Thursday, October 24, 2024

ಪ್ರಾಯೋಗಿಕ ಆವೃತ್ತಿ

ಉತ್ತರ ಪ್ರದೇಶ | ಹತ್ರಾಸ್ ಕಾಲ್ತುಳಿತ: ಮೃತಪಟ್ಟವರ ಸಂಖ್ಯೆ 107ಕ್ಕೇರಿಕೆ

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಕೊತ್ವಾಲಿ ಸಿಕಂದರಾವ್ ಪ್ರದೇಶದಲ್ಲಿ ಮಂಗಳವಾರ ಸಂಭವಿಸಿದ ಭಾರೀ ಕಾಲ್ತುಳಿತ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 107ಕ್ಕೇರಿದೆ.
 

“107 ಮಂದಿ ಮೃತಪಟ್ಟಿದ್ದಾರೆ. ನಾನೇ ಖುದ್ದಾಗಿ ನನ್ನ ಕೈಯಿಂದ ಎಣಿಸಿದ್ದೇನೆ” ಎಂದು ಘಟನೆಯ ವೇಳೆ ಸ್ಥಳದಲ್ಲಿದ್ದ ವಿನೀತ್ ಎಂಬ ವ್ಯಕ್ತಿ ಉತ್ತರ ಪ್ರದೇಶದ ನ್ಯೂಸ್‌24 ಚಾನೆಲ್‌ಗೆ ಹೇಳಿಕೆ ನೀಡಿದ್ದಾರೆ.

ರತಿಭಾನಪುರದ ಫುಲ್ರೈ ಗ್ರಾಮದಲ್ಲಿ ಭೋಲೆ ಬಾಬಾರವರ ಸತ್ಸಂಗ ನಡೆಯುತ್ತಿತ್ತು. ಸತ್ಸಂಗ ಮುಗಿದ ನಂತರ ಜನಸಮೂಹ ಹೊರಗೆ ಬರುತ್ತಿದ್ದಾಗ ಕಾಲ್ತುಳಿತ ಉಂಟಾಗಿದೆ. ಕಾಲ್ತುಳಿತದ ಸಂದರ್ಭದಲ್ಲಿ ಇದುವರೆಗೆ 60 ಮಂದಿ ಸಾವನ್ನಪ್ಪಿರುವುದು ದೃಢಪಟ್ಟಿರುವುದಾಗಿ ಜಿಲ್ಲಾಡಳಿತ ತಿಳಿಸಿದ್ದರೂ ಕೂಡ, ಸಾವಿನ ಸಂಖ್ಯೆ 107 ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಕಾಲ್ತುಳಿತ ಸಂಭವಿಸಿದ ನಂತರ, ಸಿಎಸ್‌ಸಿ ಸಿಕಂದರಾವ್‌ಗೆ ಮೃತದೇಹಗಳನ್ನು ಸಾಗಿಸಲಾಗಿದೆ. ಏತನ್ಮಧ್ಯೆ, ಗಾಯಾಳುಗಳನ್ನು ಇಟಾಹ್ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ. ಇನ್ನೂ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದುಬಂದಿದ್ದು, ಸೂಕ್ತ ಚಿಕಿತ್ಸೆ ನೀಡುವಂತೆ ತಿಳಿಸಿದ್ದೇವೆ ಎಂದು ಉತ್ತರ ಪ್ರದೇಶದ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

“ಸತ್ಸಂಗಕ್ಕೆ ಅನುಮತಿಯನ್ನೂ ತೆಗೆದುಕೊಂಡಿರಲಿಲ್ಲ. ಹಾಗಾಗಿಯೇ ನೂಕುನುಗ್ಗಲು ಉಂಟಾಗಿ ಈ ದುರ್ಘಟನೆ ಸಂಭವಿಸಿದೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸಿಎಂ ಸಂತಾಪ

ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ಸಿಎಂ ಯೋಗಿ ಅವರು ತಕ್ಷಣ ಹಿರಿಯ ಪೊಲೀಸ್​ ಅಧಿಕಾರಿಗಳನ್ನು ಸ್ಥಳಕ್ಕೆ ಹೋಗುವಂತೆ ಸೂಚಿಸಿದ್ದಾರೆ. ಪರಿಹಾರ ಕಾರ್ಯವನ್ನು ವೇಗಗೊಳಿಸಲು ಮತ್ತು ಗಾಯಾಳುಗಳ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದಾರೆ. ಘಟನೆಯಲ್ಲಿ ಸಾವಪ್ಪಿದವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಸೂಕ್ತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿಗಳು ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಣೆ

ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ಆರ್ಥಿಕ ನೆರವು ನೀಡುವಂತೆ ಸಿಎಂ ಯೋಗಿ ಸೂಚನೆ ನೀಡಿದ್ದಾರೆ. ಅಪಘಾತದ ಕಾರಣಗಳನ್ನು ತನಿಖೆ ಮಾಡಲು ಎಡಿಜಿ, ಕಮಿಷನರ್ ನೇತೃತ್ವದಲ್ಲಿ ತಂಡವನ್ನು ರಚಿಸಲು ಸೂಚನೆಗಳನ್ನು ನೀಡಿದ್ದಾರೆ. ಇದೇ ವೇಳೆ ಕಾರ್ಯಕ್ರಮ ಆಯೋಜಕರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆಯೂ ಸೂಚನೆ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ, ಮೃತಪಟ್ಟವರ ಕುಟುಂಬಕ್ಕೆ ಎರಡು ಲಕ್ಷ ಪರಿಹಾರ ಘೋಷಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!