ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ರಾಜ್ಯಮಟ್ಟದ ಶೈಕ್ಷಣಿಕ ಅಧಿವೇಶನ, ಮಾತೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸರ್ವ ಸದಸ್ಯರ ಸಭೆಯನ್ನು ಮಾರ್ಚ್ 1ರಂದು ಬೆಳಿಗ್ಗೆ 9.30 ಗಂಟೆಗೆ ಮಂಡ್ಯ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಕೆ.ನಾಗೇಶ್ ತಿಳಿಸಿದರು.
ಮಂಡ್ಯ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಕೇಂದ್ರ ಹಾಗೂ ರಾಜ್ಯದ ಸಚಿವರುಗಳು ಭಾಗವಹಿಸಲಿದ್ದು, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಲಾಗುವುದು ಎಂದರು.
ಶೈಕ್ಷಣಿಕ ಅಧಿವೇಶನದಲ್ಲಿ ಕೇಂದ್ರ ಸಚಿವ ಸನ್ಮಾನ್ಯ ಹೆಚ್.ಡಿ.ಕುಮಾರಸ್ವಾಮಿ ಭಾಗವಹಿಸಲಿದ್ದು, ಸಮಾರಂಭದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ನೆರವೇರಿಸಲಿದ್ದಾರೆ. ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು.
ಸಾಮಾಜಿಕ ನ್ಯಾಯಪರ ಹೋರಾಟಗಾರರು ಹಾಗೂ ಖ್ಯಾತ ಸಾಹಿತಿಗಳಾದ ಡಾ.ಬರಗೂರು ರಾಮಚಂದ್ರಪ್ಪ ಅಧಿವೇಶನದ ದಿಕ್ಕೂಚಿ ಭಾಷಣವನ್ನು ಮಾಡಲಿದ್ದು, ಜಿಲ್ಲಾಧಿಕಾರಿ ಡಾ.ಕುಮಾರ ಶೈಕ್ಷಣಿಕ ಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ. ಸದರಿ ಸಭೆಯಲ್ಲಿ ಶಿಕ್ಷಕರ ಪ್ರಮುಖ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲಾಗುವುದು ಎಂದರು.
ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸಿರುವ 66 ಜನ ಗೌರವಾನ್ವಿತ ಶಿಕ್ಷಕ, ಶಿಕ್ಷಕಿಯರಿಗೆ “ಮಾತೆ ಸಾವಿತ್ರಿಬಾಯಿ ಫುಲೆ” ಪ್ರಶಸ್ತಿಯನ್ನು ನೀಡಿ ಇದೇ ಸಂದರ್ಭದಲ್ಲಿ ಗೌರವಿಸಲಾಗುವುದು ಎಂದ ಅವರು, ಸಂಘಟನೆಯ ಎಲ್ಲಾ ಜಿಲ್ಲೆ,ತಾಲ್ಲೂಕು ಅಧ್ಯಕ್ಷರು,ಪ್ರಧಾನ ಕಾರ್ಯದರ್ಶಿಗಳನ್ನು,ಪದಾಧಿಕಾರಿಗಳು, ಪ್ರತಿನಿಧಿಗಳು, ನಿರ್ದೇಶPರು, ಶಿಕ್ಷಕರು ಎಲ್ಲರೂ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮನವಿ ಮಾಡಿದರು.
ಶೈಕ್ಷಣಿಕ ಅಧಿವೇಶನದಲ್ಲಿ 5000ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಶಿಕ್ಷಕರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಎಲ್ಲಾ ಶಾಸಕರಲ್ಲಿ ವಿನಂತಿಸಿಕೊಳ್ಳಲಾಗುವುದು ಎಂದು ಇದೇ ವೇಳೆ ತಿಳಿಸಿದರು.
ಗೋಷ್ಠಿಯಲ್ಲಿ ಉಪಾಧ್ಯಕ್ಷ ಮಾರುತೇಶ್.ಆರ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ, ಸಂಘಟನಾ ಕಾರ್ಯದರ್ಶಿ ಪ್ರಮೀಳಾ.ಟಿ, ಜಿಲ್ಲಾಧ್ಯಕ್ಷ ಮಂಜುನಾಥ್.ಜೆ.ವೈ, ಜಿ.ಪ್ರಧಾನ ಕಾರ್ಯದರ್ಶಿ ಚಿಕ್ಕೇಗೌಡ.ಎ, ಸಿದ್ದರಾಮು, ರವಿಶಂಕರ್, ರುದ್ರೇಶ್ ಇತರರಿದ್ದರು.




