ಮಂಡ್ಯ ತಾಲ್ಲೂಕಿನ ಕೆರಗೋಡು ಧ್ವಜ ವಿವಾದ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗಳಲ್ಲಿ ಭಾಗಿಯಾದ ಆರೋಪದ ಮೇಲೆ ಕೆಲವರಿಗೆ ಪೊಲೀಸರು ನೋಟೀಸ್ ನೀಡಿರುವುದನ್ನು ಖಂಡಿಸಿ, ಸಂಘ ಪರಿವಾರದ ಕಾರ್ಯಕರ್ತರು ಕೆರಗೋಡಿನಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಕೆರಗೋಡು ಬಸ್ ನಿಲ್ದಾಣದಿಂದ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಸಂಘ ಪರಿವಾರದ ಕಾರ್ಯಕರ್ತರು ಮೆರವಣಿಗೆ ಹೊರಟು, ಪೊಲೀಸ್ ಠಾಣೆವರೆಗೆ ತೆರಳಿ ಪೊಲೀಸರು ಜಾರಿ ಮಾಡಿದ್ದ ನೋಟಿಸ್ ರಾಜಕೀಯ ಪ್ರೇರಿತವಾಗಿದೆ ಎಂದು ದೂರಿದರು.
ರಾಜ್ಯ ಸರ್ಕಾರ ಹಾಗೂ ಸಚಿವರು, ಶಾಸಕರ ಒತ್ತಡಕ್ಕೆ ಮಣಿದು ಹನುಮ ಧ್ವಜ ಹೋರಾಟದಲ್ಲಿ ಭಾಗಿಯಾಗಿದ್ದವರ ಮೇಲೆ ಶಾಸಕರು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ, ರಾಜಕೀಯ ಒತ್ತಡಕ್ಕೆ ಒಳಗಾಗಿರುವ ಪೊಲೀಸರು ಅಮಾಯಕರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡುತ್ತಿದ್ದಾರೆ, ಜೈ ಶ್ರೀ ರಾಮ್ ಘೋಷಣೆ ಕೂಗಿದವರನ್ನು ಠಾಣೆಗೆ ಕರೆಸಿ ಬೆದರಿಕೆ ಹಾಕಲಾಗುತ್ತಿದೆ. ಹನುಮ ಧ್ವಜ ಹೋರಾಟದಲ್ಲಿ ಭಾಗಿಯಾಗಿದ್ದ ಬಾಲಕೃಷ್ಣ, ಶಿವು, ಕಾರ್ತಿಕ್ ಹಾಗೂ ಹರೀಶ್ ಗೆ ನಿಮ್ಮನ್ನು ಏಕೆ ರೌಡಿ ಶೀಟರ್ ಪಟ್ಟಿಗೆ ಸೇರಿಸಬಾರದು ಎಂದು ನೋಟಿಸ್ ಜಾರಿ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೌಡಿಶೀಟರ್ ಪಟ್ಟಿಗೆ ಸೇರ್ಪಡೆ ಮಾಡಲು ಅದಕ್ಕೆ ಆದ ನಿಯಮಾವಳಿಗಳಿವೆ, ಆದರೆ ಅದನ್ನೆಲ್ಲ ಗಾಳಿಗೆ ತೂರಿ ಯಾವುದೇ ಕ್ರಿಮಿನಲ್ ಅಪರಾಧ ಇಲ್ಲದಿದ್ದರೂ ಹನುಮ ಧ್ವಜ ಹೋರಾಟದಲ್ಲಿ ಭಾಗಿಯಾಗಿದ್ದಾರೆ ಎಂಬ ಏಕೈಕ ಕಾರಣಕ್ಕೆ ರೌಡಿಶೀಟರ್ ಪಟ್ಟಿಗೆ ಸೇರಿಸಲು ಪೋಲಿಸ್ ಅಧಿಕಾರಿಗಳು ಮುಂದಾಗಿದ್ದಾರೆ, ಕೆರಗೋಡು ಠಾಣೆಯ ಸಬ್ ಇನ್ ಸ್ಪೆಕ್ಟರ್, ಸರ್ಕಲ್ ಇನ್ ಸ್ಪೆಕ್ಟರ್ ಹಾಗೂ ಡಿವೈಎಸ್ಪಿಗಳು ವಿನಾಕಾರಣ ಕಿರುಕುಳ ನೀಡುತ್ತಿದ್ದು, ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಗುರಿ ಮಾಡಲಾಗಿದೆ. ಈ ಕೂಡಲೇ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಒತ್ತಾಯಿಸಿದರು.
ಪೊಲೀಸರ ನೋಟಿಸ್ ಗೆ ಉತ್ತರ ನೀಡುತ್ತೇವೆ, ಪೊಲೀಸರು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಅಮಾಯಕ ಯುವಕರನ್ನು ರೌಡಿಶೀಟರ್ ಪಟ್ಟಿಗೆ ಸೇರಿಸಲು ಮುಂದಾದರೆ ಕಾನೂನು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಜೆಡಿಎಸ್ ಮುಖಂಡ ಬಿ ಆರ್ ರಾಮಚಂದ್ರ, ಮುಖಂಡರಾದ ರಘುನಂದನ್, ವಸಂತಕುಮಾರ್, ಯೋಗೇಶ್, ನರಸಿಂಹಮೂರ್ತಿ, ವಿರೂಪಾಕ್ಷ, ಬಾಲು ಚಿಕ್ಕಬಳ್ಳಿ, ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.




