ರಾಜ್ಯದ ಸರ್ಕಾರಿ ಸ್ಥಳದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಆರ್‌ಎಸ್‌ಎಸ್ ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ. ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.
ವಾಲ್ಮೀಕಿ ಸಮುದಾಯದವರಿಗೆ ಪ್ರಾತಿನಿಧ್ಯ
ವಾಲ್ಮೀಕಿ ಸಮಾಜದವರಿಗೆ ಸಚಿವ ಸ್ಥಾನ ನೀಡಲಾಗುವುದೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಶಾಸಕರು ರಾಜೀನಾಮೆ ನೀಡಿದ್ದು, ಸರ್ಕಾರ ಅವರನ್ನು ತೆಗೆದುಹಾಕಿಲ್ಲ. ಮುಂದಿನ ದಿನಗಳಲ್ಲಿ ನಡೆಯುವ ಸಂಪುಟ ಪುನರ್ ರಚನೆಯ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದವರಿಗೆ ಪ್ರಾತಿನಿಧ್ಯ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ “ಬೆಂಗಳೂರು ನಡಿಗೆ” ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಲಾಲ್‌ಬಾಗ್ ನಂತೆ ಮತ್ತಿಕರೆಯ ಜೆ.ಪಿ ಪಾರ್ಕ್ ನಲ್ಲಿಯೂ ಕಾರ್ಯಕ್ರಮವಿತ್ತು. ಶಾಸಕ ಮುನಿರತ್ನರವರು ವೇದಿಕೆಗೆ ಆಗಮಿಸಿ, ತಮ್ಮ ಅಭಿಪ್ರಾಯವನ್ನು ನೀಡಬಹುದಾಗಿತ್ತು. ಆದರೆ ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಲಿಲ್ಲ. ಕಾರ್ಯಕ್ರಮಕ್ಕೆ ಆಹ್ವಾನವಿತ್ತೇ ಇಲ್ಲವೇ ಎಂಬ ಬಗ್ಗೆ ನನಗೆ ಹೆಚ್ಚು ಮಾಹಿತಿ ಇಲ್ಲ ಎಂದರು.




