Thursday, September 19, 2024

ಪ್ರಾಯೋಗಿಕ ಆವೃತ್ತಿ

ರಸ್ತೆ ದುರಸ್ತಿಗೆ ಅನುದಾನ ಬಿಡುಗಡೆ : ನಾರಾಯಣಗೌಡ

ಕೆ.ಆರ್.ಪೇಟೆಯಲ್ಲಿ ಮಳೆಯಿಂದ ಹಲವು ರಸ್ತೆಗಳು ಹಾನಿಗೊಳಗಾಗಿದ್ದು, ಸರ್ಕಾರದಿಂದ ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದೆ. ಕೂಡಲೇ ಕಾಮಗಾರಿ ಆರಂಭಿಸಿ ಒಂದು ತಿಂಗಳೊಳಗೆ ಎಲ್ಲಾ ರಸ್ತೆಗಳನ್ನು ದುರಸ್ತಿಗೊಳಿಸಬೇಕು ಎಂದು ಸಚಿವ ಡಾ.ನಾರಾಯಣಗೌಡ ಸೂಚಿಸಿದರು.

ಕೆ.ಆರ್.ಪೇಟೆಯಲ್ಲಿ ಇಂದು ತಾಲೂಕು ಮಟ್ಟದ ಕೆಡಿಪಿ ಸಭೆಯಲ್ಲಿ ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ, ಗ್ರಾಮ ಪಂಚಾಯತ್, ನರೇಗಾ ಯೋಜನೆ ಸಣ್ಣ ನೀರಾವರಿ ಸೇರಿದಂತೆ ಹಲವು ಇಲಾಖೆಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಕೆ.ಆರ್.ಪೇಟೆ ತಾಲೂಕಿನಲ್ಲಿ ಒಂದು ತಿಂಗಳೊಳಗೆ ಎಲ್ಲಾ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಬೇಕು. ರಸ್ತೆ ವಿಸ್ತರಣೆಗೆ ತೊಡಕಾಗಿರುವ ಮರಗಳು ಹಾಗೂ ಕೊಂಬೆಗಳನ್ನು ತೆರವುಗೊಳಿಸುವಂತೆ ಲೋಕೋಪಯೋಗಿ ಇಲಾಖೆಯಿಂದ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರೂ ಸರಿಯಾಗಿ ಸ್ಪಂದಿಸದ ಡಿಸಿಎಫ್ ವಿರುದ್ದ ಸಚಿವರು ಕಿಡಿಕಾರಿದರು. ಈ ಬಗ್ಗೆ ಡಿಸಿಎಫ್ ವಿರುದ್ಧ ಕ್ರಮಕೈಗೊಳ್ಳಲು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿಗಳ ಗಮನಕ್ಕೆ ತರುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವ ಡಾ.ನಾರಾಯಣಗೌಡ ಅವರು ಸೂಚಿಸಿದರು.

ಜಲಜೀವನ್ ಮಿಷನ್‌ಯೋಜನೆಯಡಿ ಸುಮಾರು 1080 ಕೋಟಿ ರೂ, ಬಿಡುಗಡೆಯಾಗಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಂಡು ಯಶಸ್ವಿಗೊಳಿಸಬೇಕು. ಜೆಜೆಎಂ ಕಾಮಗಾರಿಗಳು ಕುಂಠಿತವಾಗಿದ್ದು, ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಏತ ನೀರಾವರಿ ಯೋಜನೆಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸುವಂತೆ ತಿಳಿಸಿದರು.

ಸಣ್ಣ ನೀರಾವರಿ ಇಲಾಖೆಯಿಂದ 31 ಕಾಮಗಾರಿಗಳಿಗೆ ಸುಮಾರು 355 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ಗುಣಮಟ್ಟ ಕಾಯ್ದುಕೊಂಡು ಶೀಘ್ರವೇ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದರು. ಸಭೆಯಲ್ಲಿ ಜಿಲ್ಲಾಧಿಕಾರಿ ಗೋಪಾಲಕೃಷ್ಣ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!