ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ “ಕನ್ನಡಕ್ಕಾಗಿ ಓಟ” ಎಂಬ ಘೋಷವಾಕ್ಯದೊಂದಿಗೆ ಮ್ಯಾರಥಾನ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು ಪ್ರತಿಯೊಬ್ಬರೂ ಕೂಡ ಇದರಲ್ಲಿ ಭಾಗವಹಿಸಬೇಕು ಎಂದು ಮಂಡ್ಯ ಶಾಸಕ ಪಿ.ರವಿಕುಮಾರ್ ತಿಳಿಸಿದರು.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಏರ್ಪಡಿಸಲಾಗಿರುವ “ಕನ್ನಡಕ್ಕಾಗಿ ಓಟ” ಮ್ಯಾರಥಾನ್ ಕಾರ್ಯಕ್ರಮದ ಟೀ ಶರ್ಟ್ ಬಿಡುಗಡೆ ಮಾಡಿ ಮಾತನಾಡಿದರು.
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ “ಕನ್ನಡಕ್ಕಾಗಿ ಓಟ” ಮ್ಯಾರಥಾನ್ ಅನ್ನು ಡಿಸೆಂಬರ್ 17 ರಂದು ಬೆಳಿಗ್ಗೆ 7.00 ಗಂಟೆಗೆ ಮ್ಯಾರಥಾನ್ ಸ್ಪರ್ಧೆಯನ್ನು ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಿಂದ ಸಮ್ಮೇಳನ ನಡೆಯುವ ಸ್ಥಳ (ಸ್ಯಾಂಟೋ ಆಸ್ಪತ್ರೆ ಹಿಂಭಾಗ) ದವರೆಗೆ ಹಮ್ಮಿಕೊಳ್ಳಲಾಗಿದೆ. ಈ ಸ್ಪರ್ಧೆಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ ಎಂದರು.
ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಕುಡಿಯುವ ನೀರು, ಬಿಸ್ಕೆಟ್ ವ್ಯವಸ್ಥೆ ಮಾಡಲಾಗಿದೆ. ಪೊಲೀಸ್ ಬಂದೋಬಸ್ತ್ ವ್ಯವಸ್ಥೆ, ವೈದ್ಯರ ತಂಡ ಸೇರಿದಂತೆ ಎಲ್ಲಾ ಸಕಲ ಸಿದ್ದತೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ ಎಂದು ಹೇಳಿದರು.
ಆರೋಗ್ಯಕ್ಕಾಗಿ ಓಡಿ ನಿಮ್ಮ ಆರೋಗ್ಯವನ್ನು ನೀವೇ ವೃದ್ಧಿಸಿಕೊಳ್ಳಬೇಕು ಅದಕ್ಕಾಗಿಯಾದರೂ ಓಡಬೇಕು. ಸಾರ್ವಜನಿಕರು ಸಂತೋಷದಿಂದ ಈ ಸ್ಪರ್ಧೆಯಲ್ಲಿ ಭಾಗಿಯಾಗಬೇಕು ಎಂದರು ಕರೆ ನೀಡಿದರು.




