Thursday, June 13, 2024

ಪ್ರಾಯೋಗಿಕ ಆವೃತ್ತಿ

ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಮರಿತಿಬ್ಬೇಗೌಡರ ಗೆಲುವಿಗೆ ಶ್ರಮಿಸಿ: ಚಲುವರಾಯಸ್ವಾಮಿ

ಕೇವಲ ದುಡ್ಡಿದ್ದ ಮಾತ್ರಕ್ಕೆ ಚುನಾವಣೆಯನ್ನು ಗೆಲ್ಲುವುದಕ್ಕೆ ಸಾಧ್ಯವಿಲ್ಲ. ಶಿಕ್ಷಕರೊಂದಿಗೆ ನಿರಂತರ ಒಡನಾಟ, ಸಂಪರ್ಕವಿರಬೇಕು. ಅವರ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಸಾಮರ್ಥ್ಯವಿರಬೇಕು, ಅಂತಹ ಸಾಮರ್ಥ್ಯ  ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರಿಗೆ ಇದೆ, ಹಾಗಾಗಿ ಕಾರ್ಯಕರ್ತರು ಅವರ ಗೆಲುವಿಗೆ ಶ್ರಮಿಸಬೇಕೆಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಮಂಡ್ಯ ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ಸಂಬಂಧ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮರಿತಿಬ್ಬೇಗೌಡರು ನಾಲ್ಕು ವರ್ಷಗಳಿಂದ ಸತತವಾಗಿ ಶಿಕ್ಷಕರ ಸಂಪರ್ಕದಲ್ಲಿದ್ದಾರೆ. ಅವರೊಂದಿಗೆ ಉತ್ತಮ ಸಂಬಂಧವಿಟ್ಟುಕೊಂಡಿದ್ದಾರೆ. ಅವರು ಕಾಂಗ್ರೆಸ್‌ಗೆ ಹೊಸಬರೇನಲ್ಲ. ಹಿಂದೊಮ್ಮೆ ಕಾಂಗ್ರೆಸ್‌ನಿಂದಲೇ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಆಯ್ಕೆಯಾಗಿದ್ದರು ಎಂದರು.

ಅನಿವಾರ್ಯ ಕಾರಣಗಳಿಂದ ಮರಿತಿಬ್ಬೇಗೌಡರು ಕಾಂಗ್ರೆಸ್ ಬಿಟ್ಟು ಜಾ.ದಳ ಸೇರಿದ್ದರು. ಈಗ ಜಾ.ದಳದವರ ಸಹವಾಸ ಹೇಗಿದೆ ಎನ್ನುವುದರ ಬಗ್ಗೆ ಜ್ಞಾನೋದಯವಾಗಿ ಮರಳಿ ಕಾಂಗ್ರೆಸ್ ಸೇರಿದ್ದಾರೆ. ಅವರ ಗೆಲುವಿಗೆ ಎಲ್ಲರೂ ಕೈಜೋಡಿಸುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಬ್ಲಾಕ್ ಮಟ್ಟದ ಕಾಂಗ್ರೆಸ್ ಅಧ್ಯಕ್ಷರು ಜವಾಬ್ದಾರಿ ವಹಿಸಿಕೊಂಡು ಮತದಾರರನ್ನು ಭೇಟಿಯಾಗಿ ಕಾಂಗ್ರೆಸ್ ಅಭ್ಯರ್ಥಿ ಪರ ಮನವೊಲಿಸಬೇಕು. ಚುನಾವಣೆ ದಿನ 100 ಜನರು ಮತಗಟ್ಟೆಗಳ ಬಳಿ ಇರಬೇಕು. ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದರು.

ಬೇರೆ ಶಕ್ತಿ ನೋಡಿ ಟಿಕೆಟ್

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜಾ.ದಳದ ಕೆ.ಟಿ.ಶ್ರೀಕಂಠೇಗೌಡರಿಗೆ ಟಿಕೆಟ್ ತಪ್ಪಿಸಿ ಬೇರೆಯವರಿಗೆ ನೀಡಿದೆ. ಅವರಿಗೂ ಶಿಕ್ಷಕರ ಕ್ಷೇತ್ರಕ್ಕೂ ಯಾವುದೇ ಸಂಬಂಧ ಇಲ್ಲ. ಆ ಅಭ್ಯರ್ಥಿಯಲ್ಲಿರುವ ಬೇರೆ ಶಕ್ತಿ ನೋಡಿ ಟಿಕೆಟ್ ನಿರ್ಧಾರ ಮಾಡಿದ್ದಾರೆ. ಆದರೆ, ಕೇವಲ ದುಡ್ಡಿದ್ದ ಮಾತ್ರಕ್ಕೆ ಚುನಾವಣೆಯನ್ನು ಗೆಲ್ಲುವುದಕ್ಕೆ
ಸಾಧ್ಯವಿಲ್ಲ. ಶಿಕ್ಷಕರೊಂದಿಗೆ ನಿರಂತರ ಒಡನಾಟ, ಸಂಪರ್ಕವಿರಬೇಕು. ಅವರ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಸಾಮರ್ಥ್ಯವಿರಬೇಕು ಎಂದು ಹೇಳಿದರು.

ಲೋಕಸಭೆ ಗೆಲುವು ಖಚಿತ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ. ಅದರಲ್ಲಿ ಯಾವ ಅನುಮಾನವೂ ಇಲ್ಲ. ನೂರಕ್ಕೆ ನೂರು ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಫಲಿತಾಂಶದ ಬಗ್ಗೆ ಜಾ.ದಳದವರ ವಾಯ್ಸ್ ಹೆಚ್ಚಾಗಿದೆ. ಗಟ್ಟಿಯಾಗಿ ಹೇಳುವುದಕ್ಕೆ ಕಾಂಗ್ರೆಸ್‌ನವರಿಗೆ ಹಿಂಜರಿಕೆ, ಭಯ. ನಮಗೂ ಚುನಾವಣೆ ನಡೆಸಿರುವ ಅನುಭವವಿದೆ. ಚುನಾವಣೆ ಹೇಗೆ ನಡೆದಿದೆ ಎಂಬ ಬಗ್ಗೆ ನಮಗೂ ಮಾಹಿತಿ ಇದೆ. ಅದರ ಆಧಾರದ ಮೇಲೆ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಚುನಾವಣೆ ಮುಗಿದ ಬಳಿಕ ಜಾ.ದಳದ ಪರ ಒಂದು ಲಕ್ಷಕ್ಕೆ ಎರಡು ಲಕ್ಷ ರೂ. ಬೆಟ್ಟಿಂಗ್ ಕಟ್ಟುತ್ತಿದ್ದವರು ಆನಂತರ ಒಂದು ಲಕ್ಷಕ್ಕೆ ಬಂದರು. ಈಗ ಬೆಟ್ಟಿಂಗ್ ಕಟ್ಟುವುದಕ್ಕೆ ಯಾರೂ ಮುಂದೆ ಬರುತ್ತಿಲ್ಲ. ಗೆಲುವಿನ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದರು.

ಮಾಜಿ ಶಾಸಕ ಎಚ್.ಬಿ.ರಾಮು ಮಾತನಾಡಿ, ಒಕ್ಕಲಿಗ ನಾಯಕನಾಗಿ ಡಿ.ಕೆ.ಶಿವಕುಮಾರ್ ಬೆಳವಣಿಗೆ ಕಾಣುವುದನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಹಿಸುತ್ತಿಲ್ಲ. ಅದಕ್ಕಾಗಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಹಿಂದೆಲ್ಲಾ ಚಿಕ್ಕಬಳ್ಳಾಫುರ, ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧಿಸುತ್ತಿದ್ದ ಕುಮಾರಸ್ವಾಮಿ ಈಗ ದ್ವೇಷದ ಕಾರಣಕ್ಕಾಗಿಯೇ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ ಎಂದು ಟೀಕಿಸಿದರು.

ಸಭೆಯಲ್ಲಿ ಶಾಸಕ ಪಿ.ರವಿಕುಮಾರ್ ಗಣಿಗ, ಮಾಜಿ ಶಾಸಕರಾದ ಎಂ.ಶ್ರೀನಿವಾಸ್, ಕೆ.ಬಿ.ಚಂದ್ರಶೇಖರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಮುಖಂಡ ವಿಜಯ್‌ರಾಮೇಗೌಡ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ತಾಪಂ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು, ಕುರುಬರ ಸಂಘದ ಜಿಲ್ಲಾಧ್ಯಕ್ಷ ಸುರೇಶ್, ರುದ್ರಪ್ಪ, ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!