ಮಳೆ ಹಾನಿಯಿಂದ ಉಂಟಾಗಿರುವ ಬೆಳೆಹಾನಿ, ಮನೆಹಾನಿ ಪ್ರದೇಶಗಳನ್ನು ಪರಿಶೀಲನೆ ಮಾಡಿ ಫಲಾನುಭವಿಗಳಿಗೆ ಶೀಘ್ರವೇ ಪರಿಹಾರದ ಹಣ ಪಾವತಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ತಿಳಿಸಿದರು.
ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಒಟ್ಟಿಗೆ ಸೇರಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಪಡೆದು ಪ್ರತಿದಿನ ವರದಿಯನ್ನು ಸಲ್ಲಿಸಬೇಕು ಎಂದರು.
ಮಳೆ ಹಾನಿಯಾಗಿರುವ ಪ್ರದೇಶಗಳಿಗೆ ಅಧಿಕಾರಿಗಳೇ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು.ದಿನೇ ದಿನೇ ಮಳೆ ಹೆಚ್ಚಾಗುತ್ತಿದೆ. ಬಹಳ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು. ರಸ್ತೆ ಕುಸಿದಿರುವ ಸ್ಥಳದಲ್ಲಿ ತಾತ್ಕಾಲಿಕವಾಗಿ ವ್ಯವಸ್ಥೆ ಕಲ್ಪಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಭಾರಿ ಮಳೆ ಆಗಿದ್ದು, ಪ್ರವಾಹ ನೆರೆ ಹಾವಳಿಗೆ ಒಳಗಾಗುವ ಪ್ರದೇಶಗಳಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ತೆರಳದಂತೆ ಸೂಚನಾಫಲಕ ಅಳವಡಿಸಿ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಿ ಎಂದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲ್ಲೂಕು ಮಟ್ಟದಲ್ಲಿ ವಿಪತ್ತು ನಿರ್ವಹಣೆ ಕುರಿತು ಸಭೆ ಮಾಡಿ ಜಾಗೃತಿ ಮೂಡಿಸಬೇಕು. ವಿಪತ್ತು ನಿರ್ವಹಣೆಯಲ್ಲಿ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳ ಪಾತ್ರ ಬಹಳ ಮುಖ್ಯ ಎಂದರು.
ಜಿ.ಪಂ.ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಶಾಂತ ಎಂ. ಹುಲ್ಮನಿ, ಅಪರ ಜಿಲ್ಲಾಧಿಕಾರಿ ಡಾ. ಹೆಚ್. ಎಲ್.ನಾಗರಾಜು, ತಹಶೀಲ್ದಾರ್ ಕುಂಇ ಅಹಮದ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಆರ್ .ಅಶೋಕ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜವರೇಗೌಡ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳಾದ ಡಾ.ಸಂಜಯ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.




