Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಗ್ರಾ.ಪಂ.ಗಳಲ್ಲಿ ಪ್ರತಿ ಸೋಮವಾರ ಕುಂದುಕೊರತೆ ಸಭೆ

ಮಂಡ್ಯ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಪ್ರತೀ ಸೋಮವಾರ ಸಾರ್ವಜನಿಕರ ಕುಂದುಕೊರತೆ ಸಭೆಗಳನ್ನು ಆಯೋಜಿಸುವಂತೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಸೂಚಿಸಿದ್ದ ಹಿನ್ನಲೆಯಲ್ಲಿ ಇಂದು ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆಗಳನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು ಸರ್ಕಾರಿ ಕೆಲಸಗಳಿಗೆ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಹಾಗೂ ನಿಗಧಿತ ಅವಧಿಯೊಳಗೆ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರತೀ ಸೋಮವಾರ ಸಾರ್ವಜನಿಕ ಕುಂದು ಕೊರತೆ ಸಭೆಗಳನ್ನು ಆಯೋಜಿಸುವಂತೆ ಮಂಡ್ಯ ಜಿಲ್ಲೆಯ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲಾಗಿತ್ತು ಎಂದು ಜಿ.ಪಂ. ಸಿಇಓ ನಂದಿನಿ ಕೆ.ಆರ್. ತಿಳಿಸಿದರು.
ಕುಡಿಯುವ ನೀರು, ರಸ್ತೆ, ಬೀದಿ ದೀಪ, ಸ್ವಚ್ಛತೆ ಸೇರಿದಂತೆ ಗ್ರಾ.ಪಂ. ವ್ಯಾಪ್ತಿಗೆ ಬರುವ ಇತರೆ ಎಲ್ಲಾ ವಿಷಯಗಳ ಬಗ್ಗೆ ಗ್ರಾ.ಪಂ. ಅಧಿಕಾರಿಗಳಿಗೆ ಮನವಿ ಅಥವಾ ದೂರು ಸಲ್ಲಿಸಬಹುದಾಗಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಈ ಕುರಿತು ನಿಗಧಿತ ಕಾಲಮಿತಿಯೊಳಗೆ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.
ಸಾರ್ವಜನಿಕ ಕುಂದು ಕೊರತೆ ಸಭೆಗಳ ಕುರಿತು ಮೇಲ್ವಿಚಾರಣೆ ನಡೆಸಲು ಜಿಲ್ಲಾ ಪಂಚಾಯತ್ ಕಚೇರಿಯ ಅಧಿಕಾರಿಗಳನ್ನು ತಾಲ್ಲೂಕು ನೋಡಲ್ ಅಧಿಕಾರಿಗಳನ್ನಾಗಿ ಮಾಡಲಾಗಿದ್ದು, ಈ ಅಧಿಕಾರಿಗಳು ತಮ್ಮ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆ ಆಯೋಜಿಸಿರುವ ಬಗ್ಗೆ ಖಚಿತಪಡಿಸಿಕೊಳ್ಳಲಿದ್ದಾರೆ.
ಜಿ.ಪಂ. ಮತ್ತು ತಾ.ಪಂ. ಕಚೇರಿಗಳಲ್ಲಿಯೂ ಪ್ರತಿ ಸೋಮವಾರ ಸಾರ್ವಜನಿಕ ಕುಂದು ಕೊರೆತೆ ಸಭೆ ಆಯೋಜನೆ: ಗ್ರಾ.ಪಂ.ಗಳ ಮಾದರಿಯಲ್ಲೇ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಕಚೇರಿಗಳಲ್ಲಿಯೂ ಪ್ರತೀ ಸೋಮವಾರ ಮಧ್ಯಾಹ್ನ 3 ಗಂಟೆಯಿಂದ 6 ಗಂಟೆಯವರೆಗೂ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲು ಸಭೆ ಆಯೋಜಿಸಲಾಗುತ್ತಿದೆ.
ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜರುಗುವ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಕಚೇರಿಯ ಎಲ್ಲಾ ಅಧಿಕಾರಿಗಳು ಹಾಜರಿರಲಿದ್ದಾರೆ ಎಂದು ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ತಿಳಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ