‘ಪದ್ಮಶ್ರೀ’ ಪುರಸ್ಕೃತ ಕೃಷಿ ವಿಜ್ಞಾನಿ, ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ಐಸಿಎಆರ್) ನಿವೃತ್ತ ನಿರ್ದೇಶಕ ಪ್ರೊ.ಸುಬ್ಬಣ್ಣ ಅಯ್ಯಪ್ಪನ್ (70) ಅವರು ನಿಗೂಢವಾಗಿ ಸಾವಿಗೀಡಾಗಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಬಳಿ ಕಾವೇರಿ ನದಿಯಲ್ಲಿ ಶನಿವಾರ ಮಧ್ಯಾಹ್ನ ಮೃತದೇಹವು ಕೊಳೆಯುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.
ಮೈಸೂರಿನ ವಿಶ್ವೇಶ್ವರನಗರ ಕೈಗಾರಿಕಾ ಪ್ರದೇಶದ ಅಕ್ಕಮಹಾದೇವಿ ರಸ್ತೆಯ ಮನೆಯಲ್ಲಿ ವಾಸವಿದ್ದರು. ಶ್ರೀರಂಗಪಟ್ಟಣದ ಸಾಯಿಬಾಬಾ ಆಶ್ರಮದ ಸಮೀಪ 3 ದಿನದ ಹಿಂದೆ ನದಿಗೆ ಹಾರಿದ್ದರು. ದಡದಲ್ಲಿ ಅವರ ಸ್ಕೂಟರ್ ಸಿಕ್ಕಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಕಳೆದ ಮೇ 7ರಂದು ಮನೆಯಿಂದ ಹೋದವರು ನಾಪತ್ತೆಯಾಗಿದ್ದಾರೆ. ಮೊಬೈಲ್ ಫೋನ್ ಮನೆಯಲ್ಲೇ ಬಿಟ್ಟಿದ್ದಾರೆ’ ಎಂದು ಕುಟುಂಬದವರು ಮೈಸೂರಿನ ವಿದ್ಯಾರಣ್ಯಪುರಂ ಠಾಣೆಗೆ ದೂರು ನೀಡಿದ್ದರು. ಶವವನ್ನು ಮರಣೋತ್ತರ ಪರೀಕ್ಷೆಗೆ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸಾಗಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ




