ಮಂಡ್ಯ ನಗರದ ಕನಕ ಭವನದಲ್ಲಿ ದಾವಣಗೆರೆಯಲ್ಲಿ ಆಗಸ್ಟ್ 3 ರಂದು ಆಯೋಜಿಸಿರುವ ಸಿದ್ದರಾಮಯ್ಯನವರ ಅಮೃತ ಮಹೋತ್ಸವ ಕಾರ್ಯಕ್ರಮದ ಪೂರ್ವಾಭಾವಿ ಸಭೆ ಇಂದು ನಡೆಯಿತು.
ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಸುರೇಶ್ ಮಾತನಾಡಿ,ಇಂದು ಬಿಜೆಪಿ ಸರ್ಕಾರ ದೇಶವನ್ನು ಅಸ್ಥಿರ ಗೊಳೊಸುತ್ತಿದೆ.ಡಾಲರ್ ಎದುರು ರೂಪಾಯಿ ಮೌಲ್ಯ ಕಳೆಗುಂದಿದೆ. ದೇಶದ ಆರ್ಥಿಕ ಪರಿಸ್ಥಿತಿ ನೆಲಕಚ್ವಿದೆ.ಈ ಹಿನ್ನಲೆಯಲ್ಲಿ ರಾಜ್ಯದಲ್ಲಿರುವ ಬಿಜೆಪಿ ದುರಾಡಳಿತಕ್ಕೆ ಅಂತ್ಯ ಹಾಡುವ ಸಲುವಾಗಿ ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯನವರ 75ನೇ ಜನ್ಮದಿನದ ಅಂಗವಾಗಿ ಅಮೃತ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದರು.
ಇದು ವ್ಯಕ್ತಿ ಪೂಜೆಯ ಕಾರ್ಯಕ್ರಮ ಅಲ್ಲ. ಸರಳ, ಸಜ್ಜನಿಕೆಯ ವ್ಯಕ್ತಿತ್ವವುಳ್ಳ ಸಿದ್ದರಾಮಯ್ಯ ಅವರ ಜನ್ಮದಿನದ ಕಾರ್ಯಕ್ರಮ.
ದಾವಣಗೆರೆಯಲ್ಲಿ ಆ.3 ರಂದು ಸಿದ್ದರಾಮೋತ್ಸವ ಕಾರ್ಯಕ್ರಮ ನಡೆಯಲಿದ್ದು, ಕಾಂಗ್ರೆಸ್ನ ಸಮಾವೇಶ ಎಂಬುವುದನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮ ರೂಪಿಸಲಾಗಿದೆ.
ಜಿಲ್ಲೆಯಲ್ಲಿ ಈಗಾಗಲೇ ಸಿದ್ದರಾಮೋತ್ಸವದ ಬಗ್ಗೆ ಪ್ರಮುಖ ಮುಖಂಡರು ಸಭೆ ನಡೆಸಿದ್ದು, ಅದರಂತೆ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹೋಗಬೇಕಿದೆ ಎಂದು ತಿಳಿಸಿದರು.
ಮಾಜಿ ಸಚಿವ ಎಂ.ಎಸ್.ಆತ್ಮಾನಂದ ಮಾತನಾಡಿ, ಈ ನಾಡಿನ ಕಣ್ಮಣಿಯಾಗಿರುವ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ಮತ್ತು ಹುಟ್ಟು ಹಬ್ಬದ ಆಚರಣೆಯು ಯಶಸ್ವಿಯಾಗಿ ನಡೆಯಬೇಕಿದೆ. ಇದಕ್ಕೆ ಜಿಲ್ಲೆಯಾದ್ಯಂತ ಪಕ್ಷದ ಮುಖಂಡರು ಒಮ್ಮತದಿಂದ ತೀರ್ಮಾನ ಕೈಗೊಂಡಿದ್ದಾರೆ, ಪ್ರತಿಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು ತಮ್ಮ ಆಡಳಿತಾವಧಿಯಲ್ಲಿ ನೂರಾರು ಅಭಿವೃದ್ಧಿ ಕಾರ್ಯಕ್ರಮಗಳನ್ನೇ ಮಾಡಿದ್ದು,ಅಮೃತ ಮಹೋತ್ಸವ ಯಶಸ್ವಿಯಾಗಿ ಮಾಡಬೇಕು ಎಂದರು.
ಕಾಂಗ್ರೆಸ್ ಮುಖಂಡ ಗಣಿಗ ರವಿಕುಮಾರ್ಗೌಡ ಮಾತನಾಡಿ, ಸಮಾಜದಲ್ಲಿ ದನಿ ಇಲ್ಲದವರಿಗೆ ದನಿಕೊಟ್ಟು, ತುಳಿತಕ್ಕೆ ಒಳಗಾದ ಸಮುದಾಯಗಳ ಪರವಾಗಿ ಹೋರಾಟ ನಡೆಸುತ್ತಿರುವ ನಮ್ಮ ನಾಯಕರಾದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ನೇತೃತ್ವದ ಸರ್ಕಾರಕ್ಕೆ ನೇರ ಸವಾಲು ಎಸೆಯುವ ಉತ್ತಮ ವಾಗ್ಮಿಯೂ ಹೌದು. ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸುವುದು ಮುಖ್ಯವಾಗಬೇಕು ಎಂದು ಸಲಹೆ ನೀಡಿದರು.
ಪೂರ್ವಭಾವಿ ಸಭೆಯಲ್ಲಿ ನಗರಸಭೆ ಸದಸ್ಯರಾದ ಪೂರ್ಣಿಮಾ, ನಹೀಂ, ಕಾಂಗ್ರೆಸ್ ಮುಖಂಡರಾದ ಡಾ.ಕೃಷ್ಣ, ಅಂಜನಾ ಶ್ರೀಕಾಂತ್, ಎಂ.ಎಸ್.ಚಿದಂಬರ್, ಸಿ.ಎಂ.ದ್ಯಾವಪ್ಪ, ಎಚ್.ಅಪ್ಪಾಜಿ, ಸಿದ್ದರಾಮಯ್ಯ, ಕೆ.ಎಚ್.ನಾಗರಾಜು, ಸಾತನೂರು ರಾಜಣ್ಣ, ಮಂಗಲ ಕೃಷ್ಣ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಜಿಲ್ಲಾ ಅಧ್ಯಕ್ಷ ಎಲ್.ಸಂದೇಶ್ ಮತ್ತಿತರರು ಭಾಗವಹಿಸಿದ್ದರು.




