ಮುಂದಿನ ಲೋಕಸಭಾ ಚುನಾವಣೆಯನ್ನು ಗ್ಯಾರಂಟಿ ಯೋಜನೆಗಳ ವಿಷಯವನ್ನೇ ಮುಂದಿಟ್ಟುಕೊಂಡು ಎದುರಿಸಲು ನಾವು ಸಿದ್ಧರಿದ್ದೇವೆ, ನೀವು ಸಿದ್ಧರಿದ್ದರೆ ಹಾಗೆಂದು ಘೋಷಿಸಿಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪಂಥಾಹ್ವಾನ ನೀಡಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕದ ಗ್ಯಾರಂಟಿ (ಉಚಿತ) ಯೋಜನೆಗಳಿಂದಾಗಿ ರಾಜ್ಯದ ಖಜಾನೆ ಬರಿದಾಗಲಿದೆ ಮತ್ತು ಅಭಿವೃದ್ದಿಗೆ ಹಣ ಇಲ್ಲದಂತಾಗಿದೆ ಎಂದು ಕಾಳಜಿ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ನರೇಂದ್ರ ಮೋದಿಯವರೇ, ಇದು ನಿಮ್ಮ ವೈಯಕ್ತಿಕ ಅಭಿಪ್ರಾಯವೇ, ಪ್ರಧಾನಿಯವರ ಅಭಿಪ್ರಾಯವೇ? ಇಲ್ಲವೆ ಪಕ್ಷದ ಅಭಿಪ್ರಾಯವೇ? ಎನ್ನುವುದನ್ನು ದಯವಿಟ್ಟು ಸ್ಪಷ್ಟಪಡಿಸಬೇಕೆಂದು ವಿನಂತಿ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಡಬಲ್ ಎಂಜಿನ್ ಸರ್ಕಾರದ ಜನವಿರೋಧಿ ಆಡಳಿತದಿಂದ ಬೇಸತ್ತು ಹೋಗಿರುವ ಕರ್ನಾಟಕದ ಜನತೆ ನಮ್ಮ ಗ್ಯಾರಂಟಿ ಯೋಜನೆಗಳಿಗೆ ಜನಾದೇಶವನ್ನು ನೀಡಿ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ನುಡಿದಂತೆ ನಡೆಯುವ ಬದ್ಧತೆ ಹೊಂದಿರುವ ನಾವು ಕೊಟ್ಟ ಭಾಷೆಯನ್ನು ಉಳಿಸುವ ಪ್ರಯತ್ನ ಮಾಡುತ್ತಿದ್ದೇವೆ.
ಬೆಲೆ ಏರಿಕೆ ಮತ್ತು ನಿರುದ್ಯೋಗಗಳಿಂದಾಗಿ ವಿಪರೀತ ಆರ್ಥಿಕ…
— CM of Karnataka (@CMofKarnataka) August 2, 2023
“>
ನಿಮ್ಮ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿ
ಮಾನ್ಯ ಪ್ರಧಾನಿ ಮೋದಿಯವರೇ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವುದಾದರೆ ನಿಮ್ಮ ಮತ್ತು ನಿಮ್ಮ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿ. ಕರ್ನಾಟಕದ ಬಿಜೆಪಿ ನಾಯಕರಿಗೂ ನಮ್ಮ ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕವಾಗಿ ವಿರೋಧಿಸಲು ನಿರ್ದೇಶನ ನೀಡಿ. ಇಲ್ಲಿ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ತಕ್ಷಣ ಜಾರಿಗೊಳಿಸಬೇಕೆಂದು ಕರ್ನಾಟಕದ ನಾಯಕರು ಒಂದೇ ಸಮನೆ ನಮ್ಮ ಬೆನ್ನು ಹತ್ತಿದ್ದಾರೆ. ಬಡವರಿಗೆ ನೀಡುವ ಹೆಚ್ಚುವರಿ ಅಕ್ಕಿಯಲ್ಲಿ ಒಂದು ಕಾಳು ಕಡಿಮೆಮಾಡಿದರೂ ಹೋರಾಟ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಗುಡುಗುತ್ತಲೇ ಇದ್ದಾರೆ. ಈ ಬಗ್ಗೆ ನಿಮ್ಮ ಅಭಿಪ್ರಾಯ ಏನು ಪ್ರಧಾನಿ ಅವರೇ? ಎಂದು ವ್ಯಂಗ್ಯವಾಡಿದ್ದಾರೆ.
ಅರ್ಧ ಲೀಟರ್ ನಂದಿನಿ ಹಾಲಿನ ಭರವಸೆ ಉಚಿತವಲ್ಲವೇ ?
ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿ ಹಬ್ಬಗಳ ಸಮಯದಲ್ಲಿ ವರ್ಷಕ್ಕೆ ಮೂರು ಗ್ಯಾಸ್ ಸಿಲಿಂಡರ್ ಮತ್ತು ಬಿಪಿಎಲ್ ಕುಟುಂಬಗಳಿಗೆ ಅರ್ಧ ಲೀಟರ್ ನಂದಿನ ಹಾಲು ಉಚಿತವಾಗಿ ನೀಡುತ್ತೇವೆ ಎಂದು ಇತ್ತೀಚಿನ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬಿಡುಗಡೆಗೊಳಿಸಿದ್ದ ಪ್ರಣಾಳಿಕೆಯಲ್ಲಿ ಬಿಜೆಪಿ ಭರವಸೆ ನೀಡಿತ್ತು. ಇದು ಫ್ರೀಬಿ, ರೇವ್ಡಿ ಯೋಜನೆಗಳಲ್ಲವೇ? ವಿಧಾನಸಭಾ ಚುನಾವಣೆ ಎದುರಿಸಲಿರುವ ಮಧ್ಯಪ್ರದೇಶದ ಮುಖ್ಯಮಂತ್ರಿಗಳು ಹೆಣ್ಣುಮಕ್ಕಳ ಖಾತೆಗೆ ಮಾಸಿಕ 1000 ರೂಪಾಯಿ ಜಮೆ ಮಾಡುವ ಲಾಡ್ಲಿ-ಬೆಹನಾ ಯೋಜನೆಯ ಘೋಷಣೆ ಮಾಡಿದ್ದಾರೆ. ಇದನ್ನು 3000 ರೂಪಾಯಿಗೆ ಹೆಚ್ಚಿಸುವ ಭರವಸೆ ನೀಡಿದ್ದಾರೆ. ಇದು ಉಚಿತ ಯೋಜನೆ ಅಲ್ಲವೇ ? ಎಂದು ಪ್ರಶ್ನೆ ಮಾಡಿದ್ದಾರೆ.
ಕಿಸಾನ್ ಸಮ್ಮಾನ್ ಯೋಜನೆಯನ್ನು ನೀವು ಹೇಗೆ ವ್ಯಾಖ್ಯಾನಿಸುತ್ತೀರಿ?




