ಸರ್ಕಾರದ ವಿವಿಧ ಇಲಾಖೆಗಳ ವೃಂದ ಮತ್ತು ನೇಮಕಾತಿ (C&R) ನಿಯಮಗಳ ಸಮಗ್ರ ಪರಿಷ್ಕರಣೆ ಕಾರ್ಯ ಪ್ರಗತಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸರ್ಕಾರದ ಬಹುತೇಕ ಇಲಾಖೆಗಳ ವೃಂದ ಮತ್ತು ನೇಮಕಾತಿ (C&R) ನಿಯಮಗಳು ಕಾಲಕಾಲಕ್ಕೆ ಪರಿಷ್ಕರಣೆ ಆಗದೆ 15ಕ್ಕೂ ಹೆಚ್ಚು ವರ್ಷಗಳು ಕಳೆದಿರುವ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಶಾಸಕ ಮಧು ಜಿ.ಮಾದೇಗೌಡ ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಿಖಿತ ಉತ್ತರ ನೀಡಿದ್ದಾರೆ.

ಸರ್ಕಾರದ ಎಲ್ಲಾ ಇಲಾಖೆಗಳು ವೃಂದ ಮತ್ತು ನೇಮಕಾತಿ ನಿಯಮಗಳನ್ನು ಕನಿಷ್ಠ 3 ವರ್ಷಗಳಿಗೆ ಒಮ್ಮೆ ಪುನರಾವಲೋಕಿಸುವಂತೆ ಸೂಚನೆಗಳನ್ನು ನೀಡಲಾಗಿದೆ. ಆದಾಗ್ಯೂ ಬಹುತೇಕ ಇಲಾಖೆಗಳು ಚಾಲ್ತಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳ ರಚನೆ/ ಪರಿಷ್ಕರಣೆ ನಡೆಸಿಲ್ಲ ಎಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳ ಬಗ್ಗೆ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಹಂತದಲ್ಲಿ ಪರಿಶೀಲನಾ ಸಭೆ ಕೈಗೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.
ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್, ಜಲಸಂಪನ್ಮೂಲ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಉನ್ನತ ಶಿಕ್ಷಣ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ನಗರಾಭಿವೃದ್ಧಿ, ಸಹಕಾರ, ಇಂಧನ, ಲೋಕೋಪಯೋಗಿ, ಆರ್ಥಿಕ, ಕಾರ್ಮಿಕ ಇಲಾಖೆ ಸೇರಿದಂತೆ ಒಟ್ಟು 33 ಇಲಾಖೆಗಳು ವೃಂದ ಮತ್ತು ನೇಮಕಾತಿ ನಿಯಮಗಳನ್ನು 5 ವರ್ಷ ಮೇಲ್ಪಟ್ಟಿದ್ದರೂ ಪರಿಷ್ಕರಿಸಿಲ್ಲ ಎಂದೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಆದಿಚುಂಚನಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ವಿಜ್ಞಾನ ಕೇಂದ್ರ
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಶಾಸಕ ಮಧು ಜಿ.ಮಾದೇಗೌಡ ಕೇಳಿದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದು, 2025ರ ಸೆಪ್ಟೆಂಬರ್ ವೇಳೆಗೆ ಈ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಅಲ್ಲದೆ, ಚಾಮರಾಜನಗರದಲ್ಲಿ ರೂ. 8 ಕೋಟಿ ವೆಚ್ಚದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಹಾಗೂ ಹಾಸನದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ತಾರಾಲಯವನ್ನು ರೂ. 10.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದಿದ್ದಾರೆ.
ಈ ಕಾಮಗಾರಿಗಳನ್ನು ವೇಗಗೊಳಿಸಲು ಸದರಿ ಕೇಂದ್ರದ ಅಧ್ಯಕ್ಷರಾದ ಜಿಲ್ಲಾಧಿಕಾರಿ, ಕೇಂದ್ರದ ನೋಡಲ್ ಅಧಿಕಾರಿ ಹಾಗೂ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಸಂಸ್ಥೆಯೊಂದಿಗೆ ನಿರಂತರವಾಗಿ ಸಮನ್ವಯವನ್ನು ಸಾಧಿಸಲಾಗುತ್ತಿದ್ದು ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ವಿವರಿಸಿದ್ದಾರೆ.
ವಿಜ್ಞಾನ ಕೇಂದ್ರದಲ್ಲಿ ಏನೇನು ಇರಲಿದೆ?
ವಿನೋದ ವಿಜ್ಞಾನ ಗ್ಯಾಲರಿ, ವಿಷಯಾಧಾರಿತ ಗ್ಯಾಲರಿ, ತರಬೇತಿ ಕೊಠಡಿ, ಕಂಪ್ಯೂಟರ್ ಹಾಗೂ ಗ್ರಂಥಾಲಯ, ಹೊರಾಂಗಣ ವಿಜ್ಞಾನ ಪಾರ್ಕ್ ಮತ್ತು ಚಟುವಟಿಕೆ ಕೊಠಡಿ ಇರಲಿದೆ.
ಪಿ.ಹೆಚ್.ಡಿ ಶಿಷ್ಯ ವೇತನ
ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಷಯಗಳಲ್ಲಿ ಪಿ.ಹೆಚ್.ಡಿ. ಸಂಶೋಧನೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಡಿ.ಎಸ್.ಟಿ-ಪಿಹೆಚ್.ಡಿ ಶಿಷ್ಯವೇತನ ಯೋಜನೆಯಡಿ ಆಯ್ಕೆಯಾಗುವ ವಿವಿಧ ವಿಶ್ವವಿದ್ಯಾಲಯಗಳ, ಸಂಸ್ಥೆಗಳ ಸಂಶೋಧನಾ ವಿದ್ಯಾರ್ಥಿಗಳಿಗೆ ತಲಾ ರೂ. 20 ಸಾವಿರ ಮಾಸಿಕ ಶಿಷ್ಯ ವೇತನ ನೀಡಲಾಗುತ್ತಿದೆ. ಇದಕ್ಕಾಗಿ, ವಾರ್ಷಿಕ ರೂ. 3 ಕೋಟಿ ಅನುದಾನ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.




