Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಕನ್ನಡಿಗರಿಗೆ ಉದ್ಯೋಗ ದೊರಕಿಸಿಕೊಡುವ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಕಾಯ್ದೆಯಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕದಂಬ ಸೈನ್ಯ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟಿಸಿದರು.

ಮಂಡ್ಯ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯನ್ನು ಕಲ್ಪಿಸಲು ಕಾಯ್ದೆ ರೂಪಿಸಿ ವಿಧಾನಮಂಡಲದಲ್ಲಿ ಮಂಡನೆ ಮಾಡಿ ಜಾರಿಗೆ ತರಲು ವಿಫಲವಾಗಿರುವ ಆಳುವ ಸರ್ಕಾರಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಖಾಸಗಿ ವಲಯಕ್ಕೆ ಕನ್ನಡ ನಾಡಿನಲ್ಲಿ ಭೂಮಿ, ನೀರು, ತೆರಿಗೆ ವಿನಾಯಿತಿ ಹಾಗೂ ಮೂಲ ಸೌಲಭ್ಯ ಕಲ್ಪಿಸಿದ್ದರೂ ಸಹ ಕನ್ನಡಿಗರಿಗೆ ಉದ್ಯೋಗ ವಂಚನೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಸಂವಿಧಾನಬದ್ಧ ಕಾನೂನು ರೂಪಿಸಿ ಉದ್ಯೋಗ ದೊರಕಿಸಿಕೊಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಹಿಂದಿ ಭಾಷಿಕರಿಗೆ ಹೆಚ್ಚಿನ ಪ್ರಮಾಣದ ಉದ್ಯೋಗ ದೊರಕುತ್ತಿದ್ದು ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ರಾಜ್ಯ ಸರ್ಕಾರ ಹಿಂದಿ ಹೇರಿಕೆ ವಿರುದ್ಧ ದನಿಯೆತ್ತಿ ತ್ರಿಭಾಷಾ ಸೂತ್ರ ವಿರೋಧಿಸಿ ದ್ವಿಭಾಷೆ ಸೂತ್ರ ಜಾರಿಗೆ ಕೇಂದ್ರದ ಮೇಲೆ ಒತ್ತಡ ಹಾಕಬೇಕೆಂದು ಒತ್ತಾಯಿಸಿದರು.

ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ವೈಜ್ಞಾನಿಕ ಸಂಕಷ್ಟ ಸೂತ್ರ ರಚಿಸಲು ಪ್ರಾಧಿಕಾರ, ಮಂಡಳಿ ಹಾಗೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಸುಪ್ರೀಂ ಕೋರ್ಟ್ ಮೊರೆವಾಗಬೇಕು,  ಅನ್ಯ ರಾಜ್ಯಗಳ ಕಾರ್ಮಿಕರ ವಲಸೆ ತಡೆದು ಕನ್ನಡಿಗರ ಹಿತ ಕಾಪಾಡಬೇಕು, ಕಳಸಾ – ಬಂಡೂರಿ, ಮಹದಾಯಿ ನದಿ ನೀರಿನ ವಿಚಾರದಲ್ಲಿ ಅರಣ್ಯ ಮತ್ತು ವನ್ಯಜೀವಿ ಇಲಾಖೆಯ ಅನುಮತಿ ಪಡೆದು ಕಾಮಗಾರಿ ಆರಂಭಕ್ಕೆ ಮುಂದಾಗಬೇಕು, ಕಪ್ಪತಗುಡ್ಡ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು ಎಂದು ಒತ್ತಾಯಿಸಿದರು.

ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್, ದೇವನಹಳ್ಳಿ ದೇವರಾಜ್, ಎಸ್ ಶಿವಕುಮಾರ್, ಎನ್ ಸಿ ಕಾಂಬಳೆ, ಉಮ್ಮಡಹಳ್ಳಿ ನಾಗೇಶ್ ಮತ್ತಿತರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!