Friday, September 20, 2024

ಪ್ರಾಯೋಗಿಕ ಆವೃತ್ತಿ

ಮಾ.1ರಿಂದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ: ಲೋಪವಾಗದಂತೆ ಎಚ್ಚರವಹಿಸಲು ಜಿಲ್ಲಾಧಿಕಾರಿ ಸೂಚನೆ

ಮಂಡ್ಯ ಜಿಲ್ಲೆಯಲ್ಲಿ ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಜರುಗಲಿದ್ದು ಯಾವುದೇ ಲೋಪದೋಷಗಳವಾಗದಂತೆ ಪರೀಕ್ಷೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಸೂಚಿಸಿದ್ದಾರೆ.

ಮಂಡ್ಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಸುಗಮ ಸಂಚಾಲನೆಗಾಗಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 26 ಪರೀಕ್ಷಾ ಕೇಂದ್ರಗಳಲ್ಲಿ 13,996 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಸೂಕ್ಷ್ಮ, ಅತಿಸೂಕ್ಷ್ಮ ಪರೀಕ್ಷಾ ಕೇಂದ್ರ ಇರುವುದಿಲ್ಲ. ಎಲ್ಲಾ ಪರೀಕ್ಷಾ ಕೇಂದ್ರಗಳ ಮೇಲೆ ತೀವ್ರ ನಿಗಾ ವಹಿಸಬೇಕು. ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುವುದು ಎಂದರು.

ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಆಸನ ಹಾಗೂ ಪರೀಕ್ಷೆ ಬರೆಯಲು ಡೆಸ್ಕ್ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು, ಶೌಚಾಲಯದ ಸೇರಿದಂತೆ ಮೂಲಭೂತ ಸೌಕರ್ಯದ ವ್ಯವಸ್ಥೆಯಾಗಬೇಕು. ಕೊಠಡಿಗಳಲ್ಲಿ ಗಡಿಯಾರ, ಸಿ.ಸಿ.ಟಿ.ವಿ ವ್ಯವಸ್ಥೆ ಕಡ್ಡಾಯವಾಗಿ ಇರಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತಾಗಬೇಕು ಎಂದರು.

ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಸುತ್ತಳತೆಯಲ್ಲಿ 144 ನೇ ಕಲಂ ಜಾರಿಗೊಳಿಸಲು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ 26 ಮುಖ್ಯ ಅಧೀಕ್ಷಕರುಗಳನ್ನು ನೇಮಕ ಮಾಡಲಾಗಿದೆ. ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಕೊಠಡಿ ಮೇಲ್ವಿಚಾರಕರು, ಇತರೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್ ಇತ್ಯಾದಿ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಡಾ ಎಚ್ ಎಲ್ ನಾಗರಾಜ ಮಾತನಾಡಿ, ಜಿಲ್ಲಾ ಖಜಾನೆಯಿಂದ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ವಿತರಿಸಲು ಪ್ರಶ್ನೆ ಪತ್ರಿಕೆ ಮಾರ್ಗಾಧಿಕಾರಿ ತಂಡಗಳಿಗೆ ಅಗತ್ಯವಿರುವ ವಾಹನಗಳ ಸೌಕರ್ಯ ಒದಗಿಸಿ ಎಂದರು.

ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಾತಿಯನ್ನು online ನಲ್ಲಿ upload (PU exam login portal) ಮಾಡುವುದರಿಂದ ಪರೀಕ್ಷಾ ಸಮಯದಲ್ಲಿ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು. ಪರೀಕ್ಷಾ ದಿನಗಳಂದು ಪ್ರಶ್ನೆ ಪತ್ರಿಕೆ ವಿತರಕರ ತಂಡದ ಬೆಂಗಾವಲಾಗಿ ಸಶಸ್ತ್ರ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗುವುದು ಎಂದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಕ್ ತನ್ವೀರ್ ಆಸಿಫ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ ಚೆಲುವಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಚ್. ಶಿವರಾಮೇಗೌಡ, ಡಯಟ್ ಪ್ರಾಂಶುಪಾಲರು ಪುರುಷೋತ್ತಮ್, ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ. ಸೋಮಶೇಖರ್, ಆಯುಷ್ ವೈದ್ಯಾಧಿಕಾರಿ ಡಾ. ಸೀತಾ ಲಕ್ಷ್ಮಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!