Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಸೆ.15ರಂದು 5,000 ವಿದ್ಯಾರ್ಥಿಗಳಿಂದ ಸಂವಿಧಾನ ಪೀಠಿಕೆ ಓದು

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.15ರಂದು ಬೆಳಗ್ಗೆ 10 ಗಂಟೆಗೆ ಮಂಡ್ಯನಗರದ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಜಿಲ್ಲಾ ಮಟ್ಟದ ಸಂವಿಧಾನ ಓದು ಕಾರ್ಯಕ್ರಮ ನಡೆಯಲಿದ್ದು, 5000 ಸಾವಿರ ವಿದ್ಯಾರ್ಥಿಗಳು ಏಕಕಾಲದಲ್ಲಿ ಸಂವಿಧಾನ ಪೀಠಿಕೆ ಓದಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಂವಿಧಾನ ಓದು ಕಾರ್ಯಕ್ರಮಕ್ಕೆ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು. ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿರುವ ಕಚೇರಿಗಳು ಹಾಗೂ ವಿದ್ಯಾಸಂಸ್ಥೆಗಳು ತಮ್ಮ ಕಚೇರಿ, ವಿದ್ಯಾಸಂಸ್ಥೆಗಳಲ್ಲಿ ಸಾಮೂಹಿಕವಾಗಿ ಸಂವಿಧಾನ ಪೀಠಿಕೆ ಓದಬೇಕು ಎಂದು ನಿರ್ದೇಶನ ನೀಡಿದರು.

ಸಂವಿಧಾನದ ಪೀಠಿಕೆಯನ್ನು ಓದುವುದರೊಂದಿಗೆ ಎಲ್ಲರೂ ಸಂವಿಧಾನದ ಪೀಠಿಕೆಗೆ ಬದ್ಧರಾಗಿರಬೇಕು.  ಸಂವಿಧಾನಿಕ ತತ್ವಗಳನ್ನು ತಮ್ಮ ಜೀವನ ಮತ್ತು ಕರ್ತವ್ಯಗಳಲ್ಲಿ ಅಳವಡಿಸಿಕೊಳ್ಳುವ ಪ್ರತಿಜ್ಞೆ ಕೈಗೊಳ್ಳಬೇಕೆಂದು ಅವರು ತಿಳಿಸಿದರು.

ವಿಧಾನಸೌಧದ ಬಳಿ 10 ಸಾವಿರ ವಿದ್ಯಾರ್ಥಿಗಳಿಂದ ಪೀಠಿಕೆ ಓದು

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.15ರಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ 10 ಸಾವಿರ ವಿದ್ಯಾರ್ಥಿಗಳೊಂದಿಗೆ ಮಾನ್ಯ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಿಂದ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ವಿದ್ಯಾಸಂಸ್ಥೆಗಳು ಹಾಗೂ ಇಲಾಖೆಗಳು ಆನ್‌ಲೈನ್‌ ಮೂಲಕ ಪಾಲ್ಗೊಳ್ಳುವರು. ಹಾಗಾಗಿ ಅದೇ ಸಂದರ್ಭಕ್ಕೆ ಜಿಲ್ಲೆಯಲ್ಲೂ ಕೂಡ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ನಡೆಯಲಿದೆ ಎಂದರು.

ಅಂದು ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜು, ವಿದ್ಯಾರ್ಥಿ ನಿಲಯಗಳಲ್ಲಿ ಸಂವಿಧಾನ ಪೀಠಿಕೆ ಓದಬೇಕು. ಈ ಮೂಲಕ ಸಂವಿಧಾನ ಪೀಠಿಕೆಯ ಮಹತ್ವ ಹಾಗೂ ಸಂವಿಧಾನದ ಮೌಲ್ಯ ಮತ್ತು ತತ್ವಗಳನ್ನು ಜನರಿಗೆ ತಿಳಿಸಬೇಕು. ತಾಲ್ಲೂಕು ಮಟ್ಟದಲ್ಲಿ ತಹಶಿಲ್ದಾರ್ ಹಾಗೂ ತಾಲ್ಲೂಕು ಪಂಚಾಯತ್ ಅಧಿಕಾರಿಗಳು ಸೇರಿ ತಾಲ್ಲೂಕು ಕ್ರೀಡಾಂಗಣಗಳಲ್ಲಿ ಕಾರ್ಯಕ್ರಮ ಆಯೋಜಿಸಿ ಯಶಸ್ವಿಗೊಳಿಸಬೇಕು ಎಂದರು‌.

ಶಾಲಾ ಶಿಕ್ಷಣ ಇಲಾಖೆ, ಕಾಲೇಜು ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳಿಗೆ ಸಂವಿಧಾನ ಪೀಠಿಕೆ ಓದುವಲ್ಲಿ ನೋಂದಣಿ ಮಾಡಿಸುವುದಕ್ಕೆ ಗುರಿ ನಿಗದಿಪಡಿಸಿದ್ದು, ಇದನ್ನು ಸೂಕ್ತವಾಗಿ ಪಾಲಿಸಿ ಎಂದು ನಿರ್ದೇಶನ ನೀಡಿದರು.

4 ಲಕ್ಷ ಜನ ನೋಂದಣಿ ಗುರಿ

ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು ಅವರು ಮಾತನಾಡಿ, ಜಿಲ್ಲೆಯಲ್ಲಿ 20 ಲಕ್ಷ ಜನಸಂಖ್ಯೆ ಇದ್ದು, 4 ಲಕ್ಷ ಜನ ನೋಂದಣಿ ಮಾಡುವ ಗುರಿ ನಿಗದಿಪಡಿಸಲಾಗಿದೆ ಎಂದರು‌.

ಸಂವಿಧಾನ ಪೀಠಿಕೆ ಓದುವಲ್ಲಿ ದಾಖಲೆ ನಿರ್ಮಿಸುವ ಜಿಲ್ಲೆಗೆ ಮಾನ್ಯ ಮುಖ್ಯಮಂತ್ರಿಗಳು ಬಹುಮಾನ ಘೋಷಿಸಿದ್ದು, ಮಂಡ್ಯ ಜಿಲ್ಲೆ ಪ್ರಥಮ ಬಹುಮಾನ ಗಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಿ ಎಂದರು.

ಸಮಾಜ ಕಲ್ಯಾಣ ಇಲಾಖೆಯ http://thepreamble-swdkar.in ವೆಬ್‌ಸೈಟ್ ಮೂಲಕ ನೊಂದಾಯಿಸಿಕೊಂಡು ಪ್ರಜಾಪ್ರಭುತ್ವದ ಅಧಿಕೃತ ಆಚರಣೆಯಲ್ಲಿ ಭಾಗವಹಿಸಲು ಸಾರ್ವಜನಿಕರನ್ನು ಪ್ರೇರೇಪಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಮಂಡ್ಯ ಉಪ ವಿಭಾಗಾಧಿಕಾರಿ ಶಿವಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸಿದ್ಧಲಿಂಗೇಶ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶಿವರಾಮೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀನಿವಾಸ್, ಸೇರಿದಂತೆ ಎಲ್ಲಾ ತಹಶಿಲ್ದಾರ್ ಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!