ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರರನ್ನಾಗಿ ಮಂಡ್ಯದ ವಕೀಲ ಟಿ.ಎಸ್. ಸತ್ಯಾನಂದ ಅವರನ್ನು ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ.
ಈ ಹಿಂದೆ ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ, ಕೆಪಿಸಿಸಿ ಸದಸ್ಯರಾಗಿ ಹಾಗೂ ಮಂಡ್ಯ ಜಿಲ್ಲಾ ಕಾಂಗ್ರೆಸ್ ನ ವಕ್ತಾರರಾಗಿ ಕಾರ್ಯ ನಿರ್ವಹಿಸಿದ್ದ ಸತ್ಯಾನಂದ ಅವರು ಹಲವು ಜನಪರ ಮತ್ತು ಕಾಂಗ್ರೆಸ್ ಪಕ್ಷದ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ನಿಂತು ನೇತೃತ್ವ ವಹಿಸಿದ್ದರು.
ಪಕ್ಷವನ್ನು ಅಧಿಕಾರಕ್ಕೆ ತರಲು ಶಕ್ತಿ ಮೀರಿ ಶ್ರಮಿಸುವೆ
ಅನಿವಾರ್ಯ ಕಾರಣಗಳಿಂದಾಗಿ ಪಕ್ಷ ತ್ಯಜಿಸಿದ್ದ ತಾನು ಮಾನಸಿಕವಾಗಿ ಕಾಂಗ್ರೆಸ್ ಪಕ್ಷದ ಜೊತೆಯೇ ಇದ್ದೆ, ಆದರೆ ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದೆ. ಡಿ.ಕೆ. ಶಿವಕುಮಾರ್ ರವರ ನೇತೃತ್ವದಲ್ಲಿ ಮರಳಿ ಪಕ್ಷವನ್ನು ಅಧಿಕಾರಕ್ಕೆ ತರಲು ತಾನು ಹಗಲು ರಾತ್ರಿ ಶ್ರಮಿಸುವುದಾಗಿ ತಿಳಿಸಿರುವ ಸತ್ಯಾನಂದ, ಮರಳಿ ಈ ಹಿಂದಿನ ರೀತಿ ಎಲ್ಲಾ ಮುಖಂಡರ ಮಾರ್ಗದರ್ಶನದಲ್ಲಿ ಪಕ್ಷವನ್ನು ಸಂಘಟಿಸುವುದಾಗಿ ತಿಳಿಸಿದ್ದಾರೆ.




