ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮೈ.ವಿ. ರವಿಶಂಕರ್ ಇಂದು ನಾಮಪತ್ರ ಸಲ್ಲಿಸಿದರು.
ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜೊತೆಗೂಡಿ, ಪ್ರಾದೇಶಿಕ ಆಯುಕ್ತರಿಗೆ ರವಿಶಂಕರ್ ಅವರು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸುವುದಕ್ಕೂ ಮೊದಲು ಕಾರ್ಯಕರ್ತರ ಜೊತೆಗೂಡಿ ಪೂಜೆ ಸಲ್ಲಿಸಿದ ರವಿಶಂಕರ್ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಆಶೀರ್ವದಿಸಬೇಕೆಂದು ಮತದಾರರಲ್ಲಿ ಕೋರಿದರು.
ಕಳೆದ ಬಾರಿ ಅಲ್ಪ ಮತಗಳ ಅಂತರದಿಂದ ಸೋತಿರುವ ನನಗೆ ಮತದಾರರು ಈ ಬಾರಿ ಕೈ ಹಿಡಿಯಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಎಸ್.ಟಿ.ಸೋಮಶೇಖರ್, ನಾರಾಯಣಗೌಡ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ರಾಮದಾಸ್, ನಾಗೇಂದ್ರ, ಎನ್.ಮಹೇಶ್, ನಿರಂಜನ್ ಕುಮಾರ್, ಬಿಜೆಪಿ ಮುಖಂಡರಾದ ತುಳಸಿ ಮುನಿರಾಜು ಗೌಡ ಸೇರಿದಂತೆ ಮತ್ತಿತರರಿದ್ದರು.