ಮಹಿಳೆಯರ ಬಗ್ಗೆ ಕೀಳಾಗಿ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ ಹಾಗೂ ಯುವತಿಗೆ ಬೆದರಿಕೆ ಹಾಕಿರುವ ಕಲ್ಕಡ ಪ್ರಭಾಕರ್ ಭಟ್ ವಿರುದ್ದ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಳವಳ್ಳಿ ಪಟ್ಟಣದ ಅನಂತರಾಮ್ ಸರ್ಕಲ್ ನಲ್ಲಿ ಜನವಾದಿ ಮಹಿಳಾ ಸಂಘಟನೆ ಸೋಮವಾರ ಪ್ರತಿಭಟನೆ ನಡೆಸಿತು.
ಈ ಸಂದರ್ಭದಲ್ಲಿ ಜನವಾದಿ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಮಾತನಾಡಿ, ಕಲ್ಲಡ್ಕ ಪ್ರಭಾಕರ್ ಭಟ್ ಆಡಿದ ಮಾತುಗಳನ್ನು ಅಖಿಲ ಭಾರತ ಜನವದಿ ಮಹಿಳಾ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ. ಮಹಿಳೆಯರ ಬಗ್ಗೆ ಕೀಳಾಗಿ ಮತ್ತು ಅವಹೇಳನಕಾರಿಯಾಗಿ ಮಾತನಾಡುವುದು, ಅವರನ್ನು ಎರಡನೇ ದರ್ಜೆ ಪ್ರಜೆಗಳನ್ನಾಗಿ ಕಾಣುವುದು ಆರ್ ಎಸ್ಎಸ್ ನ ಮನಸ್ಥಿತಿಯಾಗಿದೆ ಎಂದು ಕಿಡಿಕಾರಿದರು.
ಶ್ರೀರಂಗಪಟ್ಟಣದಲ್ಲಿ ಹನುಮ ಸಂಕೀರ್ತನಾ ಕಾರ್ಯಕ್ರಮದಲ್ಲಿ ಮಾತನಾಡಿ, ಅನಗತ್ಯವಾಗಿ ಮುಸಲ್ಮಾನ ಯುವತಿ ಮುಸ್ಕಾನ್ ಅವರಿಗೆ ಆಲ್ ಕೈದಾ ಸಂಘಟನೆ ಜೊತೆ ಸಂಬಂಧ ಹಸಿ ಸುಳ್ಳು ಹೇಳಿರುವುದು ಅವರ ಮನುವಾದಿ ಮನೋಸ್ಥಿತಿಯನ್ನು ತೋರಿಸುತ್ತದೆ ಎಂದು ಕಿಡಿಕಾರಿದ ಅವರು, ಯುವತಿ ಕಾಲೇಜಿಗೆ ಹೋಗದ ಹಾಗೆ ತಡೆಯುವುದಾಗಿ ಬೆದರಿಕೆ ಹಾಕಿರುವುದು ಮಹಿಳೆಯರನ್ನು ಶಿಕ್ಷಣದಿಂದ ದೂರವಿಡುವ ಆರ್.ಎಸ್.ಎಸ್ ಮನಸ್ಥಿತಿಯನ್ನು ತೋರಿಸಿದ್ದಾರೆ, ಆದ್ದರಿಂದ ಕೂಡಲೇ ಅವರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಲತಾ, ಜಿಲ್ಲಾ ಕಾರ್ಯದರ್ಶಿ ಸುಶೀಲ, ಜಿಲ್ಲಾ ಖಜಾಂಚಿ ರಾಣಿ, ಜಿಲ್ಲಾ ಉಪಾಧ್ಯಕ್ಷ ಶೋಭಾ, ಜಿಲ್ಲಾ ಸಹ ಕಾರ್ಯದರ್ಶಿ ಮಂಜುಳಾ ಹಾಗೂ ಜಯಶೀಲ ಸೇರಿದಂತೆ ಇತರರು ಭಾಗವಹಿಸಿದ್ದರು.




