ಮಂಡ್ಯ ನಗರದಲ್ಲಿ ಡಿ. ೨೦, ೨೧, ೨೨ ರಂದು ಮೂರು ದಿನಗಳ ಕಾಲ ಜರುಗಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯದ ನಾನಾ ಭಾಗಗಳಿಂದ ಸಮ್ಮೇಳನಕ್ಕೆ ನೊಂದಾಯಿಸಿಕೊಂಡು ಆಗಮಿಸುವ ಮಹಿಳೆಯರಿಗೆ ಸೂಕ್ತ ರೀತಿಯಲ್ಲಿ ವಸತಿ ಹಾಗೂ ಎಲ್ಲರಿಗೂ ಊಟದ ವ್ಯವಸ್ಥೆ ಕಲ್ಪಿಸಬೇಕು. ಎಲ್ಲೂ ಲೋಪವಾಗದಂತೆ ನಿಗಾವಹಿಸುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಸಮಿತಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಮಹಿಳೆಯರನ್ನು ಬಹಳ ಗೌರವಯುತವಾಗಿ ನಡೆಸಿಕೊಳ್ಳಬೇಕು ಎಂದು ಸೂಚಿಸಿದರು. ಮೂಲಸೌಕರ್ಯಕ್ಕೆ ಹೆಚ್ಚು ಒತ್ತು ನೀಡಬೇಕು. ಕುಡಿಯುವ ನೀರು, ಶೌಚಾಲಯ, ವಸತಿ ಸ್ಥಳಗಳಲ್ಲಿ ಸ್ವಚ್ಛತೆಗೆ ಆದ್ಯತೆ ಕೊಡಬೇಕು ಎಂದರು.
ಉಚಿತ ಬಸ್ ವ್ಯವಸ್ಥೆ
ಹೊರ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವವರ ವಾಹನಗಳಿಗೆ ಉಮ್ಮಡಹಳ್ಳಿ ಗೇಟ್ ಬಳಿ ಇರುವ ಸತ್ವ ಕಾವೇರಿ ಸಿರಿ ಪ್ಲಾಟ್ ಬಳಿ 10 ಎಕರೆ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ಸಮ್ಮೇಳನ ನಡೆಯುವ ಸ್ಥಳಕ್ಕೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಪಾರ್ಕಿಂಗ್ ಸ್ಥಳದಿಂದ ಜನರನ್ನು ಕರೆತರಲು ಪ್ರತಿ 5 ನಿಮಿಷಕ್ಕೊಮ್ಮೆ ಬಸ್ ವ್ಯವಸ್ಥೆ ಮಾಡಲಾಗಿದೆ. ಮಂಡ್ಯ ಜಿಲ್ಲೆಯ ಸ್ಥಳೀಯರಿಗೆ ಪ್ರತ್ಯೇಕವಾಗಿ 3 ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದು, ಅಲ್ಲಿಂದ ಸಮ್ಮೇಳನಕ್ಕೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದಲೂ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ಮಹಿಳಾ ಸಹಾಯವಾಣಿ
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ಪ್ರತಿಯೊಬ್ಬ ಮಹಿಳೆಯರಿಗೂ ಅನುಕೂಲವಾಗುವಂತೆ ಮಹಿಳಾ ಸಹಾಯವಾಣಿಯನ್ನು ಪ್ರಾರಂಭಿಸಲಾಗುವುದು. ಮಹಿಳಾ ಸಮಿತಿಯಲ್ಲಿ ಉಪ ಸಮಿತಿಗಳನ್ನು ರಚಿಸಿ ಬಹಳ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.
ಎಲ್ಲಾ ಸದಸ್ಯರುಗಳು ಕಡ್ಡಾಯವಾಗಿ ಪಾಸ್ ಪಡೆಯಬೇಕು. ಮಹಿಳಾ ಗೋಷ್ಠಿಗಳಿಗೆ ಸಂಬಂಧಿಸಿದಂತೆ ಸಾಂಸ್ಕೃತಿಕ ಸಮನ್ವಯ ಸಮಿತಿಯೊಂದಿಗೆ ಚರ್ಚಿಸಿ ಅಭಿಪ್ರಾಯಗಳನ್ನು ತಿಳಿಸಿ. ಗೋಷ್ಠಿಗೆ ಬರುವ ಸಂಪನ್ಮೂಲ ವ್ಯಕ್ತಿಗಳಿಗೆ ಉಟ, ವಸತಿ ವ್ಯವಸ್ಥೆ ಕಲ್ಪಿಸಬೇಕು ಎಂದರು.
ಆರೋಗ್ಯ ಸಮಿತಿಗೆ ಸಂಬಂಧಪಟ್ಟಂತೆ ಆರೋಗ್ಯ ಕೇಂದ್ರಗಳನ್ನು ತೆರೆಯಲಾಗುವುದು. ಪ್ರತಿ ಆರೋಗ್ಯ ಕೇಂದ್ರಕ್ಕೂ ವೈದ್ಯರು ಹಾಗೂ ಸಿಬ್ಬಂದಿಗಳನ್ನು ಒಳಗೊಂಡಂತೆ ಆರೋಗ್ಯ ಪರಿಕರಗಳಿರುತ್ತವೆ. ಮಹಿಳೆಯರಿಗೆ ಸಂಬಂಧಪಟ್ಟಂತೆ ಯಾವುದೇ ಸಮಸ್ಯೆಗಳಿದ್ದರೂ ಕೂಡ ಪರಿಹರಿಸಿಕೊಳ್ಳಬಹುದು ಎಂದರು.
ಸಮಿತಿಯ ಸದಸ್ಯರುಗಳು ಮಹಿಳಾ ಸಮಿತಿಗೆ ಸಂಬಂಧಿಸಿದಂತೆ ಅನೇಕ ವಿಚಾರಗಳನ್ನು ಚರ್ಚಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ಮಹಿಳಾ ಸಮಿತಿಯಿಂದ ಉತ್ತಮ ಕಾರ್ಯ
ಮಹಿಳಾ ಸಮಿತಿಯ ಅಧ್ಯಕ್ಷೆ ಸುನಂದಾ ಜಯರಾಮ್ ಅವರು ಮಾತನಾಡಿ, ಮಹಿಳಾ ಸಮಿತಿಯಲ್ಲಿರುವ ಸದಸ್ಯರುಗಳನ್ನು ಸ್ವಯಂ ಸೇವಕರ ಸಮಿತಿ, ನೋಂದಣಿ ಸಮಿತಿ, ಸಾರಿಗೆ ಸಮಿತಿ, ಆಹಾರ ಸಮಿತಿ, ಆರೋಗ್ಯ ಸಮಿತಿ, ಸಾಂಸ್ಕೃತಿಕ ಸಮಿತಿ, ಆಸನ ಸಮಿತಿ, ಸಮನ್ವಯ ಸಮಿತಿ, ವಸತಿ ಸಮಿತಿಗಳಲ್ಲಿ ಕಾರ್ಯ ನಿರ್ವಹಿಸಲು ನೇಮಿಸಲಾಗಿದೆ. ಮಹಿಳಾ ಸಮಿತಿಯಲ್ಲಿ ಉಪಸಮಿತಿಗಳನ್ನು ರಚಿಸಿದ್ದು, ಎಲ್ಲರೂ ಬಹಳ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು ಮುಂದೆಯೂ ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿಭಾಯಿಸಿ ಎಂದರು.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವಾದ್ದರಿಂದ ಕನ್ನಡ ಭಾಷೆ, ಕನ್ನಡ ನಾಡು – ನುಡಿಗೆ ಹೆಚ್ಚು ಒತ್ತು ನೀಡುವ ಗೋಷ್ಠಿಗಳನ್ನು ನಡೆಸುವುದರ ಜೊತೆ ಕೃಷಿ, ಹೆಣ್ಣು ಭ್ರೂಣ ಹತ್ಯೆ, ಮೌಡ್ಯತೆ ಹಾಗೂ ದುಡಿಯುವ ಮಹಿಳೆಯರ ಬಗ್ಗೆ ವಿಚಾರ ಗೋಷ್ಠಿಗಳು ನಡೆಯಬೇಕು ಎಂದು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕಿ ಡಾ. ಮೀರಾಶಿವಲಿಂಗಯ್ಯ, ಮಹಿಳಾ ಸಮಿತಿಯ ಉಪಾಧ್ಯಕ್ಷೆ ಸೌಭಾಗ್ಯ ಮಹದೇವು, ಆಯುಷ್ ಇಲಾಖೆಯ ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಬಿ.ಎಸ್ ಸೀತಾಲಕ್ಷ್ಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.




