ಸ್ಥಳೀಯ ಶಾಸಕರ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಯಾವುದೇ ಬಿಲ್ ಬಾಕಿ ಉಳಿಸಿಕೊಳ್ಳಬೇಡಿ. ನಿಗದಿಯಾಗಿರುವ ಅನುದಾನವನ್ನು ಸರಿಯಾಗಿ ಉಪಯೋಗಿಸಿಕೊಂಡು ಶೇ 100 ರಷ್ಟು ಸಾಧನೆ ಮಾಡಿ ಎಂದು ಮಂಡ್ಯ ಜಿಲ್ಲಾ ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ ಅಧಿಕಾರಿಗಳಿಗೆ ತಿಳಿಸಿದರು.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೆ.ಎಲ್.ಎಲ್.ಎ.ಡಿ.ಎಸ್. ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಅನುದಾನಗಳನ್ನು ಬಿಡುಗಡೆಗೊಳಿಸಿದೆ, ಅಧಿಕಾರಿಗಳು ಅನುದಾನವನ್ನು ಸಮರ್ಪಕವಾಗಿ ಬಳಸಿ ದಕ್ಷತೆಯಿಂದ ಕಾರ್ಯನಿರ್ವಹಿಸಿ ಎಂದರು.
ಜಿಲ್ಲಾವಾರು ಪ್ರಗತಿ ವೀಕ್ಷಿಸಿದ ಅವರು ಹೆಚ್ಚು ಕೆ.ಎಲ್.ಎಲ್.ಎ.ಡಿ.ಎಸ್ ಗೆ ಸಂಬಂಧ ಪಟ್ಟ ಕಾಮಗಾರಿಗಳು ಎರಡು ವರ್ಷಗಳಿಂದ ಪ್ರಗತಿ ಹಂತದಲ್ಲಿ ಇದ್ದು, ಸಾಧ್ಯವಾದಷ್ಟು ಬೇಗ ಕಾಮಗಾರಿಗಳು ಪೂರ್ಣಗೊಳಿಸಿ, ಹಳೆಯ ಕಾಮಗಾರಿ ಬಿಲ್ ಗಳನ್ನು ಒಂದು ವಾರದೊಳಗೆ ಪಾವತಿ ಮಾಡಿ ಎಂದು ತಿಳಿಸಿದರು.
ಮಂಡ್ಯ ತಾಲೂಕಿನಲ್ಲಿ ಅನೇಕ ಕಾಮಗಾರಿಗಳು ಪೂರ್ಣಗೊಳ್ಳದೆ ಉಳಿದಿದ್ದು ಅಧಿಕಾರಿಗಳು ಅದಕ್ಕೆ ಸೂಕ್ತ ಉತ್ತರವನ್ನು ವಾರದೊಳಗೆ ನೀಡಬೇಕು ಹಾಗೂ ಮುಂದಿನ ಸಭೆಯಲ್ಲಿ ಪೂರ್ಣಗೊಂಡ ಕಾಮಗಾರಿಗಳ ಬಗ್ಗೆ ಸೂಕ್ತ ಮಾಹಿತಿ ನೀಡಿಬೇಕು ಎಂದು ಹೇಳಿದರು.
ಕಾಮಗಾರಿಗಳನ್ನು ಪೂರ್ಣಗೊಳಿಸಲು ತಾಂತ್ರಿಕ, ಸ್ಥಳೀಯ ಅಥವಾ ಸ್ಥಳದ ತೊಂದರೆ ಇದ್ದರೆ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಿ, ಸದರಿ ವರ್ಷ ಬಿಟ್ಟು, ಹಿಂದೆ ಅನುಮೋದನೆ ಗೊಂಡಿರುವ ಎಲ್ಲಾ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಇಲ್ಲವಾದಲ್ಲಿ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜಾರಿಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲೆಯಲ್ಲಿ ಅನುಮೋದನೆ ಗೊಂಡಿರುವ ಕಾಮಗಾರಿಗಳ ಏಜೆನ್ಸಿಗಳೊಂದಿಗೆ ಇಲಾಖಾ ಅಧಿಕಾರಿಗಳು ಸಮನ್ವಯ ಸಾಧಿಸಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಕೋಮಲ್ ಕುಮಾರ್, ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿ ಚೇತನ್ ಕುಮಾರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.




