Tuesday, November 24, 2026

ಪ್ರಾಯೋಗಿಕ ಆವೃತ್ತಿ

ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಅಗತ್ಯ : ನಟಿ ಶೃತಿ

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಬೆಳೆಸಿಕೊಂಡು ಸಮಾಜಮುಖಿಯಾಗಿ ಹೆಜ್ಜೆ ಹಾಕಬೇಕು. ಸೇವಾ ಮನೋಭಾವನೆ ಮತ್ತು ಪರೋಪಕಾರ ಗುಣಗಳು ಜೀವನದ ಉಸಿರಾಗಬೇಕು ಎಂದು ಕನ್ನಡ ಚಲನ ಚಿತ್ರರಂಗದ ಖ್ಯಾತ ನಟಿ ಶೃತಿ ಹೇಳಿದರು.

ಕೃಷ್ಣರಾಜಪೇಟೆ ತಾಲೂಕಿನ ಹೇಮಗಿರಿಯಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಭೈರವೈಕ್ಯ ಜಗದ್ಗುರು ಡಾ.ಬಾಲಗಂಗಾಧರ ನಾಥ ಮಹಾಸ್ವಾಮೀಜಿಯವರ 83ನೇ ಜಯಂತ್ಯೋತ್ಸವ ಹಾಗೂ 13ನೇ ವರ್ಷದ ಪುಣ್ಯ ಸಂಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಿಜಿಎಸ್ ಪಬ್ಲಿಕ್ ಶಾಲೆಯ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಜಾಗತಿಕ ಜಗತ್ತಿನ ಇಂದಿನ ಸ್ಪರ್ಧಾ ಪ್ರಪಂಚದಲ್ಲಿ ನಾವು ನಮ್ಮ ಮಕ್ಕಳನ್ನು ಅಂಕ ಗಳಿಕೆಯ ಶೂರರನ್ನಾಗಿ ಮಾಡುತ್ತಿದ್ದೇವೆಯೇ ಹೊರತು ನಮ್ಮ ಮಕ್ಕಳಿಗೆ ಅಗತ್ಯವಾಗಿ ಬೇಕಾಗಿರುವ ಮಾನವೀಯ ಮೌಲ್ಯಗಳು ಹಾಗೂ ಸಂಸ್ಕಾರವನ್ನು ನೀಡುತ್ತಿಲ್ಲ. ಶಿಕ್ಷಣದ ಜ್ಞಾನದ ಬೆಳಕಿನ ಶಕ್ತಿಯ ಜೊತೆಗೆ ನಮ್ಮ ಮಕ್ಕಳು ಗುರು ಹಿರಿಯರು ಹಾಗೂ ತಂದೆ ತಾಯಿಗಳನ್ನು ಗೌರವಿಸುವ ಉತ್ತಮವಾದ ಸಂಸಾರವನ್ನು ಬೆಳೆಸಿಕೊಳ್ಳಬೇಕೆಂದರು.

ಕನ್ನಡ ಚಲನಚಿತ್ರರಂಗದ ಖ್ಯಾತ ಹಾಸ್ಯ ನಟರಾದ ರಮೇಶ್ ಭಟ್ ಮಾತನಾಡಿ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಜಿಯವರು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠವನ್ನು ವಿಸ್ತರಿಸುವ ಜೊತೆಗೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು 500ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಬದುಕು ಕಟ್ಟಿಕೊಳ್ಳಲು ಆಸರೆಯಾಗಿದ್ದಾರೆ ಎಂದು ಸ್ಮರಿಸಿದರು.

ಚಲನಚಿತ್ರ ನಿರ್ದೇಶಕ ಮಹೇಶ್ ಸುಖಧರೆ, ಟಿಎಪಿಸಿಎಂಎಸ್ ಅಧ್ಯಕ್ಷ ಟಿ. ಬಲದೇವ್, ಹಿರಿಯ ಪತ್ರಕರ್ತ ಕೆ.ಆರ್. ನೀಲಕಂಠ, ಆದಿಚುಂಚನಗಿರಿಯ ಹೇಮಗಿರಿ ಶಾಖಾ ಮಠದ ಗೌರವ ಕಾರ್ಯದರ್ಶಿ, ಡಾ.ಜೆ.ಎನ್.ರಾಮಕೃಷ್ಣೇಗೌಡ ನೇತೃತ್ವ ವಹಿಸಿದ್ದರು. ಶಾಸಕ ಹೆಚ್. ಟಿ.ಮಂಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಮೃತೂರಿನ ಯಡವಾಣಿಯ ಶ್ರೀರಾಮಲಿಂಗೇಶ್ವರ ಮಠದ ಪೀಠಾಧಿಪತಿ ಶ್ರೀ ಬಸವಾನಂದ ಮಹಾ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಸಮಾಜಸೇವಕ ಮಲ್ಲಿಕಾರ್ಜುನ್ ಭಾಗವಹಿಸಿದ್ದರು.

ನಾಡಿನ ಖ್ಯಾತ ಕಲಾವಿದ ಜೂನಿಯರ್ ವಿಷ್ಣುವರ್ಧನ್ ಅವರು ನೀಡಿದ ಸಾಂಸ್ಕೃತಿಕ ಕಾರ್ಯಕ್ರಮವು ಪೋಷಕರು ಹಾಗೂ ಮಕ್ಕಳನ್ನು ರಂಜಿಸಿತು. ಇದೇ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದು ಸಾಧನೆ ಮಾಡಿರುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ