ಮಂಡ್ಯ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಅವರು ಗುರುವಾರ ಮಂಡ್ಯ ತಾಲ್ಲೂಕು ವ್ಯಾಪ್ತಿಯ ಸೂನಗಹಳ್ಳಿ, ಮಂಗಲ ಹಾಗೂ ಸಂತೆಕಸಲಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರವಾಸ ಕೈಗೊಂಡು ಪರಿಶೀಲನೆ ನಡೆಸಿದರು
ಸೂನಗಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಬಗ್ಗೆ ಪರಿಶೀಲಿಸಿದರು ನಂತರ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಶಾಲಾ ಶೌಚಾಲಯ ನಿರ್ಮಾಣ ಕಾಮಗಾರಿ ಹಾಗೂ ಜೆಜೆಎಂ ಯೋಜನೆಯ ಕಾರ್ಯಾತ್ಮಕ ನಳ ನೀರು ಸಂಪರ್ಕ ಕಲ್ಪಿಸುವ ಕಾಮಗಾರಿ ಪರಿಶೀಲಿಸಿದರು.
ಕಮ್ಮನಾಯಕನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಕಾಲುವೆ ಹೂಳು ತೆಗೆಯುವ ಕಾಮಗಾರಿ ಹಾಗೂ ಸಿ.ಸಿ.ಚರಂಡಿ ನಿರ್ಮಾಣ ಕಾಮಗಾರಿ ಪರಿಶೀಲಿಸಿ, ಮನರೇಗಾ ಕೂಲಿಕಾರ್ಮಿಕರಿಗೆ ನಿಗದಿತ ಸಮಯಕ್ಕೆ ಕೆಲಸಕ್ಕೆ ಹಾಜರಾಗಿ ಸಮರ್ಪಕವಾಗಿ ಕೆಲಸ ನಿರ್ವಹಿಸುವಂತೆ ಸೂಚಿಸಿದರು.
ಮಂಗಲ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯ ಸರ್ಕಾರಿ ಪ್ರೌಢಶಾಲಾ ಕಾಂಪೌಂಡ್ ನಿರ್ಮಾಣ ಕಾಮಗಾರಿ ಹಾಗೂ ಜೆ.ಜೆ.ಎಂ ಯೋಜನೆಯ ಕಾರ್ಯಾತ್ಮಕ ನಳ ನೀರು ಸಂಪರ್ಕ ಕಲ್ಪಿಸುವ ಕಾಮಗಾರಿ ಮತ್ತು ಓವರ್ಹೆಡ್ ಟ್ಯಾಂಕ್ ನಿರ್ಮಾಣ ಕಾಮಗಾರಿ ಪರಿಶೀಲಿಸಿ, ಕಾಮಗಾರಿಗಳಿಗೆ ಸಂಬಂಧಿಸಿದಂತೆ ಉತ್ತಮ ಗುಣಮಟ್ಟದ ನಲ್ಲಿಗಳು, ಪೈಪ್ ಗಳನ್ನು ಅಳವಡಿಸುವಂತೆ ಹಾಗೂ ಪೈಪ್ ಲೈನ್ ಅಳವಡಿಕೆಯ ಡೆಪ್ತ್ ಬಗ್ಗೆ ಗಮನಹರಿಸುವಂತೆ ಸಂಬಂಧಪಟ್ಟ ಇಂಜಿನಿಯರ್ ಗಳಿಗೆ ಸೂಚಿಸಿದರು.
ಸಂತೆಕಸಲಗೆರೆ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಸರ್ಕಾರಿ ಪ್ರೌಢಶಾಲಾ ಕಾಂಪೌಂಡ್ ನಿರ್ಮಾಣ ಕಾಮಗಾರಿ ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿ, ಮನರೇಗಾ ಕೂಲಿಕಾರ್ಮಿಕರಿಗೆ ನಿಗದಿತ ಸಮಯಕ್ಕೆ ಕೂಲಿ ಪಾವತಿಯಾಗುತ್ತಿರುವ ಬಗ್ಗೆ ಕಾರ್ಮಿಕರೊಂದಿಗೆ ಚರ್ಚಿಸಿ ಖಚಿತಪಡಿಸಿಕೊಂಡರು.
ಕಾರಸವಾಡಿ ಗ್ರಾಮದ ಅಂಗನವಾಡಿ ನಿರ್ಮಾಣ ಕಾಮಗಾರಿ ಪರಿಶೀಲಿಸಿದರು. ಅಪೂರ್ಣಗೊಂಡ ಶಾಲಾ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಸಂಬಂಧಪಟ್ಟ ಶಾಲಾ ಮುಖ್ಯ ಶಿಕ್ಷಕರಿಗೆ ಹಸ್ತಾಂತರಿಸುವಂತೆ ಪಂ.ರಾ.ಇಂ.ವಿಭಾಗದ ಇಂಜಿನಿಯರ್ ಗಳಿಗೆ ಸೂಚಿಸಿದರು.
ಮಹಾತ್ಮಗಾಂಧಿ ನರೇಗಾ ಯೋಜನೆಯ ಕಾಮಗಾರಿಗಳನ್ನು ಎನ್.ಎಂ.ಆರ್.ಗಳನ್ನು ಸೃಜಿಸಿ ತುರ್ತಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.




