Thursday, September 19, 2024

ಪ್ರಾಯೋಗಿಕ ಆವೃತ್ತಿ

ನಾನು ಜೆಡಿಎಸ್ ಟಿಕೆಟ್ ಆಕಾಂಕ್ಷಿ : ತಗ್ಗಹಳ್ಳಿ ವೆಂಕಟೇಶ್

ನಾನು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ನ ಪ್ರಬಲ ಆಕಾಂಕ್ಷಿಯಾಗಿದ್ದೇನೆಂದು ಜಿ.ಪಂ.ಮಾಜಿ ಅಧ್ಯಕ್ಷ ತಗಹಳ್ಳಿ ವೆಂಕಟೇಶ್ ಹೇಳಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕಳೆದ 30 ವರ್ಷಗಳಿಂದ ಜೆಡಿಎಸ್ ಪಕ್ಷಕ್ಕೆ ಪ್ರಾಮಾಣಿಕವಾಗಿ ದುಡಿದಿದ್ದೇನೆ, ಗ್ರಾಮ ಪಂಚಾಯಿತಿಯಿಂದ ತಾ.ಪಂ., ಜಿ.ಪಂ., ವಿಧಾನಸಭೆ ಹಾಗೂ ಪರಿಷತ್ ಚುನಾವಣೆಗಳಲ್ಲಿ ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ, ನನ್ನ ಈ ಸೇವೆಯನ್ನು ಪರಿಗಣಿಸಿ ಪಕ್ಷದ ನಾಯಕರು ಟಿಕೆಟ್ ನೀಡುವ ನಂಬಿಕೆ ಇದೆ ಎಂದು ಹೇಳಿದರು.

ಹಲವು ಚುನಾವಣೆಗಳಿಂದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ, ಕಳೆದ ಭಾರೀ ಪಕ್ಷದ ನಾಯಕರು ನನ್ನ ಮನವೊಲಿಸಿ ರವೀಂದ್ರ ಶ್ರೀಕಂಠಯ್ಯ ಅವರಿಗೆ ಟಿಕೆಟ್ ನೀಡಿದರು. ನನಗೆ ನಿಗಮ ಮಂಡಳಿಗಳಲ್ಲಿ ಅವಕಾಶ ನೀಡುವುದಾಗಿ ಪಕ್ಷದ ನಾಯಕರು ಭರವಸೆ ನೀಡಿದ್ದರು. ಆದರೆ, ಅವಕಾಶ ನೀಡಲಿಲ್ಲ ಎಂದು ದೂರಿದರು.

ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಮಂಡ್ಯ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್ ಅವರು ನನ್ನನ್ನು ಉದ್ದೇಶ ಪೂರ್ವಕವಾಗಿ ನಿರ್ಲಕ್ಷಿಸುತ್ತಿದ್ದಾರೆ, ಈ ಹಿಂದೆ ಪಕ್ಷದಿಂದ ನಡೆದ ಯಾವುದೇ ಸಮಾರಂಭಗಳಿಗೆ ನನ್ನನ್ನು ಆಹ್ವಾನಿಸುತ್ತಿರಲಿಲ್ಲ, ಈ ಬಗ್ಗೆ ಪಕ್ಷದ ನಾಯಕರ ಗಮನಕ್ಕೆ ತಂದರೂ, ಅವರು ಕರೆದು ಮಾತನಾಡುವ ಕೆಲಸ ಮಾಡಿಲ್ಲ, ಇದರಿಂದಾಗಿ ಬೇಸತ್ತು ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದರು.

ಕಾರ್ಯಕರ್ತರ ಸಭೆ ಕರೆದು ಮುಂದಿನ ನಡೆ ನಿರ್ಧಾರ

ಪಕ್ಷದ ನಾಯಕರಾದ ಹೆಚ್.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ನನಗೆ ಅವಕಾಶ ನೀಡುವ ನಂಬಿಕೆ ಇದೆ. ಒಂದು ವೇಳೆ ಟಿಕೆಟ್ ಕೈತಪ್ಪಿದರೆ ಬೆಂಬಲಿಗರ ಸಭೆ ಕರೆದು ಅವರ ಅಭಿಪ್ರಾಯ ಪಡೆದು, ಮುಂದಿನ ನಡೆ ನಿರ್ಧರಿಸುತ್ತೇನೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಗೋಷ್ಠಿಯಲ್ಲಿ ಮುಖಂಡರಾದ ಶಿವಬೋರಯ್ಯ, ಸುರೇಶ್ ಹನಿಯಂಬಾಡಿ, ಶೈಲಜಾ ತಿಮ್ಮಯ್ಯ, ಸುಜಾತ ಶಂಕರ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!