೆಯುವ ನೈಜ ಪ್ರಯೋಜನ ಮುಖ್ಯವಾಗಬೇಕು. ಪ್ರತಿಯೊಬ್ಬ ಅಧಿಕಾರಿಯೂ ತಮ್ಮ ಇಲಾಖೆಯ ಜವಾಬ್ದಾರಿಯನ್ನು ವೈಯಕ್ತಿಕ ಹೊಣೆಗಾರಿಕೆಯಾಗಿ ಪರಿಗಣಿಸಬೇಕು ಎಂದು ತಿಳಿಸಿದರು.

ವಿದ್ಯಾರ್ಥಿನಿಲಯಗಳ ದುರಸ್ತಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒದಗಿಸಿರುವ ಅನುದಾನವನ್ನು ಸಕಾಲದಲ್ಲಿ ಬಳಸಿಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ವಸತಿ ಮತ್ತು ಕಲಿಕಾ ವಾತಾವರಣ ಕಲ್ಪಿಸಬೇಕು. ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುವ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಹಾಗೂ ಅಗತ್ಯ ಸೌಲಭ್ಯಗಳು ದೊರೆಯುವಂತೆ ಕ್ರಮವಹಿಸಬೇಕು. ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾಮಗಾರಿಗಳ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಅನುದಾನ ಬಳಕೆಗೆ ಆದ್ಯತೆ: ಕೆ.ಆರ್. ನಂದಿನಿ

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಮಾತನಾಡಿ, ವಿವಿಧ ಇಲಾಖೆಗಳ ಕಾಮಗಾರಿಗಳು ಹಾಗೂ ಯೋಜನೆಗಳ ಅನುಷ್ಠಾನದಲ್ಲಿ ಸಾರ್ವಜನಿಕರ ನೈಜ ಅಗತ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ಒಂದೇ ಕಾಮಗಾರಿಗೆ ಎರಡು ಮೂಲಗಳಿಂದ ಅನುದಾನ ಬಳಕೆಯಾಗದಂತೆ ಎಚ್ಚರಿಕೆ ವಹಿಸಲಾಗಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಜಂಟಿ ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿಗಳ ಅಗತ್ಯತೆ, ಸ್ಥಳ ಲಭ್ಯತೆ ಹಾಗೂ ತಾಂತ್ರಿಕ ಅಂಶಗಳನ್ನು ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ ಎಂದರು.
ವೇತನ, ಪಿಂಚಣಿ, ಗ್ರಾಚ್ಯುಟಿ ಹಾಗೂ ಹೊರಗುತ್ತಿಗೆ ಸಿಬ್ಬಂದಿಯ ವೆಚ್ಚ ಸೇರಿದಂತೆ ಬದ್ಧ ವೆಚ್ಚಗಳಿಗೆ ಅಗತ್ಯವಿರುವ ಅನುದಾನದ ಕುರಿತು ಪರಿಶೀಲಿಸಿ, ಹೆಚ್ಚುವರಿ ಅನುದಾನದ ಪ್ರಸ್ತಾವನೆಗಳನ್ನು ಹಣಕಾಸು ಇಲಾಖೆಗೆ ಸಲ್ಲಿಸಲಾಗಿದೆ. ಖರೀದಿ ಪ್ರಕ್ರಿಯೆ ಹಾಗೂ ನಾಗರಿಕ ಕಾಮಗಾರಿಗಳನ್ನು ಕೆಟಿಪಿಪಿ ಕಾಯ್ದೆ ಮತ್ತು ನಿಯಮಗಳನ್ವಯ ಪಾರದರ್ಶಕವಾಗಿ ಪೂರ್ಣಗೊಳಿಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

ಶಾಲೆಗಳ ಉಪಕರಣ ಮತ್ತು ಸಾಮಗ್ರಿಗಳ ಖರೀದಿ, ಅನುದಾನ ಬಳಕೆ ಹಾಗೂ ಕಾಮಗಾರಿಗಳ ಪ್ರಗತಿಯ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳು ವರದಿ ಸಲ್ಲಿಸಬೇಕು. ಅನುದಾನದ ಕೊರತೆಯಿಂದ ಅಪೂರ್ಣಗೊಂಡಿರುವ ಕಾಮಗಾರಿಗಳು ಹಾಗೂ ಹೆಚ್ಚುವರಿ ಅನುದಾನದ ಅಗತ್ಯವಿರುವ ಯೋಜನೆಗಳ ಪ್ರಸ್ತಾವನೆಗಳನ್ನು ಮುಂದಿನ ಆರ್ಥಿಕ ವರ್ಷದ ಬಜೆಟ್‌ನಲ್ಲಿ ಪರಿಗಣಿಸುವಂತೆ ರಾಜ್ಯಮಟ್ಟಕ್ಕೆ ಸಲ್ಲಿಸಲಾಗುವುದು ಎಂದರು.

ಜಿಲ್ಲೆಯ ಹಾಲಿನ ಬ್ಯಾಂಕ್ ಕಾರ್ಯಾರಂಭಕ್ಕೆ ಅಗತ್ಯವಿರುವ ಬಹುತೇಕ ಮೂಲಸೌಕರ್ಯ ಕಾಮಗಾರಿಗಳು ಪೂರ್ಣಗೊಂಡಿವೆ. ಆದರೆ ಆಟೋಕ್ಲೇವ್ ಯಂತ್ರ, ಡೀಪ್ ಫ್ರೀಜರ್ ಸೇರಿದಂತೆ ಮೂರು ಪ್ರಮುಖ ಉಪಕರಣಗಳ ಕೊರತೆಯಿದ್ದು, ಅವುಗಳನ್ನು ಒದಗಿಸುವಂತೆ ಸಂಬಂಧಪಟ್ಟ ಇಲಾಖೆಯ ಕಾರ್ಯದರ್ಶಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಗತ್ಯ ಉಪಕರಣಗಳು ಲಭ್ಯವಾದಲ್ಲಿ ಹಾಲಿನ ಬ್ಯಾಂಕ್ ಸಂಪೂರ್ಣವಾಗಿ ಸಾರ್ವಜನಿಕರ ಬಳಕೆಗೆ ಸಿದ್ಧವಾಗಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ಕೋಶದ ಅಧಿಕಾರಿ ಧನುಷ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ (ದರ್ಜೆ-1) ಶಿವಲಿಂಗಯ್ಯ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ