Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ ಲೋಕಸಭಾ ಚುನಾವಣೆ| ಸ್ಟಾರ್ ಬಿಲ್ಡರ್ಸ್ ಚಂದ್ರು ಕಾಂಗ್ರೆಸ್ ಅಭ್ಯರ್ಥಿ?

ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ರಾಜ್ಯದ ಗಮನ ಸೆಳೆದಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ. ರಾಜ್ಯದ ಬಹುತೇಕ ಮಾಧ್ಯಮಗಳು ಸುಮಲತಾ ಅಂಬರೀಶ್ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಎಂಬ ಸ್ಟಾರ್ ಗಳ ನಡುವಿನ ಸ್ಪರ್ಧೆಯನ್ನು ಹೈಲೈಟ್ ಮಾಡಿದ್ದೇ ಮಂಡ್ಯ ಕ್ಷೇತ್ರ. ರಾಜ್ಯದ ಎಲ್ಲಾ ಕ್ಷೇತ್ರಗಳಿಗಿಂತ ಹೈ ವೊಲ್ಟೇಜ್ ಕಣವಾಗಲು ಕಾರಣ.

ಇಂತಹ ‘ಸ್ಟಾರ್’ ಗಿರಿಯ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಟಿಕೆಟ್ ಕೇಳುತ್ತಿದ್ದಾರೆ. ಅತ್ತ ಕಾಂಗ್ರೆಸ್ ಪಕ್ಷದಿಂದ ಕೃಷಿ ಸಚಿವ ಚಲುವರಾಯಸ್ವಾಮಿ ಆಪ್ತ ಬೆಂಬಲಿಗ ಸ್ಟಾರ್ ಬಿಲ್ಡರ್ಸ್ ಎಂಬ ದೈತ್ಯ ಕಂಪನಿ ಮಾಲೀಕ ಸ್ಟಾರ್ ಚಂದ್ರು ಅವರನ್ನು ಕಣಕ್ಕಿಳಿಸುವ ಮಾತುಗಳು ಗಟ್ಟಿಯಾಗಿ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯೂ ಮಂಡ್ಯ ಕ್ಷೇತ್ರ ಹೈ ವೊಲ್ಟೇಜ್ ಕಣವಾಗಲಿದೆ‌.

ಮಂಡ್ಯದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಟಾರ್ ಚಂದ್ರು ಅವರ ಹೆಸರು ಬಹುತೇಕ ಅಂತಿಮಗೊಂಡಿದೆ. ಸಚಿವ ಚಲುವರಾಯಸ್ವಾಮಿ ಅವರು ಸ್ಟಾರ್ ಚಂದ್ರು ಅಭ್ಯರ್ಥಿಯಾದರೆ ಮಂಡ್ಯ ಕ್ಷೇತ್ರ ಕಾಂಗ್ರೆಸ್ ಪಾಲಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದು, ಅವರೇ ಕಾಂಗ್ರೆಸ್ ಅಭ್ಯರ್ಥಿ ಎಂಬ ಮಾತುಗಳನ್ನು ಕಾಂಗ್ರೆಸ್ ಮುಖಂಡರೇ ಕ್ಷೇತ್ರದಾದ್ಯಂತ ಹೇಳುತ್ತಿದ್ದಾರೆ. ಈ ಬಗ್ಗೆ ಸ್ಟಾರ್ ಚಂದ್ರು ಅವರ ಸಹೋದರ ಗೌರಿಬಿದನೂರು ಪಕ್ಷೇತರ ಶಾಸಕ ಪುಟ್ಟಸ್ವಾಮಿ ಅವರು ಹೇಳಿಕೆ ನೀಡಿದ್ದಾರೆ.

ಮಂಡ್ಯ ತಾಲ್ಲೂಕಿನ ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಹೋಬಳಿಯ ಕನ್ನಾಘಟ್ಟ ಗ್ರಾಮದ ಸ್ಟಾರ್ ಚಂದ್ರು (ವೆಂಕಟರಮಣೇಗೌಡ) ಸಚಿವ ಚಲುವರಾಯಸ್ವಾಮಿ ಆಪ್ತರಾಗಿದ್ದಾರೆ. ಹಲವಾರು ಉದ್ಯಮಗಳಲ್ಲಿ ಕೈ ಹಾಕಿ ಯಶಸ್ವಿ ಉದ್ಯಮಿ ಎನಿಸಿಕೊಂಡಿರುವ ಸ್ಟಾರ್ ಚಂದ್ರು ಅವರನ್ನು ಅಭ್ಯರ್ಥಿ ಮಾಡಿದರೆ ಮಂಡ್ಯ ಕ್ಷೇತ್ರ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲಕರ ಎನ್ನುವ ಉದ್ದೇಶದಿಂದ ಅವರನ್ನೇ ಅಭ್ಯರ್ಥಿ ಮಾಡಲು ಚಲುವರಾಯಸ್ವಾಮಿ ಕಾಂಗ್ರೆಸ್ ವರಿಷ್ಠರು ಹಾಗೂ ಜಿಲ್ಲೆಯ ಶಾಸಕರೊಂದಿಗೆ ಚರ್ಚಿಸಿ ಫೈನಲ್ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಗೌರಿಬಿದನೂರು ಕ್ಷೇತ್ರದಲ್ಲಿ ಉದ್ಯಮ ಸ್ಥಾಪಿಸಲು ಹೋಗಿ ಅಲ್ಲಿನ ಕಾಂಗ್ರೆಸ್ ನಾಯಕ ಐದು ಬಾರಿ ಶಾಸಕರಾಗಿ, ಸಚಿವರಾಗಿದ್ದ ಶಿವಶಂಕರ್ ರೆಡ್ಡಿ ಮುಂದೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ ಪುಟ್ಟಸ್ವಾಮಿಗೌಡ ಈಗ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಕೆ.ಆರ್.ಪೇಟೆ ಹೊರತುಪಡಿಸಿ ಜಿಲ್ಲೆಯ ಆರು (ಮೇಲುಕೋಟೆ ಕಾಂಗ್ರೆಸ್ ಬೆಂಬಲಿತ ಸರ್ವೋದಯ ಕರ್ನಾಟಕ ಶಾಸಕ) ಹಾಗೂ ಮೈಸೂರು ಜಿಲ್ಲೆಯ ಕೆ.ಆರ್.ನಗರ ಕ್ಷೇತ್ರ ಕೂಡ ಕಾಂಗ್ರೆಸ್ ತೆಕ್ಕೆಯಲ್ಲಿದೆ. ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ವಾತಾವರಣವಿದ್ದು, ಉದ್ಯಮಿ ಸ್ಟಾರ್ ಚಂದ್ರು ಅವರನ್ನು ಕಣಕ್ಕಿಳಿಸಿದರೆ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಹೆಚ್ಚು ಎಂಬ ಮಾತು ದಟ್ಟವಾಗಿ ಕೇಳಿಬರುತ್ತಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!