Friday, November 20, 2026

ಪ್ರಾಯೋಗಿಕ ಆವೃತ್ತಿ

ಪೌರಕಾರ್ಮಿಕರ ಹುದ್ದೆಗಳ ಭರ್ತಿಗೆ ಆಗ್ರಹಿಸಿ ರಾಜ್ಯಾದ್ಯಂತ ಧರಣಿ: ನಾಗಣ್ಣಗೌಡ

ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಹೊರಗುತ್ತಿಗೆ ನೌಕರರನ್ನು ನೇರಪಾವತಿಗೆ ಒಳಪಡಿಸಿ, ಬಾಕಿ ಇರುವ ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿಗೊಳಿಸುವಂತೆ ಆಗ್ರಹಿಸಿ ನ.15 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಪೌರಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಂತೆ ಘನ ತ್ಯಾಜ್ಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಕಸ ಸಾಗಿಸುವ ವಾಹನ ಚಾಲಕರು, ಲೋಡರ್ಸ್, ಕ್ಲೀನರ್ಸ್, ಹೆಲ್ಪರ್ಸ್, ಯುಜಿಡಿ ಕಾರ್ಮಿಕರು, ಸ್ಯಾನಿಟರಿ ಸೂಪರ್ ವೈಸರುಗಳನ್ನು ಏಕಕಾಲಕ್ಕೆ ಗುತ್ತಿಗೆ ಪದ್ಧತಿ ಬದಲು ನೇರಪಾವತಿಗೆ ತರಬೇಕು. ಬಾಕೀ ಇರುವ ಎಲ್ಲ ಪೌರಕಾರ್ಮಿಕರ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು. ನೀರು ಸರಬರಾಜು, ಸಹಾಯಕರು ಬೀದಿ ದೀಪ ನಿರ್ವಾಹಕರು ಸ್ಮಶಾನ ಕಾವಲುಗಾರರನ್ನು ಏಕಕಾಲಕ್ಕೆ ನೇರಪಾವತಿಗೆ ತಂದು ಖಾಯಂಗೊಳಿಸಬೇಕೆಂದು ಒತ್ತಾಯಿಸಿದರು.

ರಾಜ್ಯದಲ್ಲಿ 15ಸಾವಿರಕ್ಕೂ ಹೆಚ್ಚು ನೌಕರರನ್ನು ಗುತ್ತಿಗೆಯಲ್ಲಿ ಉಳಿಸಲಾಗಿದೆ. ನಗರಗಳ ಸ್ವಚ್ಛತೆ ಹಾಗೂ ಕುಡಿಯುವ ನೀರು ನಿರ್ವಹಣೆಯಲ್ಲಿ ಹೊರಗುತ್ತಿಗೆ ನೌಕರರ ಪಾತ್ರ ಮಹತ್ವದ್ದಾಗಿದೆ. 2017ರಲ್ಲಿ ಪೌರಕಾರ್ಮಿಕರ ನೇಮಕಾತಿಗೊಳಿಸಿದಾಗಲೂ, ಹೊರಗುತ್ತಿಗೆ ನೌಕರರನ್ನು ಗುತ್ತಿಗೆಯಲ್ಲಿ ಉಳಿಸಲಾಯಿತು. 1964ರ ಪೌರಾಡಳಿತ ಕಾಯ್ದೆ ಪ್ರಕಾರ ಕಸ ಸಾಗಿಸುವ ವಾಹನ ಚಾಲಕರು ಲೋಡರ್ಸ್ ಕ್ಲೀನರ್ಸ್ ಫೆಲರ್ಸ್ ಜಿಡಿ ಕಾರ್ಮಿಕರು ಸಹ ಪೌರಕಾರ್ಮಿಕರೆಂದು ಗುರುತಿಸಲಾಗಿದೆ. ಆದಾಗಿಯೂ ನಗರಾಭಿವೃದ್ಧಿ ಅಧಿಕಾರಿಗಳು ತಾರತಮ್ಯ ಎಸಗಿ ನೇರ ನೇಮಕಾತಿ ಹಾಗೂ ನೇರ ಪಾವತಿಯಿಂದ ಹೊರಗುತ್ತಿಗೆ ನೌಕರರಿಗೆ ಅನ್ಯಾಯವೆಸಗಿದ್ದಾರೆ ಎಂದು ದೂರಿದರು.

ಈಗಲೂ ಸಹ ಹೊರಗುತ್ತಿಗೆ ನೌಕರರನ್ನು ಗುತ್ತಿಗೆಯಲ್ಲಿ ಮುಂದುವರಿಸುವ ಸರಕಾರದ ನೀತಿ ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಎಂಬಂತಾಗಿದೆ. ಒಂದೇ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವರ ಮಧ್ಯೆ ಒಡೆದಾಳುವ ನೀತಿ ಅನುಸರಿಸುವುದು, ಶೋಭೆಯಲ್ಲ. ಕಳೆದ 2017 ರಲ್ಲಿ ಪೌರಕಾರ್ಮಿಕರನ್ನು ಖಾಯಂಗೊಳಿಸಲಾಯಿತು. ನಗರ ಸ್ಥಳೀಯ ಸಂಸ್ಥೆಗಳ ಇನ್ನುಳಿದ ಹೊರಗುತ್ತಿಗೆ ನೌಕರರನ್ನು ನೇರಪಾವತಿಗೆ ತರುವುದಾಗಿ ಅಂದು ಕಾಂಗ್ರೆಸ್‌ ಸರಕಾರ, ಆಶ್ವಾಸನೆ ನೀಡಿತ್ತು. ಕಳೆದ ಸರಕಾರದಲ್ಲಿ ತೀವ್ರ ಹೋರಾಟದ ಪರಿಣಾಮ – ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ನೇರ ಪಾವತಿ ಕಡತ ಹಣಕಾಸು ಇಲಾಖೆಯಲ್ಲಿದ್ದು, ಕಡತವನ್ನು ಸಂಪುಟದಲ್ಲಿ ಅಂಗೀಕರಿಸಬೇಕೆಂದಿ ಆಗ್ರಹಿಸಿದರು.

ಗೋಷ್ಠಿಯಲ್ಲಿ ಪೌರಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಎನ್.ನಾಗರಾಜು, ಮುಖಂಡರಾದ ಮಹದೇವು, ಶಿವು, ರಾಜೇಶ್ ಹಾಗೂ ತಂಗ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ