ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡುವಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಅಪಾರ ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ತಿಳಿಸಿದರು.
ಮಂಡ್ಯ ನಗರದ ಮಾಂಡವ್ಯ ಎಕ್ಸಲೆನ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ 2022-23ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಮತ್ತು ಕಿರಿಯ ವಿದ್ಯಾರ್ಥಿಗಳಿಂದ ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಮಾತನಾಡಿದರು.
ಮಂಡ್ಯದ ಮಾಂಡವ್ಯ ಎಕ್ಸಲೆನ್ಸ್ ಕಾಲೇಜಿಗೆ ನೆರೆಯ ಜಿಲ್ಲೆಗಳಿಂದಲೂ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಸೇರ್ಪಡೆಯಾಗಿರುವುದು ವಿಶೇಷ ಸಂಗತಿ. ಉತ್ತಮ ಗುಣಮಟ್ಟದ ಶಿಕ್ಷಣವನ್ನು ಕಳೆದ 10ವರ್ಷದಿಂದ ವಿದ್ಯಾರ್ಥಿಗಳಿಗೆ ನೀಡುತ್ತಿರವ ಕಾರಣ ವಿದ್ಯಾರ್ಥಿಗಳ ಪೋಷಕರು ಈ ಕಾಲೇಜಿಗೆ ತಮ್ಮ ಮಕ್ಕಳನ್ನು ಸೇರಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ಪೋಷಕರ ಹಾಗೂ ಶಿಕ್ಷಕರ ಕನಸುಗಳನ್ನು ನನಸು ಮಾಡುವತ್ತ ತಮ್ಮ ಗುರಿಯನ್ನು ಇಟ್ಟುಕೊಂಡು ಈಗಿನಿಂದಲೇ ಶ್ರಮವಹಿಸಿ ಓದಿ ಜೀವನದಲ್ಲಿ ಯಶಸ್ವಿಯಾಗಬೇಕು ಎಂದು ಹೇಳಿದರು.
ಎಸ್.ಬಿ.ಇ.ಟಿ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಕೇವಲ ಮೋಜು, ಮಸ್ತಿ, ಸುಖ, ಸಂತೋಷವನ್ನು ಅರಸಿ ಹೋಗಬಾರದು. ನಿಮ್ಮ ಸುತ್ತಮುತ್ತಲಿನ ಜನರ ಸಂತೋಷಕ್ಕಾಗಿ ಶ್ರಮಿಸಬೇಕು ಹಾಗೂ ಸಮುದಾಯಕ್ಕೆ ಒಳ್ಳೆಯ ಕೆಲಸಗಳನ್ನು ಮಾಡಬೇಕು ಎಂದು ತಿಳಿಸಿದರು.
ಶಿಕ್ಷಣ ಎನ್ನುವುದು ಒಂದು ಅಂತರಂಗದ ಸಂಸ್ಕಾರವಾಗಿದ್ದು, ಅದು ಕೇವಲ ವಿಚಾರಗಳ ಸಂಗ್ರಹವಲ್ಲ. ಶಿಕ್ಷಣದ ಮೂಲ ಉದ್ದೇಶ ವಿಚಾರವನ್ನು ಧಾರೆಯೆರೆಯುವ ಜೊತೆಗೆ ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪಿಸುವುದಾಗಿದೆ ಎಂದು ಹೇಳಿದರು.
ಈ ವೇಳೆ ವಿವಿಧ ಕ್ರೀಡೆ ಹಾಗೂ ಸಂಸ್ಕೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಯಿತು. ಬಳಿಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಎಸ್.ಬಿ.ಇ.ಟಿ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ.ಬಿ.ಶಿವಲಿಂಗಯ್ಯ, ಪ್ರಾಂಶುಪಾಲ ಎಚ್.ಎಮ್.ಶ್ರೀನಿವಾಸ್, ಶೈಕ್ಷಣಿಕ ಪಾಲುದಾರ ಚೇತನಕೃಷ್ಣ, ಎಂ.ಆರ್.ಮಂಜು, ಕಾಲೇಜಿನ ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.




