Thursday, September 19, 2024

ಪ್ರಾಯೋಗಿಕ ಆವೃತ್ತಿ

ಆರು ತಿಂಗಳು ಮೊದಲೇ ಅಭ್ಯರ್ಥಿ ಘೋಷಣೆ ಮಾಡಿ

ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆಗೆ ಆರು ತಿಂಗಳ ಮೊದಲೇ ಅಭ್ಯರ್ಥಿಯನ್ನು ಘೋಷಣೆ ಮಾಡಿದರೆ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗುತ್ತದೆ ಎಂದು ಮಾಜಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಸಲಹೆ ನೀಡಿದರು

ಮಂಡ್ಯ ನಗರದ ಬೆಂಗಳೂರು-ಮೈಸೂರು ರಸ್ತೆಯಲ್ಲಿರುವ ಸುಮಾ ರವಿ ಕಲ್ಯಾಣ‌ಮಂಟದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಏರ್ಪಡಿಸಿದ್ದ ನವ ಸಂಕಲ್ಪ ಚಿಂತನಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ನಾಯಕರು ಒಗ್ಗಟ್ಟಿನಿಂದ ಎರಡು ಚುನಾವಣೆಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳಾದ ದಿನೇಶ್ ಗೂಳಿಗೌಡ ಹಾಗೂ ಮಧು ಮಾದೇಗೌಡರನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಪ್ರಯಬಲ್ಯ ತೋರಿಸಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗೆ 6 ತಿಂಗಳು ಮೊದಲೇ ಎಲ್ಲಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಹಾಕಿದರೆ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವ ಅವಕಾಶ ಸಿಗಲಿದೆ.ವರಿಷ್ಟರು ಈ ಬಗ್ಗೆ ಯೋಚಿಸಬೇಕಿದೆ ಎಂದರು.

ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲು ಪ್ರತಿ ತಿಂಗಳು ಒಂದು ಕಾರ್ಯಕ್ರಮವನ್ನು ಪಕ್ಷದ ವತಿಯಿಂದ ಕಡ್ಡಾಯವಾಗಿ ಮಾಡಬೇಕು. ಜಾತಿ-ಧರ್ಮದ ಹೆಸರಿನಲ್ಲಿ ಪ್ರಚಾರ ಮಾಡಿ ಮತ ಪಡೆಯುತ್ತಿರುವ ಮಂಡ್ಯದಲ್ಲಿ ಕಾರ್ಯಕರ್ತರಿಗೆ ಸ್ಪಂದಿಸುವ ನಾಯಕರ ಕೊರತೆ ಕಾಡುತ್ತಿದೆ. ಮನೆಯಲ್ಲಿ ಕುಳಿತಿರುವ ನಾಯಕರನ್ನು ಅವರ ಮನೆಗೆ ಹೋಗಿ ಕರೆತರುವ ಕೆಲಸ ಮಾಡಬೇಕಾಗಿದೆ ಎಂದು ತಿಳಿಸಿದರು.

ಯುವಜನತೆಯನ್ನು ಪಕ್ಷಕ್ಕೆ ಸೆಳೆಯುವ ಕೆಲಸವನ್ನು ಯಾರೂ ಮಾಡುತ್ತಿಲ್ಲ. ಹಿಂದೆ ಎನ್ ಎಸ್ ಯು ಐ, ಮಹಿಳಾ ಕಾಂಗ್ರೆಸ್ ಶಾಲಾ-ಕಾಲೇಜುಗಳಲ್ಲಿ ಚರ್ಚಾ ಸ್ಪರ್ಧೆ ನಡೆಸುತ್ತಿತ್ತು. ಕಾಂಗ್ರೆಸ್ ಪಕ್ಷದ ಸಿದ್ಧಾಂತ, ಹೋರಾಟ ಹಾಗೂ ಭಾರತ ಸ್ವಾತಂತ್ರ್ಯ ಹೋರಾಟದ ಬಗ್ಗೆ ಚರ್ಚಾ ಸ್ಪರ್ಧೆ ಮಾಡಲಾಗುತ್ತಿತ್ತು. ಯುವ ಕಾಂಗ್ರೆಸ್ ವತಿಯಿಂದ ಸಾಮೂಹಿಕ ವಿವಾಹ, ರಕ್ತದಾನ ಶಿಬಿರ ಮೊದಲಾದ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಯುವಶಕ್ತಿಯ ಜೊತೆ ನಿರಂತರ ಒಡನಾಟದಲ್ಲಿತ್ತು. ಆದರೆ ಇಂದು ಎನ್ ಎಸ್ ಯು ಐ, ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ನಾಯಕರು ಬಂದಾಗ ಮಾತ್ರ ಮುಖ ತೋರಿಸುವ ಕೆಲಸ ಮಾಡುತ್ತಿದ್ದಾರೆ.ಕಾಂಗ್ರೆಸ್ ನಾಯಕರು ಅನುಕೂಲಸಿಂಧು ರಾಜಕಾರಣವನ್ನು ಬಿಟ್ಟು ಪಕ್ಷವನ್ನು ಅಧಿಕಾರಕ್ಕೆ ತರಲು ನಿಷ್ಠೆಯಿಂದ ಕೆಲಸ ಮಾಡಬೇಕಿದೆ ಎಂದು ಸಲಹೆ ನೀಡಿದರು.

ಒಗ್ಗೂಡಿಸುವ ಕೆಲಸ ಮಾಡಬೇಕು

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಎಲ್ಲಾ ಕಾರ್ಯಕರ್ತರನ್ನು ಒಗ್ಗೂಡಿಸಿ ಒಗ್ಗಟ್ಟಾಗಿ ಕರೆದುಕೊಂಡು ಹೋಗುವ ಕೆಲಸ ಮಾಡಬೇಕಿದೆ. ಮುಂಬರುವ ತಾಲೂಕು ಪಂಚಾಯಿತಿ,ಜಿಲ್ಲಾ ಪಂಚಾಯಿತಿ ಚುನಾವಣೆಯ ವೇಳೆಗೆ ಅತಿ ಹೆಚ್ಚು ಸದಸ್ಯತ್ವ ನೋಂದಣಿ ಮಾಡಿಸಬೇಕು. ಪಂಚಾಯತಿ ಮಟ್ಟದಲ್ಲಿ ಪ್ರತಿ ಬೂತ್ ಗಳಲ್ಲೂ ಸಭೆ ಮಾಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಗಟ್ಟಿಗೊಳಿಸಬೇಕು ಎಂದು ಸಲಹೆ ನೀಡಿದರು.

ಸಮರ್ಥವಾಗಿ ಉತ್ತರ ಕೊಡಬೇಕು

ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಬಂದು ಅದೇನು ಸಾಧನೆ ಮಾಡಿದರು ಎಂಬುದು ಗೊತ್ತಿಲ್ಲ.ಸರ್ಕಾರ ಮೋದಿಯವರ ಕಾರ್ಯಕ್ರಮಕ್ಕೆ ಪ್ರತಿ ಪಂಚಾಯಿತಿ ಮಟ್ಟದಲ್ಲೂ ಜನರನ್ನು ಕರೆತರುವ ಜವಾಬ್ದಾರಿಯನ್ನು ಪಿಡಿಓಗಳಿಗೆ ವಹಿಸುವ ಮುಖಾಂತರ ಅಧಿಕಾರ ದುರುಪಯೋಗ ಪಡಿಸಿಕೊಂಡಿತು. ಈ ಬಗ್ಗೆ ಯಾರೂ ಕೂಡ ಚಕಾರ ಎತ್ತಲಿಲ್ಲ. ಎಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡಿದರೂ ಅವರ ವಿರುದ್ಧ ಕಾಂಗ್ರೆಸ್ಸಿಗರು ಮಾತನಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮ ನಾಯಕರಾದ ಸಿದ್ದರಾಮಯ್ಯನವರು ವಿರೋಧಪಕ್ಷದ ನಾಯಕರಾಗಿ ಆಡಳಿತ ಪಕ್ಷ ಬಿಜೆಪಿ ಮತ್ತು ಜೆಡಿಎಸ್ ನಾಯಕರನ್ನು ಸಮರ್ಥವಾಗಿ ಎದುರಿಸುತ್ತಾರೆ. ಆದರೆ ಬೇರೆ ನಾಯಕರು ಅವರಿಗೆ ಬೆಂಬಲವಾಗಿ ನಿಲ್ಲುತ್ತಿಲ್ಲ. ಪ್ರತಿಯೊಬ್ಬ ಕಾಂಗ್ರೆಸ್ ನಾಯಕರು ಬಿಜೆಪಿ ಜೆಡಿಎಸ್ ಪಕ್ಷವನ್ನು ಸಮರ್ಥವಾಗಿ ಎದುರಿಸಿ ಕಾರ್ಯಕರ್ತರಲ್ಲಿ ವಿಶ್ವಾಸ ತುಂಬಬೇಕಿದೆ ಎಂದರು.

ಕಾರ್ಯಾಧ್ಯಕ್ಷ ಧ್ರುವನಾರಾಯಣ್, ರಾಜ್ಯಸಭಾ ಸದಸ್ಯ ಚಂದ್ರಶೇಖರ್, ಮಾಜಿ ಸಚಿವ ಚಲುವರಾಯಸ್ವಾಮಿ,ಆತ್ಮಾನಂದ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ದಡದಪುರ ಶಿವಣ್ಣ,ಡಾ.ರವೀಂದ್ರ,ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್, ಮಾಜಿ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ಕೆ.ಬಿ.ಚಂದ್ರಶೇಖರ್,ಮುಖಂಡರಾದ ಗಣಿಗ ರವಿಕುಮಾರ್, ಡಾ.ಕೃಷ್ಣ, ಪ್ರಶಾಂತ್ ಬಾಬು, ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್,ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ ಅವರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!