Friday, September 13, 2024

ಪ್ರಾಯೋಗಿಕ ಆವೃತ್ತಿ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಜನನಾಯಕರ ಸಹಕಾರ ಸಿಗಲಿ

ಹಲವು ಸೌಲಭ್ಯಗಳ ಕೊರತೆಯ ನಡುವೆಯೂ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು,ಇಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಜನನಾಯಕರು ಹೆಚ್ಚಿನ ಸೌಲಭ್ಯಗಳನ್ನು ಒದಗಿಸಿ ಸಹಕರಿಸಬೇಕೆಂದು ಕರ್ನಾಟಕ ಸಂಘದ ಪ್ರೊ.ಜಯಪ್ರಕಾಶ್ ಗೌಡ ಮನವಿ ಮಾಡಿದರು.

ಮಂಡ್ಯ ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಸಭಾಂಗಣದಲ್ಲಿ ಎಸ್.ಡಿ. ಜಯರಾಂ ಸಮಗ್ರ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹಾಗೂ ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ವತಿಯಿಂದ ನಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ವಿದ್ಯೆ ಜೊತೆಗೆ ನಯ-ವಿನಯ ರೂಢಿಸಿಕೊಳ್ಳಬೇಕು. ಇಲ್ಲದಿದ್ದರೆ ನೀವು ಪಡೆಯುವ ಅಂಕಕ್ಕೆ ಯಾವುದೇ ಬೆಲೆ ಇಲ್ಲ. ಬುದ್ಧ, ಅಂಬೇಡ್ಕರ್, ಬಸವಣ್ಣ ಮುಂತಾದವರು ಜನಾಂಗದ ಉದ್ಧಾರಕ್ಕಾಗಿ ಶ್ರಮಿಸಿದ್ದಾರೆ.ಇನ್ನು ಹತ್ತು ಸಾವಿರ ವರ್ಷಗಳಾದರೂ ಅವರು ಜನಮನದಿಂದ ದೂರವಾಗುವುದಿಲ್ಲ ಎಂದರು.

ನಾಡಪ್ರಭು ಕೆಂಪೇಗೌಡರು ಜಾತ್ಯತೀತ ದೃಷ್ಟಿಕೋನವನ್ನು ಇಟ್ಟುಕೊಂಡು ಕೆಲಸ ಮಾಡಿದವರು. ಬೆಂಗಳೂರು ನಿರ್ಮಿಸುವ ಸಂದರ್ಭದಲ್ಲಿ ಎಲ್ಲ ಜಾತಿ ಜನಾಂಗದ ಕುಶಲಕರ್ಮಿಗಳು ಬೆಂಗಳೂರು ನಗರದಲ್ಲಿ ನೆಲೆಗೊಳ್ಳಲು ಕಾರಣರಾದರು.ಅವರನ್ನು 513 ವರ್ಷಗಳ ನಂತರವೂ ನೆನಪಿಸಿಕೊಳ್ಳುತ್ತೇವೆ ಎಂದರೆ ಅವರ ಜನಪರ ಕಾರ್ಯಗಳಿಂದಲೇ ಹೊರತು ಮತ್ತೇನಲ್ಲ ಎಂದರು.

ಸಮಗ್ರ ವ್ಯಕ್ತಿತ್ವ ರೂಪಿಸಿಕೊಳ್ಳಲಿ

ಕಾರ್ಯಕ್ರಮ ಉದ್ಘಾಟಿಸಿದ ಸಂಸದೆ ಸುಮಲತಾ ಅಂಬರೀಶ್ ಮಾತನಾಡಿ,ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆಯುವುದರ ಜೊತೆಗೆ ಸಮಗ್ರ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು.

ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಸೃಜನಾತ್ಮಕವಾಗಿ ಅಭಿವೃದ್ಧಿ ಹೊಂದಬೇಕೆಂದು ಹಾರೈಸಿದರು.

ಧೀಮಂತ ನಾಯಕ ಎಸ್.ಡಿ.ಜಯರಾಂ ಅವರ ಅಭಿವೃದ್ಧಿ ಕಾರ್ಯಕ್ರಮಗಳು ಇಂದಿಗೂ ಜನರ ಮನಸ್ಸಿನಲ್ಲಿದೆ. ಅಂಬರೀಷ್ ಅವರು ಸಹ ಜನಸಾಮಾನ್ಯರಿಗೆ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದರು ಎಂದು ಸ್ಮರಿಸಿದರು.

ಎಸ್.ಡಿ.ಜಯರಾಂ ಸಂಸ್ಥೆ ವಿದ್ಯಾರ್ಥಿಗಳನ್ನು ಅಭಿನಂದಿಸುತ್ತಿರುವುದು ಪ್ರಶಂಸನೀಯ. ವಿದ್ಯಾರ್ಥಿಗಳು ಇದರಿಂದ ಸ್ಫೂರ್ತಿ ಪಡೆದು ಉತ್ತಮ ಸಾಧನೆ ಮಾಡಿ ಸಮಾಜದ ಆಧಾರ ಸ್ತಂಭವಾಗಿ ನಿಲ್ಲಬೇಕು ಎಂದು ತಿಳಿಸಿದರು.

ಸಮಾರಂಭದಲ್ಲಿ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಎಲ್ಲ ಜನಾಂಗದ ಸುಮಾರು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಐದು ಸಾವಿರ ನಗದು ಬಹುಮಾನ, ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು.ಇದಕ್ಕೂ ಮುನ್ನ ಕೆಂಪೇಗೌಡ ಭಾವಚಿತ್ರಕ್ಕೆ ಗಣ್ಯರು ಪುಷ್ಪ ನಮನ ಸಲ್ಲಿಸಿದರು.

ಸಮಾರಂಭದಲ್ಲಿ ಎಸ್.ಡಿ. ಜಯರಾಂ ಸಮಗ್ರ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಅಶೋಕ್ ಜಯರಾಂ, ಅಂಬರೀಶ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಬೇಲೂರು ಸೋಮಶೇಖರ್, ಉದ್ಯಮಿ ಪ್ರಸನ್ನ, ಶ್ರೀನಿವಾಸಗೌಡ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!