ಜನರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕೆಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ತಿಳಿಸಿದರು.
ನಾಗಮಂಗಲದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಆರೋಗ್ಯ ಮೇಳದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮನುಷ್ಯನಿಗೆ ಉತ್ತಮ ಆರೋಗ್ಯವಿದ್ದಾಗ ಮಾತ್ರ ನೆಮ್ಮದಿ ಇರುತ್ತದೆ.ದುಷ್ಚಟಗಳಿಂದ ದೂರವಿದ್ದು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು. ಆರೋಗ್ಯ ಮೇಳದಲ್ಲಿ ತಪಾಸಣೆಗೆ ಬರುವ ಸಾರ್ವಜನಿಕರಿಗೆ ಹೆಚ್ಚಿನ ಕಾಳಜಿ ವಹಿಸಿ ಅಗತ್ಯವಿರುವ ಚಿಕಿತ್ಸೆ ನೀಡಬೇಕು.
ಅವರಿಗೆ ಚಿಕಿತ್ಸೆಯಲ್ಲಿ ನಿರಾಸೆಯಾಗದ ರೀತಿ ಸೇವೆ ಸಲ್ಲಿಸುವಂತೆ ವೈದ್ಯರು ಹಾಗೂ ಸಿಬ್ಬಂದಿವರ್ಗಕ್ಕೆ ಕರೆ ನೀಡಿದರು. ಜನರ ಆರೋಗ್ಯ ತಪಾಸಣೆಯ ವ್ಯವಸ್ಥೆಗಳ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಜನರಿಗೆ ಉನ್ನತ ಮಟ್ಟದ ಚಿಕಿತ್ಸೆ ನೀಡುವಂತೆ ಸೂಚಿಸಿದರು.
ಸರ್ಕಾರದಿಂದ ಸಿಗುವ ಆರೋಗ್ಯ ಸೌಲಭ್ಯಗಳ ಬಗ್ಗೆ ಜನಸಾಮಾನ್ಯರಿಗೆ ಮಾಹಿತಿ ನೀಡಿ. ಜನರ ಆರೋಗ್ಯವನ್ನು ಪರೀಕ್ಷೆಗೆ ಒಳಪಡಿಸಿದ ನಂತರ ಪಾಲಿಸಬೇಕಿರುವ ಚಿಕಿತ್ಸಾ ವಿಧಾನಗಳ ಬಗ್ಗೆ ಹಾಗೂ ಆರೋಗ್ಯವನ್ನು ಕಾಪಾಡಿಕೊಳ್ಳಲು ಅನುಸರಿಸಬೇಕಾದ ಕ್ರಮವನ್ನು ಬಗ್ಗೆ ತಿಳಿಸಿಕೊಡಿ ಎಂದು ವೈದ್ಯರಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಸುರೇಶ್ ಗೌಡ,ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ ಸೇರಿದಂತೆ ಇತರರು ಉಪಸ್ಥಿತರಿದ್ದರು