ನಾಗಮಂಗಲ ತಾಲೂಕಿನ ದೊಂದೆಮಾದಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಶಿಥಿಲಗೊಂಡಿರುವ ಕೊಠಡಿಗಳು ಹಾಗೂ ಶೌಚಾಲಯ ವ್ಯವಸ್ಥೆಗೆ 4 ಲಕ್ಷ ರೂ ಅನುದಾನ ಮೀಸಲಿರಿಸಿ ತಕ್ಷಣ ಕಾಮಗಾರಿ ಪ್ರಾರಂಭಿಸಲು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಸೂಚಿಸಿದ್ದಾರೆ.
ಶಾಲೆಯಲ್ಲಿ ಕೊಠಡಿಗಳು ಶಿಥಿಲಗೊಂಡಿರುವ ಬಗ್ಗೆ ಸಾರ್ವಜನಿಕರು ಗಮನ ಸೆಳೆದಿರುವುದನ್ನು ಗಮನಿಸಿದ ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ಸ್ಪಂದನೆ ನೀಡಿದ್ದಾರೆ.
ಶಾಲಾ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಕೂಡಲೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದ್ದು ಕೊಠಡಿ ದುರಸ್ತಿಗೆ 4 ಲಕ್ಷ ರೂ ಅನುದಾನ ನಿಗದಿ ಪಡಿಸಿದೆ. ನಾಳೆಯಿಂದಲೇ ದುರಸ್ತಿ ಕಾರ್ಯ ಪ್ರಾರಂಭಿಸುವಂತೆ ನಿರ್ದೆಶನ ನೀಡಿದ್ದಾರೆ. ಮಕ್ಕಳ ಸುರಕ್ಷತೆ ಹಾಗೂ ಗುಣಮಟ್ಟದ ಶಿಕ್ಷಣ ನಮ್ಮ ಆದ್ಯತೆ ಎಂದು ಸಚಿವರು ತಿಳಿಸಿದ್ದಾರೆ.
ಮುಖ್ಯಮಂತ್ರಿಯವರ ಕಚೇರಿಯಿಂದಲೂ ಈ ಬಗ್ಗೆ ತಕ್ಷಣ ಸ್ಪಂದನೆ ದೊರೆತಿರುವುದು ಗಮನಾರ್ಹವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




