ಮಂಡ್ಯ ಜಿಲ್ಲೆಯ ಗಾಯಕ, ಗಾಯಕಿಯರು ಗಾಯನ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ ತಿಳಿಸಿದರು.
ಮಂಡ್ಯ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ‘ಹಾಡಿರೇ ರಾಗಗಳ-ತೂಗಿರೇ ದೀಪಗಳ’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಂಡ್ಯ ಜಿಲ್ಲೆಯ ಯುವ ಗಾಯಕರು, ಗಾಯಕಿಯರು ತಮ್ಮ ಪ್ರತಿಭೆಗಳನ್ನು ಸಿನಿಮಾ ರಂಗ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಹೆಸರು ಮಾಡಿ ಜಿಲ್ಲೆಗೆ ಮಾದರಿಯಾಗಬೇಕು ಎಂದರು.
ಮಂಡ್ಯ ಜಿಲ್ಲೆಯಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹಾಡಲು ಅವಕಾಶ ಸಿಗದ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ಸಲುವಾಗಿ ಹಾಡಿರೇ ರಾಗಗಳ-ತೂಗಿರೇ ದೀಪಗಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದು ನಿಜಕ್ಕೂ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಲಾವಿದರಿಗೆ ಪ್ರೋತ್ಸಾಹ ನೀಡಲು ಇಂತಹ ವೇದಿಕೆಗಳು ಹೆಚ್ಚಾಗಲಿ, ಸ್ಥಳೀಯ ಕಲಾವಿದರನ್ನು ಗುರುತಿಸುವುದರ ಜೊತೆಗೆ ಅವರಿಗೆ ಕೆಲಸ ನೀಡುವಂತಹ ಕಾರ್ಯಗಳು ನಡೆಯಬೇಕು ಎಂದರು.
ಕಲಾವಿದರು ಇಂತಹ ವೇದಿಕೆಯನ್ನು ಸದುಪಯೋಗ ಪಡೆದುಕೊಳ್ಳಬೇಕು. ಇನ್ನೂ ಹೆಚ್ಚಿನ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮೂಲಕ ಚಿತ್ರ ಗೀತೆಗಳ ಜತೆಗೆ ಶರಣರ, ದಾಸರ ಗೀತೆಗಳನ್ನು ಹಾಗೂ ವಚನಕಾರರ ವಚನಗಳನ್ನು ಹಾಡಿರಿ ಎಂದರು.
ಬೆಲ್ಲದಾರತಿ ಸ್ಮರಣ ಸಂಚಿಕೆಯ ಬಿಡುಗಡೆಯ ದಿನದಂದು ಗಾಯಕಕರಿಗೆ ಅವಕಾಶ ನೀಡುವ ಸಲುವಾಗಿ ಕಾರ್ಯಕ್ರಮವನ್ನು ಆಯೋಜಿಸಿದ್ದು ಸಂತಸದ ವಿಷಯ ಎಂದು ಸಂತಸ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಾಯಕ, ಗಾಯಕಿಯರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ನಂದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.




