ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ ಮುಲ್) ದ ಅಧ್ಯಕ್ಷ ಸ್ಥಾನಕ್ಕೆ ಬಿ.ಆರ್.ರಾಮಚಂದ್ರ ರಾಜೀನಾಮೆ ಸಲ್ಲಿಸಿದ್ದಾರೆ. ಒಕ್ಕೂಟದ ಸಭಾಂಗಣದಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಅಧ್ಯಕ್ಷರ ರಾಜೀನಾಮೆಯನ್ನು ಅಂಗೀಕರಿಸಲಾಯಿತು.
ಕಳೆದ ಏ.17 ರಂದು ಒಕ್ಕೂಟದ ವ್ಯವಸ್ಥಾಪಕರಿಗೆ ಅಧ್ಯಕ್ಷ ಬಿ.ಆರ್.ರಾಮಚಂದ್ರ ರಾಜೀನಾಮೆ ಸಲ್ಲಿಸಿದ್ದರು. ರಾಜೀನಾಮೆ ವಾಪಸ್ ಪಡೆಯಲು 15 ದಿನಗಳ ಕಾಲ ಕಾಲಾವಕಾಶ ನೀಡಲಾಗಿತ್ತು. ಆದರೆ, 15 ದಿನಗಳಾದರೂ ರಾಜೀನಾಮೆ ಪತ್ರ ವಾಪಸ್ ಪಡೆಯದ ಹಿನ್ನೆಲೆಯಲ್ಲಿ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಪಿ.ಆರ್.ಮಂಜೇಶ್ ಆಡಳಿತ ಮಂಡಳಿ ಸಭೆಗೆ ತಿಳಿಸಿದರು.
ಸಭೆ ಬಳಿಕ ಅಧ್ಯಕ್ಷ ರಾಮಚಂದ್ರ ಮಾತನಾಡಿ, ಆಡಳಿತ ಮಂಡಳಿಯ ನಿರ್ದೇಶಕರ ಹಾಗೂ ಸಿಬ್ಬಂದಿಯ ಸಹಕಾರದಿಂದ ಕಳೆದ ಮೂರೂವರೆ ವರ್ಷಗಳ ಕಾಲ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಾಧ್ಯವಾಗಿದೆ. ಕೋವಿಡ್-19 ಸಂಕಷ್ಟದ ಪರಿಸ್ಥಿತಿಯಲ್ಲೂ ರೈತರಿಗೆ ಹಾಗೂ ಗ್ರಾಹಕರಿಗೆ ಯಾವುದೇ ಲೋಪವಾಗದಂತೆ ಸಮರ್ಥವಾಗಿ ನಿಭಾಯಿಸಲಾಗಿದೆ. ಮೆಗಾ ಡೇರಿ ಉದ್ಘಾಟನೆಯನ್ನು ಮಾಡಲಾಗಿದೆ. ಹಾಲಿನ ಉತ್ಪಾದನೆಯಲ್ಲಿ ಸ್ವಾವಲಂಬಿ ಒಕ್ಕೂಟವಾಗಿ ಮೂಡಿ ಬಂದಿರುವ ಸಂತೃಪ್ತಿಯೊಂದಿಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದರು.
ನನ್ನ ಅಧ್ಯಕ್ಷ ಅವಧಿಯಲ್ಲಿ ಸಹಕರಿಸಿದ ನಿರ್ದೇಶಕರು ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳು, ಸಿಬ್ಬಂದಿ, ಗುತ್ತಿಗೆ ನೌಕರರು, ಡೀಲರ್‌ಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಹಾಲು ಉತ್ಪಾದಕರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.




